ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ 50-75ರಷ್ಟು ಉದ್ಯೋಗ ಮೀಸಲಾತಿ: ಮಸೂದೆಗೆ ಸಂಪುಟ ಅನುಮೋದನೆ

Reservation for Kannadigas; ವಿಧಾನಮಂಡಲದ ಮುಂಗಾರು ಅಧಿವೇಶನದ ಸಂದರ್ಭದಲ್ಲಿಯೇ ರಾಜ್ಯ ಸರ್ಕಾರ ಕನ್ನಡಿಗರಿಗೆ ಗುಡ್ ನ್ಯೂಸ್ ನೀಡಿದೆ. ರಾಜ್ಯದಲ್ಲಿ ಖಾಸಗಿ ಕ್ಷೇತ್ರದ ಸಂಸ್ಥೆಗಳಲ್ಲಿ ಶೇ 50-75ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡುವುದನ್ನು ಕಡ್ಡಾಯಗೊಳಿಸುವ ಮಸೂದೆಗೆ ಸಂಪುಟ ಅನುಮೋದನೆ ನೀಡಿದೆ. ಸದ್ಯದಲ್ಲೇ ಇದು ವಿಧಾನಸಭೆಯಲ್ಲಿ ಮಂಡನೆಯಾಗಲಿದೆ. ಹೊಸ ಮಸೂದೆಯ ಕುರಿತ ಮಾಹಿತಿ ಇಲ್ಲಿದೆ.

ಖಾಸಗಿ ಕಂಪನಿಗಳಲ್ಲಿ ಕನ್ನಡಿಗರಿಗೆ ಶೇ 50-75ರಷ್ಟು ಉದ್ಯೋಗ ಮೀಸಲಾತಿ: ಮಸೂದೆಗೆ ಸಂಪುಟ ಅನುಮೋದನೆ
ಖಾಸಗಿ ವಲಯದಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲಾತಿ: ಮಸೂದೆಗೆ ಸಂಪುಟ ಅನುಮೋದನೆ
Follow us
|

Updated on:Jul 17, 2024 | 10:05 AM

ಬೆಂಗಳೂರು, ಜುಲೈ 17: ಕರ್ನಾಟಕದಲ್ಲಿ ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ 50 ರಿಂದ ಶೇ 75ರ ವರೆಗೆ ಮೀಸಲಾತಿ ನೀಡುವುದಕ್ಕೆ ಸಂಬಂಧಿಸಿದ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್​​ನಲ್ಲಿ ಈ ಬಗ್ಗೆ ಸಂದೇಶ ಪ್ರಕಟಿಸಿರುವ ಅವರು, ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು‌ ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ವಿಷಯವನ್ನು ನಿಮ್ಮೆಲ್ಲರಲ್ಲಿ ಹಂಚಿಕೊಳ್ಳಲು ಖುಷಿಯಾಗುತ್ತಿದೆ ಎಂದು ಉಲ್ಲೇಖಿಸಿದ್ದಾರೆ.

ಈ ವಿಧೇಯಕದ ಜಾರಿಯಿಂದ ರಾಜ್ಯದಲ್ಲಿರುವ ಖಾಸಗಿ ವಲಯದ ಉದ್ಯೋಗಗಳಲ್ಲಿ ಕನ್ನಡಿಗರಿಗೆ ಶೇ 50 ರಿಂದ ಶೇ 75ರ ವರೆಗೆ ಮೀಸಲಾತಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

ಸಂತೋಷ್ ಲಾಡ್ ಎಕ್ಸ್ ಸಂದೇಶ

ಖಾಸಗಿ ವಲಯಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಮೀಸಲು ಕಲ್ಪಿಸುವ ವಿಧೇಯಕಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾದ ವಿಷಯವನ್ನು ನಿಮ್ಮೊಂದಿಗೆ ಹಂಚಿಕೊಳ್ಳಲು ತುಂಬ ಖುಷಿಯಾಗುತ್ತಿದೆ. ಈ ವಿಧೇಯಕದಿಂದ ಶೇ 50 ರಷ್ಟು ಮ್ಯಾನೇಜ್ ಮೆಂಟ್ ಹುದ್ದೆಗಳು ಹಾಗೂ ಶೇ 75 ರಷ್ಟು ನಾನ್ ಮ್ಯಾನೇಜ್ ಮೆಂಟ್ ಹುದ್ದೆಗಳಲ್ಲಿ ಸ್ಥಳಿಯರಿಗೆ ಮೀಸಲಾತಿ ಸಿಗಲಿದೆ ಎಂದು ಅವರು ತಿಳಿಸಿದ್ದಾರೆ.

ಮೀಸಲಾತಿಗೆ ಯಾರು ಅರ್ಹರು?

ಕರ್ನಾಟಕದಲ್ಲಿ ಹುಟ್ಟಿದವರು, ಕರ್ನಾಟಕದಲ್ಲಿ 15 ವರ್ಷಗಳಿಂದ ವಾಸಿಸುತ್ತಿರುವವರು, ಕನ್ನಡ ಭಾಷೆಯಲ್ಲಿ ಮಾತಾಡಲು, ಓದಲು ಹಾಗೂ ಬರೆಯಲು ಬರುವವರು ಅಲ್ಲದೇ ನೋಡಲ್ ಏಜೆನ್ಸಿಗಳು ನಡೆಸುವ ಕನ್ನಡ ಭಾಷಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವವರು ಈ ಮೀಸಲಾತಿಗೆ ಅರ್ಹರಿರಲಿದ್ದಾರೆ.

ಇದನ್ನೂ ಓದಿ: ಮೊದಲ ಬಾರಿ ಗೆದ್ದ ಕಾಂಗ್ರೆಸ್ ಶಾಸಕರಿಗೆ ಡಿಕೆ ಶಿವಕುಮಾರ್ ಆಪ್ತರಿಂದ ಡಿನ್ನರ್ ಪಾರ್ಟಿ

ಉಲ್ಲಂಘಿಸುವ ಸಂಸ್ಥೆಗಳಿಗೆ ದಂಡ

ಕನ್ನಡಿಗರಿಗೆ ಉದ್ಯೋಗದಲ್ಲಿ ಮೀಸಲಾತಿ ನೀಡುವ ನಿಯಮವನ್ನು ಉಲ್ಲಂಘಿಸುವ ಸಂಸ್ಥೆಗಳಿಗೆ ದಂಡ ವಿಧಿಸುವ ಅಂಶವನ್ನು ಸಹ ವಿಧೇಯಕದಲ್ಲಿ ಸೇರಿಸಲಾಗಿದ್ದು, ರಾಜ್ಯದಲ್ಲಿ ಕಟ್ಟುನಿಟ್ಟಾಗಿ ಜಾರಿಗೆ ತರಲಾಗುವುದು ಎಂದು ಸಚಿವರು ಭರವಸೆ ನೀಡಿದ್ದಾರೆ.

ಸಿ ಮತ್ತು ಡಿ ದರ್ಜೆಯ ಹುದ್ದೆಗಳಿಗೆ ನೂರರಷ್ಟು ಮೀಸಲಾತಿ

ರಾಜ್ಯದ ಎಲ್ಲಾ ಖಾಸಗಿ ಕೈಗಾರಿಕೆಗಳಲ್ಲಿ “ಸಿ ಮತ್ತು ಡಿ” ದರ್ಜೆಯ ಹುದ್ದೆಗಳಿಗೆ ನೂರಕ್ಕೆ ನೂರರಷ್ಟು ಕನ್ನಡಿಗರ ನೇಮಕಾತಿಯನ್ನು ಕಡ್ಡಾಯಗೊಳಿಸುವ ವಿಧೇಯಕಕ್ಕೆ ನಿನ್ನೆ ನಡೆದ ಸಚಿವ ಸಂಪುಟ ಸಭೆಯು ಒಪ್ಪಿಗೆ ನೀಡಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿದ್ದರಾಮಯ್ಯ ಎಕ್ಸ್ ಸಂದೇಶ

ಕನ್ನಡಿಗರು ಕನ್ನಡದ ನೆಲದಲ್ಲಿ ಉದ್ಯೋಗ ವಂಚಿತರಾಗುವುದನ್ನು ತಪ್ಪಿಸಿ, ತಾಯ್ನಾಡಿನಲ್ಲಿ ನೆಮ್ಮದಿಯ ಬದುಕು ಕಟ್ಟಿಕೊಳ್ಳಲು ಅವಕಾಶ ಕಲ್ಪಿಸಬೇಕು ಎಂಬುದು ನಮ್ಮ ಸರ್ಕಾರದ ಆಶಯ. ನಮ್ಮದು ಕನ್ನಡಪರವಾದ ಸರ್ಕಾರ. ಕನ್ನಡಿಗರ ಹಿತ ಕಾಯುವುದು ನಮ್ಮ ಆದ್ಯತೆಯಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

‘ಕೈಗಾರಿಕೆಗಳು, ಕಾರ್ಖಾನೆಗಳು ಮತ್ತು ಇತರ ಸಂಸ್ಥೆಗಳಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಆದ್ಯತೆ ನೀಡುವ ಕರ್ನಾಟಕ ರಾಜ್ಯ ಉದ್ಯೋಗ ಮಸೂದೆ 2024’ ಗುರುವಾರ ವಿಧಾನಸಭೆಯಲ್ಲಿ ಮಂಡನೆಯಾಗಲಿದೆ ಎನ್ನಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:48 am, Wed, 17 July 24