ಬೆಂಗಳೂರು, (ಜೂನ್ 02): ಲೋಕಸಭಾ ಚುನಾವಣೆಯ (Lok Sabha Elections 2024) ಮತ ಎಣಿಕೆ ಕಾರ್ಯಕ್ಕೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದ್ದು, ಜೂ.4 ರಂದು ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಪ್ರಾರಂಭವಾಗಲಿದೆ. ರಾಜ್ಯದ 28 ಕ್ಷೇತ್ರಗಳ ಲೋಕಸಭಾ ಚುನಾವಣೆಯ ಮತ ಎಣಿಕೆ ಆಯಾ ಜಿಲ್ಲಾ ಕೇಂದ್ರದಲ್ಲಿ ನಡೆಯಲಿದ್ದು, ಈಗಾಗಲೇ ಜಿಲ್ಲಾಧಿಕಾರಿಗಳು ಸಕಲ ಸಿದ್ಧತೆ ಮಾಡಿಕೊಂಡಿದ್ದಾರೆ. ಇನ್ನು ಫಲಿತಾಂಶ ಪ್ರಕಟವಾಗುವ ಮೊದಲೇ ಬೆಂಗಳೂರು ಗ್ರಾಮಾಂತರ ಬಿಜೆಪಿ ಅಭ್ಯರ್ಥಿ ಡಾ. ಸಿಎನ್ ಮಂಜುನಾಥ್ (Dr CN Manjunath) ಚುನಾವಣಾ ಆಯೋಗಕ್ಕೆ ಒಂದು ಮಹತ್ವದ ಪತ್ರ ಬರೆದಿದ್ದು, ಮತ ಎಣಿಕೆ ಕೇಂದ್ರದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ. ಅಲ್ಲದೇ ಕಾಂಗ್ರೆಸ್ ಅಭ್ಯರ್ಥಿ ಬಗ್ಗೆ ಆತಂಕ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಈ ಸಲ ಭಾರೀ ಸುದ್ದಿಯಾಗಿದೆ. ಹಾಲಿ ಸಂಸದ ಡಿಕೆ ಸುರೇಶ್ ಅವರನ್ನು ಸೋಲಿಸಲೇಬೇಕು ಎಂದು ಮೈತ್ರಿ ನಾಯಕರು ಖ್ಯಾಯ ಹೃದ್ರೋಗ ತಜ್ಞ ವೈದ್ಯ ಡಾ. ಸಿಎನ್ ಮಂಜುನಾಥ್ ಅವರನ್ನು ಕಣಕ್ಕಿಳಿಸಿದ್ದಾರೆ. ಹೀಗಾಗಿ ಈ ಬಾರಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ಜಿದ್ದಾಜಿದ್ದಿನ ಕಣವಾಗಿ ಮಾರ್ಪಟ್ಟಿದೆ. ಈಗಾಗಲೇ ಏಪ್ರಿಲ್ 26ರಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಚುನಾವಣೆ ನಡೆದಿದ್ದು, ಇದೀಗ ಯಾರು ಗೆಲ್ಲಲಿದ್ದಾರೆ ಎನ್ನುವ ಲೆಕ್ಕಾಚಾರಗಳು ಶುರುವಾಗಿವೆ. ಇದರ ಮಧ್ಯ ಲೋಕಸಭಾ ಚುನಾವಣೆಯ ಚುನಾವಣೋತ್ತರ ಸಮೀಕ್ಷೆಗಳು ಹೊರಬಂದಿದ್ದು, ರಾಜ್ಯದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿವೆ. ಅದರಲ್ಲೂ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಈ ಬಾರಿ ಬಿಜೆಪಿ ಗೆಲ್ಲಲಿದೆ ಎಂದು ಸಮೀಕ್ಷೆಗಳು ಹೇಳುತ್ತಿವೆ.
ಇದನ್ನೂ ಓದಿ: ಹೆಚ್ಡಿ ಕುಮಾರಸ್ವಾಮಿ, ಮಂಜುನಾಥ್ ಗೆಲುವಿಗೆ ಜೆಡಿಎಸ್ ಕಾರ್ಯಕರ್ತರಿಂದ ಉರುಳುಸೇವೆ, ವಿಶೇಷ ಪೂಜೆ
ಈ ಹಿನ್ನೆಲೆಯಲ್ಲಿ ಅಭ್ಯರ್ಥಿ ಮಂಜುನಾಥ್ ಸೇರಿದಂತೆ ಬಿಜೆಪಿ, ಜೆಡಿಎಸ್ ನಾಯಕರಲ್ಲಿನ ಸಂತಸ ಮನೆ ಮಾಡಿದ್ದು, ಫಲಿತಾಂಶಕ್ಕಾಗಿ ಕಾತರರಿಂದ ಕಾಯುತ್ತಿದ್ದಾರೆ. ಹೀಗಾಗಿ ಮತ ಎಣಿಕೆ ಕೇಂದ್ರದಲ್ಲಿ ಯಾವುದೇ ಗೊಂದಲ, ಗಲಾಟೆಗಳು ಆಗಬಾರದು ಎಂದು ಡಾ ಮಂಜುನಾಥ್ ಅವರು ಮುಂಜಾಗ್ರತಾವಾಗಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಮತ ಎಣಿಕೆ ಕೇಂದ್ರದಲ್ಲಿ ಅಗತ್ಯ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಮನವಿ ಮಾಡಿದ್ದಾರೆ.
ಇನ್ನು ಈ ಹಿಂದೆ ಏಪ್ರಿಲ್ 26ರಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಮತದಾನ ನಡೆಯುವ ಮೊದಲು ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಚುನಾವಣಾ ಆಯೋಗಕ್ಕೆ ಪತ್ರ ಬರೆದಿದ್ದು, ಸಿಆರ್ಪಿಎಫ್ ಭದ್ರತೆ ಒದಗಿಸುವಂತೆ ಮನವಿ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು.
ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಅಳಿಯ ಕೂಡ ಆಗಿರುವ ಡಾ ಸಿಎನ್ ಮಂಜುನಾಥ್ ಡಿಕೆ ಸುರೇಶ್‌ಗೆ ಮೊದಲ ಸೋಲಿನ ರುಚಿ ತೋರಿಸ್ತಾರಾ ಎಂಬುದು ಸದ್ಯದ ಕುತೂಹಲ ಮನೆ ಮಾಡಿದ್ದು, ಅಂತಿಮವಾಗಿ ಯಾರು ಗೆಲ್ಲಲಿದ್ದಾರೆ ಎನ್ನುವುದು ಜೂನ್ 4ರಂದು ತಿಳಿಯಲಿದೆ.
ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ
Published On - 3:06 pm, Sun, 2 June 24