ಮಡಿಕೇರಿ: ಪ್ರಜಾಪ್ರಭುತ್ವ, ಜಾತ್ಯಾತೀತೆ ಬಗ್ಗೆ ಮಾತನಾಡುವ ಮಾಜಿ ಮುಖ್ಯಮಂತ್ರಿಯೂ ಆಗಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪ್ರಜಾಪ್ರಭುತ್ವದ ವಿರುದ್ಧ ಹೇಳಿಕೆ ನೀಡಿ ಟೀಕೆಗೆ ಗುರಿಯಾಗಿದ್ದಾರೆ. ಮುಸ್ಲಿಮರ ಏರಿಯಾದಲ್ಲಿ ಸಾವರ್ಕರ್ ಫ್ಲೆಕ್ಸ್ ಯಾಕೆ ಹಾಕಬೇಕು ಎಂದು ಪ್ರಶ್ನಿಸಿದ ಸಿದ್ದರಾಮಯ್ಯ ಅವರ ವಿರುದ್ಧ ಕಿಡಿಕಾರುತ್ತಿರುವ ಬಿಜೆಪಿ ಕಾರ್ಯಕರ್ತರು, ಮಡಿಕೇರಿಗೆ ಸಿದ್ದರಾಮಯ್ಯ ಆಗಮಿಸಿದ್ದ ವೇಳೆ ಮೊಟ್ಟೆ ಎಸೆದು ಆಕ್ರೋಶ ವ್ಯಕ್ತಪಡಿಸಿದರು. ಈ ಪ್ರಕರಣ ಸಂಬಂಧ 9 ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದು, ಆರೋಪಿಗಳು ಜಾಮೀನು ಪಡೆದು ಹೊರಬಂದಿದ್ದಾರೆ.
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದಿದ್ದ ಮನು, ಕೃಷ್ಣಪ್ಪ, ಮಂಜುನಾಥ, ನಿತ್ಯಾನಂದ, ಪ್ರವೀಣ, ಗೌತಮ್, ಭಾಸ್ಕರ ನಾಯ್ಕ್, ಮಣಿಕಂಠ ಲಕ್ಷ್ಮೀ ನಾರಾಯಣ ಎಂಬವರನ್ನು ಕುಶಾಲನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ. ಗುರುವಾರ ರಾತ್ರಿ ಕುಶಾಲನಗರ ಜೆಎಂಎಫ್ಸಿ ನ್ಯಾಯಾಲಯಕ್ಕೆ ಆರೋಪಿಗಳನ್ನು ಹಾಜರುಪಡಿಸಿದ ವೇಳೆ ಎಲ್ಲಾ ಆರೋಪಿಗಳಿಗೆ ಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಮಡಿಕೇರಿಯಲ್ಲಿ ಮಳೆಯ ಅವಾಂತರಗಳಿಂದಾಗಿ ಅನೇಕ ನಷ್ಟ ಸಂಭವಿಸಿದ್ದು, ಇದನ್ನು ಪರಿಶೀಲನೆ ನಡೆಸುವ ನಿಟ್ಟಿನಲ್ಲಿ ಸಿದ್ದರಾಮಯ್ಯ ಅವರು ಭೇಟಿ ಕೊಟ್ಟಿದ್ದರು. ಇದಕ್ಕೂ ಮುನ್ನ ಅವರು ನೀಡಿದ ಹೇಳಿಯಿಂದ ಕೆರಳಿದ ಬಿಜೆಪಿ ಕಾರ್ಯಕರ್ತರು ಕುಶಾಲನಗರ ತಾಲೂಕಿನ ಗುಡ್ಡೆಹೊಸೂರು ಗ್ರಾಮದಲ್ಲಿ ಭಾರೀ ಪ್ರತಿಭಟನೆ, ಆಕ್ರೋಶವನ್ನು ಎದುರಿಸಿದರು. ಇದೇ ವೇಳೆ ಅವರ ಕಾರಿಗೆ ಮೊಟ್ಟೆಯನ್ನು ಎಸೆಯಲಾಗಿತ್ತು. ಪ್ರಕರಣ ಸಂಬಂಧ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದರು.
ಕಾಫಿನಾಡಿಗೆ ಸಿದ್ದು ಭೇಟಿ, ಬಿಗಿ ಬಂದೋಬಸ್ತ್
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಹಾನಿ ಪ್ರದೇಶಗಳನ್ನು ವೀಕ್ಷಣೆ ಮಾಡುವ ನಿಟ್ಟಿನಲ್ಲಿ ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಶೃಂಗೇರಿ, ಕೊಪ್ಪ, ಮೂಡಿಗೆರೆ ತಾಲೂಕಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಪ್ರವಾಸ ಕೈಗೊಳ್ಳಲಿದ್ದು,ಬೆಳಗ್ಗೆ ಶೃಂಗೇರಿ, ಕೊಪ್ಪ, ಮಧ್ಯಾಹ್ನ ಮೂಡಿಗೆರೆಯಲ್ಲಿ ಪ್ರವಾಸ ಮಾಡಲಿದ್ದಾರೆ. ಈ ನಿಟ್ಟಿನಲ್ಲಿ ತಡರಾತ್ರಿಯೇ ಚಿಕ್ಕಮಗಳೂರಿಗೆ ಬಂದು ವಾಸ್ತವ್ಯ ಹೂಡಿದ್ದು, ಬೆಳಿಗ್ಗೆ 8ಕ್ಕೆ ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ.ರಾಜೇಗೌಡ ನಿವಾಸದಲ್ಲಿ ಉಪಹಾರ ಸೇವಿಸಲಿದ್ದಾರೆ. ಬಳಿಕ ಶೃಂಗೇರಿ ಕ್ಷೇತ್ರದ ಬಾಳೆಹೊನ್ನೂರು, ಕೊಪ್ಪ, ಶೃಂಗೇರಿ ತಾಲ್ಲೂಕಿನ ನೆರೆ ಪ್ರದೇಶಗಳಿಗೆ ಭೇಟಿ ನೀಡಿ ತದನಂತರ ಶೃಂಗೇರಿಯಿಂದ ಮೂಡಿಗೆರೆ ಕ್ಷೇತ್ರ, ಮೂಡಿಗೆರೆ ಕ್ಷೇತ್ರದ ಹಿರೇಬೈಲು, ಕಳಸ, ಕೊಟ್ಟಿಗೆಹಾರದಲ್ಲಿ ಹಾನಿ ವೀಕ್ಷಣೆ ನಡೆಸಲಿದ್ದಾರೆ. ಇದೇ ವೇಳೆ ಮರ ಬಿದ್ದು ಇಬ್ಬರು ಮಹಿಳೆಯರು ಮೃತಪಟ್ಟ ತಲಗೂರು ಗ್ರಾಮಕ್ಕೂ ಭೇಟಿ ನೀಡಲಿದ್ದಾರೆ. ಪರಿಶೀಲನೆ ನಂತರ ಮೂಡಿಗೆರೆ ಐಬಿಯಲ್ಲಿ ಕಾಫಿ ಬೆಳೆಗಾಗರರೊಂದಿಗೆ ಸಭೆ ನಡೆಸಿ ಬೆಂಗಳೂರಿಗೆ ಪ್ರಯಾಣ ಕೈಗೊಳ್ಳಲಿದ್ದಾರೆ.
ವಿವಾದಾತ್ಮಕ ಹೇಳಿಕೆ ನೀಡಿದ ಸಿದ್ದರಾಮಯ್ಯ ಹಿಂದೂ ಹಾಗೂ ಬಿಜೆಪಿ ಕಾರ್ಯಕರ್ತರ ಆಕ್ರೋಶಕ್ಕೆ ತುತ್ತಾಗಿದ್ದು, ಪ್ರತಿಭಟನೆಯ ಬಿಸಿ ತಟ್ಟಿಸುತ್ತಿದ್ದಾರೆ. ಮಡಿಕೇರಿಯಲ್ಲಿ ಸಂಭವಿಸಿದ ಘಟನೆ ಚಿಕ್ಕಮಗಳೂರಿನಲ್ಲಿ ನಡೆಯಬಾರದು ಎಂಬ ಹಿನ್ನೆಲೆ ಬಿಗಿ ಪೊಲೀಸ್ ಭದ್ರತೆ ಕೈಗೊಳ್ಳಲಾಗಿದೆ.
ಮತ್ತಷ್ಟು ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:42 am, Fri, 19 August 22