
ಬಾಗಲಕೋಟೆ, (ಫೆಬ್ರವರಿ 24): ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪೊಕ್ಸೋ ಪ್ರಕರಣದಲ್ಲಿ (pocso case) ಜೈಲು ಸೇರಿದ್ದ ಉತ್ತರ ಕರ್ನಾಟಕದ ಖ್ಯಾತ ಜನಪದ ಗಾಯಕ ಮ್ಯೂಸಿಕ್ ಮೈಲಾರಿಗೆ (Singer music mailari ) ಜಾಮೀನು ಸಿಕ್ಕಿದೆ. ಅಪ್ರಾಪ್ತೆ ಮೇಲೆ ಅತ್ಯಾಚಾರ ಆರೋಪಿ ಮ್ಯೂಸಿಕ್ ಮೈಲಾರಿಗೆ ಬಾಗಲಕೋಟೆ ಕೋರ್ಟ್ ನ್ಯಾಯಾಧೀಶರಾದ ಪ್ರೀತಿ ಸಗರ ಜೋಷಿ ಅವರು ಕೆಲ ಷರತ್ತುಗಳನ್ನು ವಿಧಿಸಿ ಇಂದು (ಫೆಬ್ರವರಿ 24) ಜಾಮೀನು ನೀಡಿ ಆದೇಶ ಹೊರಡಿಸಿದ್ದಾರೆ. ಒಂದು ಲಕ್ಷ ಶ್ಯುರಿಟಿ ಬಾಂಡ್,ಪ್ರಾಷಿಕ್ಯೂಷನ್ ಮೇಲೆ ಪ್ರಭಾವ ಬೀರಬಾರದು, ಇದೇ ತರಹದ ಅಪರಾಧ ಮತ್ತೆ ಮಾಡಬಾರದು ಎನ್ನುವ ಷರತ್ತುಗಳನ್ನು ವಿಧಿಸಲಾಗಿದೆ. ಇದರೊಂದಿಗೆ ಕಳೆದ ಡಿಸೆಂಬರ್ನಿಂದ ಜೈಲು ಪಾಲಾಗಿದ್ದ ಮೈಲಾರಿಗೆ ಕೊನೆಗೂ ಬಿಡುಗಡೆ ಭಾಗ್ಯ ಸಿಕ್ಕಿದೆ.
ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಮೈಲಾರಿಯನ್ನು ಮಹಾಲಿಂಗಪುರ ಪೊಲೀಸರು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಆರ್ಕೆಸ್ಟ್ರಾ ಕಾರ್ಯಕ್ರಮದ ನಂತರ ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಬಾಗಲಕೋಟೆ ಜಿಲ್ಲೆಯ ರಬಕವಿಬನಹಟ್ಟಿ ತಾಲೂಕಿನ ಪೋಕ್ಸೊ ಪ್ರಕರಣ ದಾಖಲಾಗಿತ್ತು. ಇದರ ಬೆನ್ನಲ್ಲೇ ತಲೆಮರಿಸಿಕೊಂಡಿದ್ದ ಮೈಲಾರಿ 2025ರ ಡಿಸೆಂಬರ್ 17ರಂದು ಮಹಾರಾಷ್ಟ್ರಕ್ಕೆ ತೆರಳುತ್ತಿರುವಾಗ ಪೊಲೀಸರಿಗೆ ಕೈಗೆ ಸಿಕ್ಕಿಬಿದ್ದಿದ್ದ.
ಬೆಳಗಾವಿ (Belagavi)ಜಿಲ್ಲೆಯ ಗ್ರಾಮವೊಂದರಲ್ಲಿ ಹನುಮಂತ ದೇವರ ಓಕುಳಿ ಪ್ರಯುಕ್ತ ಆಯೋಜಿಸಿದ್ದ ಆರ್ಕೆಸ್ಟ್ರಾ ಕಾರ್ಯಕ್ರಮದಲ್ಲಿ ಹಾಡಲು ಮ್ಯೂಸಿಕ್ ಮೈಲಾರಿ ಆಗಮಿಸಿದ್ದ. ಇದೇ ಆರ್ಕೆಸ್ಟ್ರಾದಲ್ಲಿ ಅಪ್ರಾಪ್ತ ಬಾಲಕಿ ಡ್ಯಾನ್ಸ್ ಮಾಡಲು ಬಂದಿದ್ದಳು. ಕಾರ್ಯಕ್ರಮದ ವೇಳೆ ಲಾಡ್ಜ್‌ಗೆ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಸ್ವತಃ ಬಾಲಕಿ ಪೊಲೀಸರಿಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾಳೆ. ಅಲ್ಲದೆ, ಅತ್ಯಾಚಾರ ಎಸಗಿ ವಿಡಿಯೋ ಮಾಡಿಕೊಂಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾಳೆ. ಸದ್ಯ ಮ್ಯೂಸಿಕ್ ಮೈಲಾರಿ ಸೇರಿದಂತೆ ಏಳು ಜನರು ಅಪರಾಧ ಎಸಗಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾಳೆ.ಡಿಸೆಂಬರ್ 14ರಂದು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ನಂತರ ಪ್ರಕರಣವನ್ನು ಡಿಸೆಂಬರ್ 15ರಂದು ಮಹಾಲಿಂಗಪುರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದ್ದು, ಬಳಿಕ ಬಾಗಲಕೋಟೆ ಜಿಲ್ಲೆಯ ಮಹಾಲಿಂಗಪುರ ಠಾಣೆಯಲ್ಲಿ ಮ್ಯೂಸಿಕ್ ಮೈಲಾರಿ ಸೇರಿ ಏಳು ಜನರ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್‌ಐಆರ್ ದಾಖಲಾಗಿತ್ತು.
Published On - 6:38 pm, Tue, 24 February 26