
ಹೃದಯ (Heart) ದೇಹದ ಅತಿ ಮುಖ್ಯ ಅಂಗವಾಗಿದ್ದು, ಈ ಹೃದಯವು ಸರಿಯಾಗಿ ಕಾರ್ಯನಿರ್ವಹಿಸಿದರೆ ನಾವು ಆರೋಗ್ಯಕರವಾಗಿ ಜೀವನ ನಡೆಸಲು ಸಾಧ್ಯ. ಆದರೆ ಇತ್ತೀಚಿನ ದಿನಗಳಲ್ಲಿ, ಅನಾರೋಗ್ಯಕರ ಜೀವನಶೈಲಿ, ಒತ್ತಡ, ಅನಾರೋಗ್ಯಕರ ಆಹಾರ ಮತ್ತು ದೈಹಿಕ ಚಟುವಟಿಕೆಗಳ ಕೊರತೆಯ ಕಾರಣದಿಂಗಾಗಿ ಹೃದಯ ಸಂಬಂಧಿ ಕಾಯಿಲೆಗಳು ವೇಗವಾಗಿ ಹೆಚ್ಚುತ್ತಿವೆ. ಅದರಲ್ಲೂ ಹೃದಯಾಘಾತದಿಂದ ಮರಣ ಹೊಂದುತ್ತಿರುವವರ ಸಂಖ್ಯೆ ತೀರಾ ಹೆಚ್ಚುತ್ತಿದೆ. ಅದೇ ಉತ್ತಮ ಜೀವನಶೈಲಿ, ಆರೋಗ್ಯಕರ ಆಹಾರ ಪದ್ಧತಿ, ದೈಹಿಕ ಚಟುವಟಿಕೆ ಸೇರಿದಂತೆ ಆರೋಗ್ಯಕರ ಅಭ್ಯಾಸಗಳನ್ನು ಅಳವಡಿಸಿಕೊಳ್ಳುವ ಮೂಲಕ ಹೃದಯದ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಬಹುದು. ಹಾಗಾಗಿ ಇದರ ಬಗ್ಗೆ ಜನರಲ್ಲಿ ಹೆಚ್ಚಿನ ಅರಿವನ್ನು ಮೂಡಿಸುವ ಸಲುವಾಗಿ, ಹೃದಯ ಸಂಬಂಧಿ ಕಾಯಿಲೆಗಳ ತಡೆಗಟ್ಟುವಿಕೆಯ ಬಗ್ಗೆ ಜನರಲ್ಲಿ ಜಾಗೃತಿಯನ್ನು ಮೂಡಿಸುವ ಸಲುವಾಗಿ ಪ್ರತಿವರ್ಷ ಸೆಪ್ಟೆಂಬರ್ 29 ರಂದು ವಿಶ್ವ ಹೃದಯ (World Heart Day) ದಿನವನ್ನು ಆಚರಿಸಲಾಗುತ್ತದೆ.
ವಿಶ್ವ ಹೃದಯ ದಿನವನ್ನು 2000 ರಲ್ಲಿ ವಿಶ್ವ ಹೃದಯ ಒಕ್ಕೂಟವು ಪ್ರಾರಂಭಿಸಿತು. ವರ್ಲ್ಡ್ ಹರ್ಟ್ ಫೆಡರೇಶನ್ ಮಾಜಿ ಅಧ್ಯಕ್ಷ ಆಂಟೋನಿ ಬೇಯೆಸ್ ಡಿ ಲೂನಾ ಅವರು ವಿಶ್ವ ಹೃದಯ ದಿನವನ್ನು ಆಚರಿಸುವ ಪರಿಕಲ್ಪನೆಯನ್ನು ಪರಿಚಯಿಸಿದರು. ಇವರ ಪರಿಕಲ್ಪನೆಯಡಿಯಲ್ಲಿ ವರ್ಲ್ಡ್ ಹರ್ಟ್ ಫೆಡರೇಶನ್ (WHF) ಮತ್ತು ವಿಶ್ವ ಆರೋಗ್ಯ ಸಂಸ್ಥೆ (WHO) ಜಂಟಿಯಾಗಿ ವಿಶ್ವ ಹೃದಯ ದಿನದ ಆಚರಣೆಯನ್ನು 24 ಸೆಪ್ಟೆಂಬರ್ 2000 ರಂದು ಪ್ರಾರಂಭಿಸಿತು. ನಂತರ ಪ್ರತಿವರ್ಷ ಸೆಪ್ಟೆಂಬರ್ ತಿಂಗಳ ಕೊನೆಯ ಭಾನುವಾರದಂದು ವಿಶ್ವ ಹೃದಯ ದಿನವನ್ನು ಆಚರಿಸಲಾಗುತ್ತಿತ್ತು. 2014 ರಿಂದ ವಿಶ್ವ ಹೃದಯ ದಿನವನ್ನು ಸೆಪ್ಟೆಂಬರ್ 29 ರಂದು ಆಚರಿಸಲು ಪ್ರಾರಂಭಿಸಲಾಯಿತು. ಹೃದಯ ಸಂಬಂಧಿ ಕಾಯಿಲೆಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವುದು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಜನರನ್ನು ಪ್ರೋತ್ಸಾಹಿಸುವುದು ವಿಶ್ವ ಹೃದಯ ದಿನವನ್ನು ಆಚರಿಸುವ ಮುಖ್ಯ ಉದ್ದೇಶವಾಗಿದೆ.
ಹೃದಯ ಸಂಬಂಧಿ ಕಾಯಿಲೆ ಮತ್ತು ಅದನ್ನು ಹೇಗೆ ತಡೆಗಟ್ಟುವುದು ಎಂಬುದರ ಕುರಿತು ಜನರಿಗೆ ಶಿಕ್ಷಣ ನೀಡುವುದು ಈ ದಿನದ ಉದ್ದೇಶ. ಹೃದಯ ಕಾಯಿಲೆಯು ವಯಸ್ಸಾದವರ ಮೇಲೆ ಮಾತ್ರ ಪರಿಣಾಮ ಬೀರುತ್ತದೆ ಎಂದು ನಾವು ಹೆಚ್ಚಾಗಿ ಭಾವಿಸುತ್ತೇವೆ, ಆದರೆ ಇತ್ತೀಚಿನ ದಿನಗಳಲ್ಲಿ, ಯುವಜನರು, ಮಕ್ಕಳು ಸಹ ಹೃದಯ ಸಂಬಂಧಿ ಕಾಯಿಲೆಗಳಿಗೆ ತುತ್ತಾಗುತ್ತಿದ್ದಾರೆ. ಈ ನಿಟ್ಟಿನಲ್ಲಿ ಹೃದಯ ಸಂಬಂಧಿ ಕಾಯಿಲೆಗಳನ್ನು ತಡೆಗಟ್ಟಲು ಮತ್ತು ಅದನ್ನು ನಿಯಂತ್ರಿಸಲು ಜನರು ತೆಗೆದುಕೊಳ್ಳಬಹುದಾದ ಕ್ರಮಗಳ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ.
2025 ರ ವಿಶ್ವ ಹೃದಯ ದಿನಕ್ಕಾಗಿ “ಡೋಂಟ್ ಮಿಸ್ ಎ ಬೀಟ್” ಎಂಬ ಥೀಮ್ ಆಯ್ಕೆ ಮಾಡಲಾಗಿದೆ. ಹೃದಯ ಸಮಸ್ಯೆಗಳ ಎಚ್ಚರಿಕೆ ಚಿಹ್ನೆಗಳನ್ನು ನಿರ್ಲಕ್ಷಿಸದಿರುವುದು, ಆರೋಗ್ಯಕರ ಮತ್ತು ಸಮತೋಲಿತ ಆಹಾರವನ್ನು ಸೇವಿಸುವುದು ಮತ್ತು ನಿಯಮಿತವಾಗಿ ವ್ಯಾಯಾಮ ಮಾಡುವುದು ಸೇರಿದಂತೆ ಹೃದಯ ಆರೋಗ್ಯದ ಬಗ್ಗೆ ಜನರು ಪೂರ್ವಭಾವಿ ಕ್ರಮಗಳನ್ನು ತೆಗೆದುಕೊಳ್ಳುವ ಮಹತ್ವವನ್ನು ಈ ವಿಷಯವು ಒತ್ತಿಹೇಳುತ್ತದೆ.
ಇದನ್ನೂ ಓದಿ: ಕರ್ನಾಟಕದ 41,000 ಮಕ್ಕಳಲ್ಲಿ ಜನ್ಮಜಾತ ಹೃದಯ ಕಾಯಿಲೆ: ಸಮೀಕ್ಷೆಯಲ್ಲಿ ಬಯಲಾಯ್ತು ಆಘಾತಕಾರಿ ಅಂಶ
ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ