ಕರ್ನಾಟಕದಲ್ಲಿ 2305 ಕಿ.ಮೀ.ಹೈವೇ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ: ನಿತಿನ್ ಗಡ್ಕರಿ
ಕರ್ನಾಟಕದಲ್ಲಿ 48,428 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಸುಮಾರು 2,305 ಕಿಲೋ ಮೀಟರ್ ಉದ್ದದ ಒಟ್ಟು 93 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ. ಈ ಬಗ್ಗೆ ಸ್ವತಃ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರು ಇಂದು ರಾಜ್ಯಸಭೆಯಲ್ಲಿ ತಿಳಿಸಿದ್ದಾರೆ. ರಾಜ್ಯದಲ್ಲಿ ಯಾವ್ಯಾವ ಹೆದ್ದಾರಿಗಳು ಪ್ರಗತಿಯಲ್ಲಿವೆ ಎನ್ನುವ ಸಚಿವರು ಮಾಹಿತಿ ನೀಡಿದ್ದಾರೆ.

ನವದೆಹಲಿ, (ಆಗಸ್ಟ್ 20): ಕರ್ನಾಟಕ ರಾಜ್ಯದಲ್ಲಿ ಸುಮಾರು 48,428 ಕೋಟಿ ರೂಪಾಯಿ ಅಂದಾಜು ವೆಚ್ಚದಲ್ಲಿ ಸುಮಾರು 2,305 ಕಿಲೋ ಮೀಟರ್ ಉದ್ದದ ಒಟ್ಟು 93 ರಾಷ್ಟ್ರೀಯ ಹೆದ್ದಾರಿ ಯೋಜನೆಗಳು ಅನುಷ್ಠಾನ ಹಂತದಲ್ಲಿವೆ ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ರಾಜ್ಯಸಭೆಯಲ್ಲಿ ಇಂದು (ಆಗಸ್ಟ್ 20) ನಾರಾಯಣಸಾ ಕೆ. ಭಾಂಡ್ಗೆ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಡ್ಡಾ, ಯೋಜನೆಯ ಅವಶ್ಯಕತೆಗಳ ಆಧಾರದ ಮೇಲೆ ಹಣವನ್ನು ಹಂಚಿಕೆ ಮಾಡಲಾಗುತ್ತದೆ ಮತ್ತು ಕೆಲಸದ ಪ್ರಗತಿಗೆ ಅನುಗುಣವಾಗಿ ಬಿಡುಗಡೆ ಮಾಡಲಾಗುತ್ತದೆ ಮತ್ತು ಸಕಾಲಿಕ ಅನುಷ್ಠಾನವನ್ನು ಖಚಿತಪಡಿಸಿಕೊಳ್ಳಲು ಸಾಕಷ್ಟು ಹಣ ಲಭ್ಯವಿದೆ ಎಂದರು.
ರಾಷ್ಟ್ರೀಯ ಹೆದ್ದಾರಿ-52 (ಹಳೆಯ ರಾಷ್ಟ್ರೀಯ ಹೆದ್ದಾರಿ -218) ರ ವಿಜಯಪುರ-ಹುಬ್ಬಳ್ಳಿ ವಿಭಾಗದ ಚತುಷ್ಪಥ ರಸ್ತೆಗಾಗಿ ವಿವರವಾದ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸುವುದನ್ನು ಪ್ರಸಕ್ತ ವರ್ಷದ ವಾರ್ಷಿಕ ಯೋಜನೆ 2025-26 ರಲ್ಲಿ ಸೇರಿಸಲಾಗಿದೆ ಎಂದು ಉತ್ತರಿಸಿದರು.
ಇನ್ನು ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಅಂದರೆ ಎನ್ ಎಚ್ -52, ಎನ್ ಎಚ್ -367, ಎನ್ ಎಚ್ -50 ಮತ್ತು ಎನ್ ಎಚ್ -748ಎ ಕರ್ನಾಟಕದ ಬಾಗಲಕೋಟೆ ಜಿಲ್ಲೆಯ ಮೂಲಕ ಹಾದು ಹೋಗುತ್ತವೆ ಎಂದು ಉತ್ತರಿಸಿದರು.
ರಾಜ್ಯದ ರಾಷ್ಟ್ರೀಯ ಹೆದ್ದಾರಿ ಯೋಜನೆಗಳನ್ನು ಪರಿಶೀಲಿಸಲು ಮುಖ್ಯ ಕಾರ್ಯದರ್ಶಿಗಳ ಅಧ್ಯಕ್ಷತೆಯಲ್ಲಿ ರಾಜ್ಯಮಟ್ಟದ ಸಮಿತಿ ಅಸ್ತಿತ್ವದಲ್ಲಿದೆ. ಇದಲ್ಲದೆ, ರಸ್ತೆ ಮೂಲಸೌಕರ್ಯ ಯೋಜನೆಗಳ ಸಕಾಲಿಕ ಅನುಷ್ಠಾನಕ್ಕಾಗಿ ಪರಿಣಾಮಕಾರಿ ಸಮನ್ವಯವನ್ನು ಖಚಿತಪಡಿಸಿಕೊಳ್ಳಲು ವಿವಿಧ ಹಂತಗಳಲ್ಲಿ ನಿಯಮಿತ ಪರಿಶೀಲನಾ ಸಭೆಗಳನ್ನು ನಡೆಸಲಾಗುತ್ತದೆ ಎಂದು ತಿಳಿಸಿದರು.




