Bangalore Rain: ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ನದಿಯಂತಾದ ರಸ್ತೆಗಳು; ಜನಜೀವನ ಅಸ್ತವ್ಯಸ್ತ
Bengaluru Weather Today: ಮಳೆಯಿಂದ ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ಮರಗಳು ಬಿದ್ದಿದ್ದು, ಇನ್ನು ಕೆಲವೆಡೆ ಮನೆ, ಅಪಾರ್ಟ್ಮೆಂಟ್ಗಳಿಗೆ ನೀರು ನುಗ್ಗಿದೆ. ಇಂದು ಸಂಜೆಯವರೆಗೂ ಮಳೆ ಮುಂದುವರೆಯುವ ಸಾಧ್ಯತೆಯಿದೆ.
ಬೆಂಗಳೂರು: ಬೆಂಗಳೂರಿನ ಬಹುತೇಕ ಏರಿಯಾಗಳಲ್ಲಿ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದೆ. ಬಸವನಗುಡಿ, ಮಲ್ಲೇಶ್ವರಂ, ರಾಜಾಜಿನಗರ, ಆರ್ಆರ್ ನಗರ, ಹೆಬ್ಬಾಳ, ಯಲಹಂಕ, ಎಲೆಕ್ಟ್ರಾನಿಕ್ ಸಿಟಿ, ಕೋರಮಂಗಲ, ಬನಶಂಕರಿ, ಪದ್ಮನಾಭನಗರ, ಹನುಮಂತನಗರ, ಗಿರಿನಗರ ಸೇರಿದಂತೆ ಹಲವೆಡೆ ರಾತ್ರಿಯಿಂದ ಒಂದೇ ಸಮನೆ ಮಳೆ ಸುರಿಯುತ್ತಿದೆ. ಇದರಿಂದ ತಗ್ಗುಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ನದಿಯಂತಾದ ರಸ್ತೆಗಳಲ್ಲಿ ಸಂಚರಿಸಲಾಗದೆ ವಾಹನ ಸವಾರರು ಕಂಗಾಲಾಗಿದ್ದಾರೆ. ಇಂದು ಬೆಳಗ್ಗೆಯಿಂದ ಮತ್ತೆ ಮಳೆಯಾಗುತ್ತಿದ್ದು, ಹಲವು ಏರಿಯಾಗಳಲ್ಲಿ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ.
ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನ ಸುತ್ತಮುತ್ತ ಇಂದು ಮೋಡ ಕವಿದ ವಾತಾವರಣವಿರಲಿದ್ದು, ಭಾರೀ ಮಳೆಯಾಗುವ ಸಾಧ್ಯತೆಯಿದೆ. ಸಿಲಿಕಾನ್ ಸಿಟಿಯಲ್ಲಿ ಗರಿಷ್ಠ 30 ಡಿಗ್ರಿ ಸೆಲ್ಷಿಯಸ್ ಮತ್ತು ಕನಿಷ್ಠ 21 ಡಿಗ್ರಿ ಸೆಲ್ಷಿಯಸ್ ದಾಖಲಾಗಲಿದೆ. ಮಳೆಯಿಂದ ಬೆಂಗಳೂರಿನ ಕೆಲವು ಏರಿಯಾಗಳಲ್ಲಿ ಮರಗಳು ಬಿದ್ದಿದ್ದು, ಇನ್ನು ಕೆಲವೆಡೆ ಮನೆ, ಅಪಾರ್ಟ್ಮೆಂಟ್ಗಳಿಗೆ ನೀರು ನುಗ್ಗಿದೆ. ಇಂದು ಸಂಜೆಯವರೆಗೂ ಮಳೆ ಮುಂದುವರೆಯುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಮಳೆ ಹೆಚ್ಚಾದರೆ ಪ್ರವಾಹಕ್ಕೆ ತುತ್ತಾಗುವ 209 ಸೂಕ್ಷ್ಮ ಮತ್ತು ಅತಿ ಸೂಕ್ಷ್ಮ ಸ್ಥಳಗಳನ್ನು ಬಿಬಿಎಂಪಿ ಗುರುತಿಸಿದೆ. ಬಿಬಿಎಂಪಿ ಅಧಿಕಾರಿಗಳ ಪ್ರಕಾರ ಪೂರ್ವ ವಲಯದಲ್ಲಿ ಅತಿ ಹೆಚ್ಚು ಸೂಕ್ಷ್ಮ ಪ್ರದೇಶಗಳನ್ನು ಗುರುತಿಸಲಾಗಿದೆ. ಪೂರ್ವ ವಲಯವೊಂದರಲ್ಲೇ 38 ಸೂಕ್ಷ್ಮ ಪ್ರದೇಶಗಳಿದ್ದು ದಾಸರಹಳ್ಳಿ 37 ಮತ್ತು ರಾಜರಾಜೇಶ್ವರಿ ನಗರ ವಲಯದಲ್ಲಿ 32 ಸೂಕ್ಷ್ಮ ಪ್ರದೇಶಗಳಿವೆ. ಮಹದೇವಪುರ 29, ದಕ್ಷಿಣ 20, ಯಲಹಂಕ 19, ಕೇಂದ್ರ ಕಚೇರಿ 13, ಬೊಮ್ಮನಹಳ್ಳಿ 11, ಪಶ್ಚಿಮ 10 ಸ್ಥಳಗಳಿವೆ.
ಇಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಕೊಡಗಿನಲ್ಲಿ ಮಳೆ ಹೆಚ್ಚಾಗುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ತುಮಕೂರು, ಕೋಲಾರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಬೀದರ್, ಕೊಪ್ಪಳ, ರಾಯಚೂರು, ಕಲಬುರ್ಗಿ, ವಿಜಯಪುರ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಇಂದು ಹಳದಿ ಅಲರ್ಟ್ ಘೋಷಿಸಲಾಗಿದೆ.
ಇದನ್ನೂ ಓದಿ: Karnataka Rain: ಬೆಂಗಳೂರಿನಲ್ಲಿ ಇಂದು ಗುಡುಗು ಸಹಿತ ಮಳೆ; ಕರ್ನಾಟಕದ ಹಲವೆಡೆ ಆರೆಂಜ್ ಅಲರ್ಟ್ ಘೋಷಣೆ