ಅಮಿತ್ ಶಾ ಹೇಳಿಕೆ ಖಂಡಿಸಿ ನಾಳೆ ಕಲಬುರಗಿ ಬಂದ್‌ಗೆ ಕರೆ: ಶಾಲಾ, ಕಾಲೇಜುಗಳಿಗೆ ರಜೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಅಂಬೇಡ್ಕರ್ ವಿರೋಧಿ ಹೇಳಿಕೆಯಿಂದ ಕರ್ನಾಟಕದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ವಿವಿಧ ದಲಿತ ಸಂಘಟನೆಗಳಿಂದ ನಾಳೆ ಕಲಬುರಗಿ ಬಂದ್‌ಗೆ ಕರೆ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಇನ್ನು ಕಾಂಗ್ರೆಸ್ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿದೆ.
ಕಲಬುರಗಿ, ಡಿಸೆಂಬರ್ 23: ಅಂಬೇಡ್ಕರ್ ಅಂತಾ ಹೇಳುವುದು ಕೆಲವರಿಗೆ ಫ್ಯಾಷನ್ ಆಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಸಂಸತ್ತಿನಲ್ಲಿ ಹೇಳಿಕೆ ನೀಡಿದ್ದರು. ಇದೇ ಮಾತು ಕಾಂಗ್ರೆಸ್‌ನವರಿಗೆ ಅಸ್ತ್ರವಾಗಿದೆ. ದೇಶಾದ್ಯಂತ ಪ್ರತಿಭಟನೆ ಕಿಡಿ ಹೊತ್ತಿಸಿದೆ. ಇತ್ತ ಕರ್ನಾಟಕದಲ್ಲೂ ಆಕ್ರೋಶ ವ್ಯಕ್ತವಾಗಿದ್ದು, ಅಮಿತ್ ಶಾ ಹೇಳಿಕೆ ಖಂಡಿಸಿ ವಿವಿಧ ದಲಿತ ಪರ ಸಂಘಟನೆಗಳಿಂದ ನಾಳೆ ಕಲಬುರಗಿ ಬಂದ್‌ಗೆ ಕರೆ ನೀಡಲಾಗಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ-ಕಾಲೇಜಿಗೆ ಡಿಡಿಪಿಐ ಸೂರ್ಯಕಾಂತ್ ರಜೆ ಘೋಷಿಸಿದ್ದಾರೆ. ಬಂದ್ ಹಿನ್ನೆಲೆ ನಾಳೆ ಮದ್ಯ ಮಾರಾಟ ಕೂಡ ನಿಷೇಧಿಸಲಾಗಿದೆ.
ಅಂಬೇಡ್ಕರ್ ವಿರುದ್ದದ ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ಕೂಡ ಜಿಲ್ಲೆಯ ಆಳಂದ ಪಟ್ಟಣದಲ್ಲಿ ವಿವಿಧ ದಲಿತ ಸಂಘಟನೆಗಳಿಂದ ಪ್ರತಿಭಟನೆ ಮಾಡಲಾಗಿದೆ. ರಸ್ತೆ, ಅಂಗಡಿ, ಮುಂಗಟ್ಟು ಬಂದ್ ಮಾಡಿ, ರಸ್ತೆ ಮೇಲೆ ಟೈರ್ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಕ್ಷಣ ಅಮಿತ್ ಶಾ ಅವರನ್ನು ಸಂಪುಟದಿಂದ ತೆಗೆದು ಹಾಕಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ.
ಅಮಿತ್ ಶಾ ಹೇಳಿಕೆ ಖಂಡಿಸಿ ವಿಜಯಪುರದಲ್ಲಿ ಕಾಂಗ್ರೆಸ್ ಪ್ರತಿಭಟನೆ
ಇನ್ನು ಅಮಿತ್ ಶಾ ಹೇಳಿಕೆ ಖಂಡಿಸಿ ಇಂದು ವಿಜಯಪುರ ನಗರದಲ್ಲಿ ಜಿಲ್ಲಾ ಕಾಂಗ್ರೆಸ್ ಪಕ್ಷದಿಂದ ಪ್ರತಿಭಟನೆ ಮಾಡಲಾಗಿದೆ. ಡಾ. ಬಿಆರ್ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಕಾಂಗ್ರೆಸ್ ಪದಾಧಿಕಾರಿಗಳು, ಕಾರ್ಯಕರ್ತರು, ಪ್ರತಿಭಟನಾ ಮೆರವಣಿಗೆ ನಡೆಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ದ ಘೋಷಣೆಗಳನ್ನು ಕೂಗಿ ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ: ನಾನು ಕೊಟ್ಟ ದೂರಿನ ಬಗ್ಗೆ ಯಾಕೆ ಕ್ರಮ ಕೈಗೊಂಡಿಲ್ಲ?; ಚಿಕ್ಕಮಗಳೂರಿನಲ್ಲಿ ಸಿ.ಟಿ ರವಿ ಸುದ್ದಿಗೋಷ್ಠಿ
ಅಂಬೇಡ್ಕರ್ ಭಾವಚಿತ್ರ ಹಿಡಿದು ಅಮಿತ್ ಶಾ ಅಂಬೇಡ್ಕರ್ ಅವರಿಗೆ ಅವಮಾನ ಮಾಡಿದ್ದಾರೆ. ಅವರನ್ನು ಸಚಿವ ಸಂಪುಟದಿಂದ ತೆಗೆದು ಹಾಕಬೇಕೆಂದು ಒತ್ತಾಯಿಸಿದ್ದಾರೆ. ಕೂಡಲೇ ಅಮಿತ್ ಶಾ ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಜಿಲ್ಲಾ ಕಾಂಗ್ರೆಸ್ ಘಟಕ ಹಾಗೂ ಕಾಂಗ್ರೆಸ್ ಎಸ್ಸಿ ಘಟಕದ ಹೋರಾಟದ ನೇತೃತ್ವ ವಹಿಸಿದ್ದು, ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಲೋಣಿ, ಅಮೀದ್ ಮುಶ್ರೀಫ್, ಬಾಬು ರಾಜೇಂದ್ರ ನಾಯಕ್ ಸೇರಿದಂತೆ ಇತರರು ಹೋರಾಟದಲ್ಲಿ ಹಾಜರಾಗಿದ್ದರು. ಡಿಸಿ ಕಚೇರಿಯಲ್ಲಿ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:17 pm, Mon, 23 December 24