ಬೆಂಗಳೂರು, ಡಿಸೆಂಬರ್ 7: ಬಳ್ಳಾರಿ ಬಾಣಂತಿಯರ ಸಾವು ಹಾಗೂ ಕರ್ನಾಟಕದಲ್ಲಿ ಈ ವರ್ಷ ಒಟ್ಟಾರೆಯಾಗಿ ಸಂಭವಿಸಿರುವ ಬಾಣಂತಿಯರ ಸಾವಿನ ವಿಚಾರ ಪ್ರಸ್ತಾಪಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಹೆಚ್ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ಸಂದೇಶ ಪ್ರಕಟಿಸಿ ಆಕ್ರೋಶ ವ್ಯಕ್ತಪಡಿಸಿರುವ ಅವರು, ಗೃಹಲಕ್ಷ್ಮೀಯರ ಜೀವಹರಣ ಮಾಡುತ್ತಿರುವ ರೋಗಗ್ರಸ್ತ ಸರ್ಕಾರವಿದು ಎಂದಿದ್ದಾರೆ.
ಪ್ರಗತಿಪರ ರಾಜ್ಯ ಕರ್ನಾಟಕದಲ್ಲಿ ಈ ವರ್ಷ 327 ಬಾಣಂತಿಯರು ಆಸ್ಪತ್ರೆಗಳಲ್ಲಿ ಸಾವನ್ನಪ್ಪಿದ್ದಾರೆ. ಸ್ವತಃ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರೇ ನೀಡಿರುವ ಈ ಮಾಹಿತಿ ನನಗೆ ಆಘಾತವುಂಟು ಮಾಡಿದೆ. ವೈದ್ಯ ಕ್ಷೇತ್ರದಲ್ಲಿ ಅಗಾಧ ಮುನ್ನಡೆ ಸಾಧಿಸಿರುವ ಈ ಆಧುನಿಕ ಕಾಲದಲ್ಲಿಯೂ ಮಹಿಳೆಯರು ಆಸ್ಪತ್ರೆಗಳಲ್ಲಿಯೇ ಜೀವ ಚೆಲ್ಲುತ್ತಿರುವುದು ರಾಜ್ಯಕ್ಕೆ ಗೌರವ ತರುವ ವಿಚಾರವಲ್ಲ ಎಂದು ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ.
ಮಹಿಳೆಯರಿಗೆ ಗೃಹಲಕ್ಷ್ಮಿ ಗ್ಯಾರಂಟಿ ಕೊಟ್ಟು ಅವರನ್ನು ಆರ್ಥಿಕವಾಗಿ ಸಬಲೀಕರಣ ಮಾಡುತ್ತಿದ್ದೇವೆ ಎನ್ನುವ ರಾಜ್ಯ ಕಾಂಗ್ರೆಸ್ ಸರ್ಕಾರ, ಆಸ್ಪತ್ರೆಗಳಲ್ಲಿ ಅದೇ ಗೃಹಲಕ್ಷ್ಮೀಯರ ಜೀವಹರಣ ಮಾಡುತ್ತಿದೆ. ಮಗುವಿಗೆ ಜನ್ಮ ನೀಡಲು ಸರ್ಕಾರಿ ಆಸ್ಪತ್ರೆಗೆ ವಿಶ್ವಾಸದಿಂದ ತೆರಳುವ ಗೃಹಲಕ್ಷ್ಮಿಯರು ಜೀವಸಮೇತ ಮರಳಿ ಮನೆಗೆ ಬರುವ ಗ್ಯಾರಂಟಿಯೇ ಇಲ್ಲ! ಇದೇನಾ ಮಹಿಳೆಯರ ಸಬಲೀಕರಣ ಎಂದು ಅವರು ಪ್ರಶ್ನಿಸಿದ್ದಾರೆ.
ರಾಜ್ಯದಲ್ಲಿ ಸರ್ಕಾರಿ ಆರೋಗ್ಯ ವ್ಯವಸ್ಥೆ ಪೂರ್ಣ ಹದಗೆಟ್ಟಿದೆ. ಸರ್ಕಾರಿ ಆಸ್ಪತ್ರೆಗಳು ಸಾವಿನ ಕೂಪಗಳಾಗಿವೆ. ಕಳಪೆ ಗ್ಲೂಕೋಸ್, ಔಷಧಗಳಿಂದ ಗೃಹಲಕ್ಷ್ಮೀಯರು ಬಲಿಯಾಗುತ್ತಿದ್ದಾರೆ. ಬಳ್ಳಾರಿ ಆಸ್ಪತ್ರೆಯಲ್ಲಿ IV ದ್ರಾವಣ, ಅಂದರೆ; ರಿಂಗರ್ ಲ್ಯಾಕ್ಟೇಟ್ ದ್ರಾವಣ (Ringer lactate infusion) ಪಡೆದ ಎರಡೇ ಗಂಟೆಯಲ್ಲಿ 9 ಬಾಣಂತಿಯರು ಅಸ್ವಸ್ಥರಾಗಿದ್ದರೆನ್ನುವುದು ಕಳವಳಕಾರಿ. ಹಾಗಾದರೆ, ಈ ದ್ರಾವಣ ಪೂರೈಸಿದ ಕಂಪನಿ ಯಾವುದು? ಅದು ಯಾರದ್ದು ಎಂದು ಹೆಚ್ಡಿಕೆ ಪ್ರಶ್ನಿಸಿದ್ದಾರೆ.
ಪ್ರಗತಿಪರ ರಾಜ್ಯ ಕರ್ನಾಟಕದಲ್ಲಿ ಈ ವರ್ಷ 327 ಬಾಣಂತಿಯರು ಆಸ್ಪತ್ರೆಗಳಲ್ಲಿ ಸಾವನ್ನಪ್ಪಿದ್ದಾರೆ!!
ಸ್ವತಃ ಆರೋಗ್ಯ ಸಚಿವ @dineshgrao ಅವರೇ ನೀಡಿರುವ ಈ ಮಾಹಿತಿ ನನಗೆ ಆಘಾತವುಂಟು ಮಾಡಿದೆ. ವೈದ್ಯ ಕ್ಷೇತ್ರದಲ್ಲಿ ಅಗಾಧ ಮುನ್ನಡೆ ಸಾಧಿಸಿರುವ ಈ ಆಧುನಿಕ ಕಾಲದಲ್ಲಿಯೂ ಮಹಿಳೆಯರು ಆಸ್ಪತ್ರೆಗಳಲ್ಲಿಯೇ ಜೀವ ಚೆಲ್ಲುತ್ತಿರುವುದು ರಾಜ್ಯಕ್ಕೆ…
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) December 7, 2024
ಅನೇಕ ದಿನಗಳಿಂದ ಕಳಪೆ ಗ್ಲೂಕೋಸ್, ಔಷಧ ಪೂರೈಕೆ ಆಗುತ್ತಿದ್ದರೂ ಸರ್ಕಾರ ಏನು ಮಾಡುತ್ತಿತ್ತು? ಇಷ್ಟು ಸೂಕ್ಷ್ಮ ವಿಚಾರವನ್ನು ಆರೋಗ್ಯ ಸಚಿವರು ಅಲಕ್ಷ್ಯ ಮಾಡಿದ್ದೇಕೆ? ಸಚಿವರಿಗೆ ಇಲಾಖೆಯಲ್ಲಿ ಏನೇನು ನಡೆಯುತ್ತಿದೆ ಎನ್ನುವುದು ಗೊತ್ತೇ ಇರಲಿಲ್ಲವೇ ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ನನ್ನ ತಪ್ಪಿದ್ದರೆ ರಾಜೀನಾಮೆ ಕೊಡುವೆ ಎಂಬ ಆರೋಗ್ಯ ಸಚಿವರ ಹೇಳಿಕೆ ಅನಪೇಕ್ಷಿತ. ಜವಾಬ್ದಾರಿ ಕೊಟ್ಟಿರುವುದು ಕೈ ತೊಳೆದುಕೊಂಡು ಪಾರಾಗಲಿಕ್ಕಲ್ಲ. ಅಗತ್ಯವಿರುವುದು ರೋಗಗ್ರಸ್ತ ಆರೋಗ್ಯ ಇಲಾಖೆಗೆ ಸೂಕ್ತ ಚಿಕಿತ್ಸೆ. ಪಲಾಯನಕ್ಕಿಂತ ಪ್ರಾಯಶ್ಚಿತ್ತ ಮುಖ್ಯ. ಇಲಾಖೆಯನ್ನು ಸರಿ ಮಾಡುವುದು ಅವರ ಹೊಣೆ. ಗೃಹಲಕ್ಷ್ಮೀಯರ ಪಾಪ ಅವರನ್ನು ಸುಮ್ಮನೆ ಬಿಡುವುದಿಲ್ಲ ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: ನಿಖಿಲ್ ಕುಮಾರಸ್ವಾಮಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನ: ಹೆಚ್ಡಿ ದೇವೇಗೌಡ ಮಹತ್ವದ ಸುಳಿವು
ಈ ಮರಣಗಳಿಂದ ಸರ್ಕಾರ ನುಣಚಿಕೊಳ್ಳಲು ಸಾಧ್ಯವಿಲ್ಲ. ಹೈಕೋರ್ಟ್ನ ಹಾಲಿ ನ್ಯಾಯಮೂರ್ತಿಗಳಿಂದ ತನಿಖೆ ನಡೆಸಬೇಕು. ಹದಗೆಟ್ಟ ಆರೋಗ್ಯ ವ್ಯವಸ್ಥೆಯನ್ನು ಹಳಿಗೆ ತರುವ ಕೆಲಸ ತುರ್ತಾಗಿ ಆಗಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ