ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಕೇಸ್: ಹೈಕೋರ್ಟ್​ನಲ್ಲೇ ಇತ್ಯರ್ಥಪಡಿಸಿಕೊಳ್ಳಲು ಸಿಬಿಐಗೆ ಸುಪ್ರೀಂ ಸೂಚನೆ

| Updated By: ರಮೇಶ್ ಬಿ. ಜವಳಗೇರಾ

Updated on: Nov 10, 2023 | 1:23 PM

Assets case against DK Shivakumar: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಮೇಲ್ಮನವಿಯನ್ನು ಸುಪ್ರೀಂಕೋರ್ಟ್ ಇತ್ಯರ್ಥ ಪಡಿಸಿದ್ದು, ಕರ್ನಾಟಕ ಹೈಕೋರ್ಟ್ ನಲ್ಲೇ ವಿಚಾರಣೆ ಮುಂದುವರೆಸುವಂತೆ ಸಿಬಿಐಗೆ ಸೂಚನೆ ನೀಡಿದೆ.

ಡಿಕೆಶಿ ವಿರುದ್ಧ ಅಕ್ರಮ ಆಸ್ತಿ ಕೇಸ್: ಹೈಕೋರ್ಟ್​ನಲ್ಲೇ ಇತ್ಯರ್ಥಪಡಿಸಿಕೊಳ್ಳಲು ಸಿಬಿಐಗೆ ಸುಪ್ರೀಂ ಸೂಚನೆ
Follow us on

ನವದೆಹಲಿ, (ನವೆಂಬರ್ 10): ಡಿಸಿಎಂ ಡಿಕೆ ಶಿವಕುಮಾರ್​ (DK Shivakumar) ವಿರುದ್ಧದ ಆದಾಯ ಮೀರಿ ಆಸ್ತಿಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಯನ್ನು ಹೈಕೋರ್ಟ್​ನಲ್ಲಿ ಇತ್ಯರ್ಥಪಡಿಸಿಕೊಳ್ಳಲು ಸುಪ್ರೀಂಕೋರ್ಟ್(supreme court)​ ಸೂಚಿಸಿದೆ. ಡಿಕೆ ಶಿವಕುಮಾರ್ ವಿರುದ್ಧದ ಅಕ್ರಮ ಆಸ್ತಿ ಗಳಿಕೆ ಕೇಸ್​ ಸಿಬಿಐ ತನಿಖೆಗೆ ಹೈಕೋರ್ಟ್ ವಿಭಾಗೀಯ ಪೀಠ ತಡೆ ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಇಂದು (ನವೆಂಬರ್ 10) ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಹೈಕೋರ್ಟ್​ನಲ್ಲಿ(Karnataka High Court) ಇತ್ಯರ್ಥಪಡಿಸಿಕೊಳ್ಳಲು ಸಿಬಿಐಗೆ ಸೂಚಿಸಿದೆ.

2017ರಲ್ಲಿ ಆದಾಯ ತೆರಿಗೆ ಇಲಾಖೆ ಡಿಕೆ ಶಿವಕುಮಾರ್ ಮೇಲೆ ದಾಳಿ ನಡೆಸಿತ್ತು. ಐಟಿ ಇಲಾಖೆ ನೀಡಿದ ಮಾಹಿತಿ ಆಧರಿಸಿ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿತ್ತು. ಇಡಿ ತನಿಖೆಯನ್ನು ಆಧರಿಸಿ ಡಿಕೆಶಿ ವಿರುದ್ಧ ಸಿಬಿಐ ಎಫ್‌ಐಆರ್ ದಾಖಲಿಸಿತ್ತು. ಸಿಬಿಐ ತನಿಖೆಗೆ ವಹಿಸಲು ಅಂದಿನ ಬಿಜೆಪಿ ಸರ್ಕಾರದ ಮುಖ್ಯಮಂತ್ರಿಯಾಗಿದ್ದ ಬಿಎಸ್ ಯಡಿಯೂರಪ್ಪ ಅವರು ಅನುಮತಿ ನೀಡಿದ್ದರು. ಬಳಿಕ ಡಿಕೆ ಶಿವಕುಮಾರ್, ಸಿಬಿಐ ತನಿಖೆಗೆ ಸರಕಾರ ವಹಿಸಿದ್ದನ್ನು ಹೈಕೋರ್ಟ್​ನಲ್ಲಿ ಪ್ರಶ್ನಿಸಿದ್ದರು. ಇದಕ್ಕೆ ಹೈಕೋರ್ಟ್​ ವಿಭಾಗೀಯ ಪೀಠ, ಸಿಬಿಐ ತನಿಖೆಗೆ ತಡೆ ನೀಡಿತ್ತು. ಇದರೊಂದಿಗೆ ಡಿಕೆ ಶಿವಕುಮಾರ್ ಅವರಿಗೆ ಬಿಗ್ ರಿಲೀಫ್​ ಸಿಕ್ಕಿತ್ತು.

ಇದನ್ನೂ ಓದಿ: ಡಿಕೆ ಶಿವಕುಮಾರ್ ವಿರುದ್ಧದ ಪ್ರಕರಣ: ಸಿಬಿಐ ಮೇಲ್ಮನವಿ ಅರ್ಜಿ ವಿಚಾರಣೆ ಮುಂದೂಡಿದ ಸುಪ್ರೀಂಕೋರ್ಟ್

ಬಳಿಕ ಸಿಬಿಐ ಹೈಕೋರ್ಟ್​ ವಿಭಾಗೀಯ ಪೀಠದ ತಡೆಯಾಜ್ಞೆಯನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸಿತ್ತು. ಡಿಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರದ ತನಿಖೆ ಮಾಡಲು ಹೈಕೋರ್ಟ್ ವಿಧಿಸಿರುವ ತಡೆಯಾಜ್ಞೆಯನ್ನು ತೆರವುಗೊಳಿಸುವಂತೆ ಸಿಬಿಐ ಮೇಲ್ಮನವಿ ಅರ್ಜಿಯಲ್ಲಿ ಸುಪ್ರೀಂಕೋರ್ಟ್​ಗೆ ಮನವಿ ಮಾಡಿತ್ತು. ಈ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಇದೀಗ ಮತ್ತೆ ಹೈಕೋರ್ಟ್​ನಲ್ಲೇ ಇತ್ಯರ್ಥಪಡಿಸಿಕೊಳ್ಳಲು ಸಿಬಿಐಗೆ ಸೂಚನೆ ನೀಡಿದೆ.

Published On - 1:09 pm, Fri, 10 November 23