ಬೆಂಗಳೂರು, ಆಗಸ್ಟ್ 17: ಈ ವರ್ಷ ಮುಂಗಾರು (Monsoon) ಅವಧಿಯಲ್ಲಿ ಇದುವರೆಗೆ ರಾಜ್ಯದಲ್ಲಿ ಶೇ 14 ರಷ್ಟು ಮಳೆ ಕೊರತೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಅಧಿಕಾರಿಗಳು ತಿಳಿಸಿದ್ದಾರೆ. ಅದೇ ರೀತಿ ಸೆಪ್ಟೆಂಬರ್‌ನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದೂ ತಿಳಿಸಿದ್ದಾರೆ. ಸೆಪ್ಟೆಂಬರ್ 1-7ರವರೆಗೆ ರಾಜ್ಯದಾದ್ಯಂತ ಸಾಧಾರಣ ಮಳೆಯಾಗಲಿದೆ ಎಂದು ಅವರು ಮುನ್ಸೂಚನೆ ನೀಡಿದ್ದಾರೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಕ್ರಮವಾಗಿ ಶೇ 11 ಮತ್ತು 23 ರಷ್ಟು ಮಳೆ ಕೊರತೆ ವರದಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಜೂನ್‌ನಿಂದ ಇಲ್ಲಿಯವರೆಗೆ ವಾಡಿಕೆಯಂತೆ 57.3 ಸೆಂಮೀ ವಾಡಿಕೆ ಮಳೆಯಾಗಬೇಕಿತ್ತು. ಆದರೆ ಈ ಅವಧಿಯಲ್ಲಿ ಕರ್ನಾಟಕದಲ್ಲಿ 49.6 ಸೆಂಮೀ ಮಳೆಯಾಗಿದೆ. ಇದು ಶೇ 14ರಷ್ಟು ಕೊರತೆ ತೋರಿಸಿದೆ. ಸೆಪ್ಟೆಂಬರ್ 1 ರಿಂದ 7 ರವರೆಗೆ ರಾಜ್ಯದಲ್ಲಿ 5 ರಿಂದ 10 ಮಿಮೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿರುವುದಾಗಿ ವರದಿಯಾಗಿದೆ.
ಆಗಸ್ಟ್ 20 ರ ಭಾನುವಾರದವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಮುನ್ಸೂಚನೆಯು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಅನ್ವಯವಾಗಲಿದೆ ಎಂದು ಇಲಾಖೆ ತಿಳಿಸಿದೆ. ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ನಗರದ ಕೆಲವು ಪ್ರದೇಶಗಳಲ್ಲಿ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.
ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 20 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದೆ.
ಇದನ್ನೂ ಓದಿ: ಉತ್ತರ ಕರ್ನಾಟಕ ರೈತರಿಗೆ ಸಿಹಿ ಸುದ್ದಿ; ಮಳೆ ಕೊರತೆಯ ನಡುವೆಯೂ ಭರ್ತಿಯಾಯ್ತು ಆಲಮಟ್ಟಿ ಜಲಾಶಯ
ಕರಾವಳಿ ಕರ್ನಾಟಕ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾನುವಾರದವರೆಗೆ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬೀದರ್, ಕಲಬುರಗಿ ಸೇರಿದಂತೆ ಉತ್ತರ ಒಳನಾಡಿನಲ್ಲಿ ಭಾನುವಾರದವರೆಗೆ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ