AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ, ಡಿಸಿಎಂ, ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್‌

40 percent commission: ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಭ್ರಷ್ಟಾಚಾರದ ರೇಟ್ ಕಾರ್ಡ್‌ ಜಾಹೀರಾತು ನೀಡಿದ್ದಕ್ಕೆ ಸಂಬಂಧಪಟ್ಟಂತೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಮತ್ತು ರಾಹುಲ್ ಗಾಂಧಿಗೆ ವಿಚಾರಣೆಗೆ ಹಾಜರಾಗುವಂತೆ ಜನಪ್ರತಿನಿಧಿಗಳ ನ್ಯಾಯಾಲಯವು ಸಮನ್ಸ್‌ ಜಾರಿ ಮಾಡಿದೆ.

ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಕಮಿಷನ್‌ ಜಾಹೀರಾತು: ಸಿಎಂ, ಡಿಸಿಎಂ, ರಾಹುಲ್ ಗಾಂಧಿಗೆ ಕೋರ್ಟ್ ಸಮನ್ಸ್‌
ಡಿಕೆ ಶಿವಕುಮಾರ್, ರಾಹುಲ್ ಗಾಂಧಿ, ಸಿದ್ದರಾಮಯ್ಯ
TV9 Web
| Updated By: ರಮೇಶ್ ಬಿ. ಜವಳಗೇರಾ|

Updated on: Mar 28, 2024 | 3:55 PM

Share

ಬೆಂಗಳೂರು, (ಮಾರ್ಚ್ 28): ಕಳೆದ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಸಭೆ ಚುನಾವಣೆ (Karnataka Assembly Elections 2023) ವೇಳೆ 40 ಪರ್ಸೆಂಟ್‌ ಕಮಿಷನ್ (40 percent commission) ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ನ್ಯಾಯಾಲಯವು ರಾಹುಲ್ ಗಾಂಧಿ, ಸಿಎಂ ಸಿದ್ದರಾಮಯ್ಯ(siddaramaiah), ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ (DK Shivakumar) ಸಮನ್ಸ್​ ಜಾರಿ ಮಾಡಿದೆ. ಬಿಜೆಪಿ ವಿರುದ್ಧ 40 ಪರ್ಸೆಂಟ್‌ ಭ್ರಷ್ಟಾಚಾರದ ರೇಟ್ ಕಾರ್ಡ್‌ ಜಾಹೀರಾತು ನೀಡಿದ್ದಕ್ಕೆ ಸಂಬಂಧಪಟ್ಟಂತೆ ಬಿಜೆಪಿ ಸಲ್ಲಿಸಿದ್ದ ಮಾನನಷ್ಟ ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ಗೆ ಏಪ್ರಿಲ್ 29ಕ್ಕೆ ಕೋರ್ಟ್‌ಗೆ ಹಾಜರಾಗುವಂತೆ ಸಮನ್ಸ್​ ನೀಡಿದ್ದರೆ, ರಾಹುಲ್ ಗಾಂಧಿಗೆ ಜೂನ್​ 1ಕ್ಕೆ ಹಾಜರಾಗಲು ಸೂಚಿಸಲಾಗಿದೆ.

ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್‌ ಅವರಿಗೆ ಸಮನ್ಸ್ ಜಾರಿ ಮಾಡುವಂತೆ ಕೋರ್ಟ್‌ ಪೊಲೀಸರಿಗೆ ಸೂಚನೆ ನೀಡಿದೆ. ಡಿಸಿಎಂಗೆ ಸಮನ್ಸ್ ಜಾರಿ ಮಾಡಲು ಸದಾಶಿವನಗರ ಪೊಲೀಸರಿಗೆ ಸೂಚನೆ ನೀಡಿದರೆ, ಸಿಎಂಗೆ ಸಮನ್ಸ್ ಜಾರಿ ಮಾಡಲು ಹೈಗ್ರೌಂಡ್ಸ್ ಪೊಲೀಸರಿಗೆ ನಿರ್ದೇಶನ ನೀಡಿದೆ.

ಜೂ. 1ಕ್ಕೆ ಹಾಜರಾಗಲು ರಾಹುಲ್‌ಗೆ ಸೂಚನೆ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ನಿಮಿತ್ತ ಕೋರ್ಟ್‌ಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ. ಹೀಗಾಗಿ ಕೆಲವು ಸಮಯ ವಿನಾಯಿತಿ ನೀಡಬೇಕು ಎಂದು ಕೋರ್ಟ್‌ಗೆ ಪರ ವಕೀಲರು ಅರ್ಜಿ ಸಲ್ಲಿಸಿದರು. ಹೀಗಾಗಿ ರಾಹುಲ್ ಗಾಂಧಿ ಅವರು ಜೂನ್ 1ರಂದು ಕೋರ್ಟ್‌ಗೆ ಹಾಜರಾಗುವಂತೆ ನ್ಯಾ.ಜೆ. ಪ್ರೀತ್ ಅವರು ಆದೇಶಿಸಿದ್ದಾರೆ.

ಜಾಹೀರಾತು ವಿರುದ್ಧ ದೂರು ನೀಡಿದ್ದ ಬಿಜೆಪಿ

ಕಳೆದ ವಿಧಾನಸಭಾ ಚುನಾವಣೆ ವೇಳೆ ಬಿಜೆಪಿ ಭ್ರಷ್ಟಾಚಾರ ಮಾಡಿದೆ ಎಂದು ಕಾಂಗ್ರೆಸ್‌ ಜಾಹೀರಾತು ಪ್ರಕಟಿಸಿದ್ದ ಪ್ರಕರಣಕ್ಕೆ ಸಂಬಂಧಿಸಿ ಬಿಜೆಪಿ ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು. ಕೆಪಿಸಿಸಿ ಹಾಗೂ ಕಾಂಗ್ರೆಸ್‌ ನಾಯಕರು ಬಿಜೆಪಿ ವಿರುದ್ಧ ಸುಳ್ಳು ಆರೋಪಗಳ ಜಾಹೀರಾತು ನೀಡಿ ಪಕ್ಷದ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಇದರಿಂದ ಪಕ್ಷಕ್ಕೆ ಹಾನಿಯಾಗಿದೆ. ಈ ನಿಟ್ಟಿನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಕೋರಿ ನ್ಯಾಯಾಲಯದಲ್ಲಿ ರಾಜ್ಯ ಕಾರ್ಯದರ್ಶಿ ಎಸ್‌. ಶಿವಪ್ರಸಾದ್‌ ಖಾಸಗಿ ದೂರು ಸಲ್ಲಿಸಿದ್ದರು. ದೂರಿನಲ್ಲಿ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್‌, ರಾಹುಲ್‌ ಗಾಂಧಿ, ಕೆಪಿಸಿಸಿ ಮತ್ತಿತರರನ್ನು ಪ್ರತಿವಾದಿಗಳನ್ನಾಗಿ ಮಾಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ