ಬೆಂಗಳೂರು: ವೃತ್ತಿಪರ ಶಿಕ್ಷಣಕ್ಕೆ ಸನ್ನದ್ಧರಾಗುವ ಹಂತದಲ್ಲಿರುವ ದ್ವಿತೀಯ ಪಿಯು ವಿದ್ಯಾರ್ಥಿಗಳಿಗೆ ಯಾವುದಾದರೂ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಬೇಕಾದ ಅನಿವಾರ್ಯ ಇದೆ. ಕೊವಿಡ್ ನಿಯಂತ್ರಣಕ್ಕೆ ಬಂದ ಬಳಿಕ ಪರೀಕ್ಷೆಗಳನ್ನು ನಡೆಸುವುದು ಸೂಕ್ತವಾಗಿದ್ದು, ಮುಂಚೆಯೇ ಪರೀಕ್ಷೆಗಳ ದಿನಾಂಕವನ್ನು ಪ್ರಕಟಿಸಲು ತೀರ್ಮಾನಿಸಲಾಗಿದೆ ಎಂದು ರಾಜ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ಸೇರಿದಂತೆ ಎಲ್ಲಾ ರಾಜ್ಯಗಳ ಶಿಕ್ಷಣ ಸಚಿವರು ಉಪಸ್ಥಿತರಿದ್ದ ಸಭೆಯಲ್ಲಿ ಸಚಿವ ಸುರೇಶ್ ಕುಮಾರ್ ಈ ಅಭಿಪ್ರಾಯಪಟ್ಟಿದ್ದಾರೆ.
ರಾಜ್ಯದಲ್ಲಿ ದ್ವಿತೀಯ ಪಿಯು ಪರೀಕ್ಷೆಗೆ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವ ಕಾರ್ಯ ಪೂರ್ಣಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತಿದೆ. ಅತ್ಯಂತ ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಪೂರ್ವ ಸಿದ್ಧತೆಗಳನ್ನು ತೆಗೆದುಕೊಳ್ಳಲಾಗಿದೆ. ಒಂದು ವೇಳೆ ಜುಲೈ ತಿಂಗಳಲ್ಲಿ ಪರೀಕ್ಷೆಗಳನ್ನು ನಡೆಸಲು ಸಾಧ್ಯವಾದಲ್ಲಿ ಆಗಸ್ಟ್ನಲ್ಲಿ ಪರೀಕ್ಷಾ ಫಲಿತಾಂಶವನ್ನು ಘೋಷಿಸಲು ಸಾಧ್ಯವಾಗುತ್ತದೆ. ಹಾಗಾಗಿ ನೀಟ್/ಜೆಇಇ/ಸಿಇಟಿ/ಐಸಿಎಆರ್/ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆಗಸ್ಟ್ ಮಾಹೆಯ ಸೂಕ್ತ ದಿನಾಂಕಗಳಂದು ಆಯೋಜಿಸಬಹುದಾಗಿದೆಯೆಂದೂ ಸಚಿವ ಸುರೇಶ್ ಕುಮಾರ್ ಸಲಹೆ ನೀಡಿದರು. ಕೇಂದ್ರ ಸರ್ಕಾರದ ಈ ರೀತಿಯ ಸಮಾಲೋಚನಾ ಸಭೆಯು ಅಭಿನಂದನಾರ್ಹ ಪ್ರಯತ್ನ. ಇಂತಹ ಪ್ರಯತ್ನಗಳು ಸಂಕಷ್ಟದ ಸಂದರ್ಭದಲ್ಲಿ ಇಡೀ ನಾಗರಿಕ ಸಮಾಜಕ್ಕೆ ವಿಶ್ವಾಸವನ್ನು ಮೂಡಿಸುವಂತಹದ್ದಾಗಿವೆ ಎಂದೂ ಸುರೇಶ್ ಕುಮಾರ್ ಹೇಳಿದರು.
ಕೊವಿಡ್ ಕಾರಣಕ್ಕಾಗಿ ವಾರ್ಷಿಕ ಪರೀಕ್ಷೆಯನ್ನು ತೆಗೆದುಕೊಳ್ಳಲು ವಿಫಲರಾಗುವ ವಿದ್ಯಾರ್ಥಿಗಳಿಗೆ ಹೊಸದಾಗಿ ಇನ್ನೊಮ್ಮೆ ಪರೀಕ್ಷೆ ಬರೆಯಲು ಇದೇ ಸಾಲಿನಲ್ಲಿ ಅವಕಾಶ ಕಲ್ಪಿಸಲು ಸರ್ಕಾರವು ಯೋಜನೆ ರೂಪಿಸಿದೆ. ಪರೀಕ್ಷಾ ಪ್ರಕ್ರಿಯೆ ಸರಳೀಕರಣಗೊಳ್ಳಬೇಕೆಂದು ಹಲವರು ಪ್ರತಿಪಾದಿಸಿದ್ದಾರೆ. ಸರಳೀಕೃತ ಮಾದರಿಯಲ್ಲಿ ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳಿಸಲು 45 ದಿನಗಳ ಕಾಲಾವಕಾಶ ಅಗತ್ಯವಿದೆ. ಕೇಂದ್ರ ಶಿಕ್ಷಣ ಇಲಾಖೆಯೂ ಕಡಿಮೆ ಅವಧಿಯ ಪರೀಕ್ಷೆಗಳನ್ನು ನಡೆಸುವ ಯೋಜನೆಯನ್ನು ಸಲಹಾತ್ಮಕವಾಗಿ ತಿಳಿಸಿದೆ ಎಂದು ಅವರು ತಿಳಿಸಿದ್ದಾರೆ.
ರಾಜ್ಯಕ್ಕೆ ಕಳೆದ ಸಾಲಿನಲ್ಲಿ ಕೊವಿಡ್ ಸಂದರ್ಭದಲ್ಲಿಯೂ ಎಸ್.ಎಸ್.ಎಲ್.ಸಿ ಪರೀಕ್ಷೆಗಳನ್ನು ನಡೆಸಿದ ಅನುಭವ ಇದೆ, ಈ ಅನುಭವದ ಹಿನ್ನೆಲೆಯಲ್ಲಿ ಈ ಬಾರಿಯ ದ್ವಿತೀಯ ಪಿಯು ಪರೀಕ್ಷೆಗಳನ್ನು ಸಮರ್ಥವಾಗಿ ಆಯೋಜಿಸುವ ಯೋಜನೆಯನ್ನು ಸರ್ಕಾರ ಹೊಂದಿದೆ. ದ್ವಿತೀಯ ಪಿಯು ಪರೀಕ್ಷೆಗಳಿಗೆ ರಾಜ್ಯದಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಸಿದ್ಧಪಡಿಸುವ ಕಾರ್ಯ ಪೂರ್ಣಗೊಂಡಿದೆ. ಪರೀಕ್ಷಾ ಕೇಂದ್ರಗಳನ್ನು ಗಣನೀಯವಾಗಿ ಹೆಚ್ಚಿಸಲಾಗುತ್ತಿದೆ. ಅತ್ಯಂತ ಸುರಕ್ಷಿತವಾಗಿ ಪರೀಕ್ಷೆಗಳನ್ನು ನಡೆಸಲು ಎಲ್ಲ ಪೂರ್ವ ಸಿದ್ಧತೆಗಳನ್ನು ತೆಗೆದುಕೊಳ್ಳಲಾಗಿದೆ. ಜುಲೈ ಅಥವಾ ಅಗಸ್ಟ್ ನಲ್ಲಿ ಪರೀಕ್ಷೆಗಳನ್ನು ನಡೆಸಿ, ಪರೀಕ್ಷಾ ಫಲಿತಾಂಶವನ್ನು ಘೋಷಿಸಲು ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಅವರು ಉನ್ನತ ಮಟ್ಟದ ಸಭೆಗೆ ತಿಳಿಸಿದ್ದಾರೆ.
(2nd PU exam question papers are ready to conduct exams after Covid 19 situation in Control says Education Minister Suresh Kumar)
Published On - 3:56 pm, Sun, 23 May 21