AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೇಕೆದಾಟು ಯೋಜನೆ ವಿವಾದ: ನಾಳೆ ಕಾನೂನು ತಜ್ಞರ ಮಹತ್ವದ ಸಭೆ -ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ

ರಾಷ್ಟ್ರೀಯ ಹಸಿರು ಪೀಠ ಮೇಕೆದಾಟು ಯೋಜನೆಗೆ ಸಂಬಂಧಪಟ್ಟಂತೆ ಸುಮೋಟೋ ದೂರು ದಾಖಲಿಸಿಕೊಂಡಿದೆ. ಇದಕ್ಕೆ ಸಂಬಂಧಪಟ್ಟಂತೆ ಸಮಿತಿ ರಚನೆ ಮಾಡಿದೆ. ಮೇಕೆದಾಟು ಯೋಜನೆಗೆ ಭೇಟಿ ನೀಡಬೇಕು. ಅಲ್ಲಿ ಪರಿಸರ ನಾಶ ಆಗಿದೆಯೇ? ಪರಿಸರಕ್ಕೆ ತೊಂದರೆಯಾಗಿದೆಯೆ? ಎಂಬುದರ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲು ಸಮಿತಿ ರಚಿಸಿದೆ.

ಮೇಕೆದಾಟು ಯೋಜನೆ ವಿವಾದ: ನಾಳೆ ಕಾನೂನು ತಜ್ಞರ ಮಹತ್ವದ ಸಭೆ -ಸಚಿವ ಬಸವರಾಜ ಬೊಮ್ಮಾಯಿ ಮಾಹಿತಿ
ಬಸವರಾಜ ಬೊಮ್ಮಾಯಿ (ಸಂಗ್ರಹ ಚಿತ್ರ)
Follow us
sandhya thejappa
|

Updated on: May 26, 2021 | 1:44 PM

ಬೆಂಗಳೂರು: ಮೇಕೆದಾಟು ಯೋಜನೆಯಲ್ಲಿ ಪರಿಸರಕ್ಕೆ ತೊಂದರೆ ಆಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲು ಚೆನ್ನೈನಲ್ಲಿರುವ ರಾಷ್ಟ್ರೀಯ ಹಸಿರು ಪೀಠ ದಿನಪತ್ರಿಕೆಯ ವರದಿಯನ್ನು ಆಧರಿಸಿ ಸ್ವಯಂ ಪ್ರೇರಣೆಯಿಂದ ರಚನೆ ಮಾಡಿರುವ ಸಮಿತಿಯ ವಿರುದ್ಧ ಕಾನೂನಾತ್ಮಕ ಹೋರಾಟಕ್ಕೆ ಸಿದ್ಧತೆ ನಡೆಸುವ ಸಂಬಂಧ ನಾಳೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಕಾನೂನು ತಜ್ಞರ ಉನ್ನತ ಮಟ್ಟದ ಸಭೆ ನಡೆಯಲಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದರು.

ಬೆಂಗಳೂರಿನ ಟೌನ್ ಹಾಲ್ ಬಳಿ ಬೆಂಗಳೂರು ನಗರ ಸಂಚಾರ ಪೊಲೀಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಂತರ ಅವರು ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ರಾಷ್ಟ್ರೀಯ ಹಸಿರು ಪೀಠ ಮೇಕೆದಾಟು ಯೋಜನೆಗೆ ಸಂಬಂಧಪಟ್ಟಂತೆ ಸುಮೋಟೋ ದೂರು ದಾಖಲಿಸಿಕೊಂಡಿದೆ. ಇದಕ್ಕೆ ಸಂಬಂಧಪಟ್ಟಂತೆ ಸಮಿತಿ ರಚನೆ ಮಾಡಿದೆ. ಮೇಕೆದಾಟು ಯೋಜನೆಗೆ ಭೇಟಿ ನೀಡಬೇಕು. ಅಲ್ಲಿ ಪರಿಸರ ನಾಶ ಆಗಿದೆಯೇ? ಪರಿಸರಕ್ಕೆ ತೊಂದರೆಯಾಗಿದೆಯೆ? ಎಂಬುದರ ಬಗ್ಗೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲು ಸಮಿತಿ ರಚಿಸಿದೆ. ಈ ಸಂಬಂಧ ಯಾರೂ ಅಧಿಕೃತವಾಗಿ ದೂರು ನೀಡದಿದ್ದರೂ ಹಸಿರುಪೀಠ ಸ್ವಯಂ ಪ್ರೇರಿತವಾಗಿ ಸಮಿತಿ ರಚನೆ ಮಾಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಈ ಕುರಿತು ಕಾನೂನು ತಜ್ಞರ ಜೊತೆ ಸಮಾಲೋಚನೆ ನಡೆಸಲಿದೆ ಎಂದರು.

ನಾಳೆ (ಮೇ 27) ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಅಡ್ವೊಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಜಲಸಂಪನ್ಮೂಲ ಇಲಾಖೆಯ ಪ್ರಧಾನ ಕಾರ್ಯದರ್ಶಿ, ಅಂತರ್ ರಾಜ್ಯ ಜಲ ವಿವಾದದ ಕಾನೂನು ಪಂಡಿತರು, ಹಿರಿಯ ವಕೀಲರು ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದರು.

ಈಗಾಗಲೇ ಮೇಕೆದಾಟು ಯೋಜನೆಯ ಬಗ್ಗೆ ಸುಪ್ರೀಂ ಕೋರ್ಟ್​ಗೆ ಎಲ್ಲ ವಿವರವನ್ನು ನೀಡಲಾಗಿದೆ. ಕರ್ನಾಟಕ ತನ್ನ ಹಕ್ಕಿನ ನೀರನ್ನು ಬಳಕೆ ಮಾಡಿಕೊಳ್ಳುತ್ತಿದೆ. ಈ ಸಂದರ್ಭದಲ್ಲಿ ಸಮಿತಿ ರಚನೆ ಮಾಡಿದ್ದು ಎಷ್ಟು ಸಮಯೋಚಿತ? ಹಾಗೂ ಎಷ್ಟು ಕಾನೂನುಬದ್ಧ ಎಂಬ ಪ್ರಶ್ನೆ ಉದ್ಭವಿಸಿದೆ. ಹೀಗಾಗಿ ಈ ವಿಚಾರದಲ್ಲಿ ಕಾನೂನಾತ್ಮಕವಾಗಿ ಕರ್ನಾಟಕದ ಹಿತ ಕಾಪಾಡುವುದು ನಮ್ಮ ಕೆಲಸ. ಅದನ್ನು ಯಾವ ರೀತಿ ಪರಿಣಾಮಕಾರಿಯಾಗಿ ಮಾಡಬೇಕು ಎಂಬುದರ ಕುರಿತು ನಾಳೆ ಪ್ರಮುಖವಾದ ಸಭೆ ನಡೆಯಲಿದೆ ಎಂದು ಕಾನೂನು ಸಚಿವ ಬಸವರಾಜ್ ಬೊಮ್ಮಾಯಿ ತಿಳಿಸಿದರು.

ಇದನ್ನೂ ಓದಿ

ಹುಬ್ಬಳ್ಳಿಗೆ 25 ಜಂಬೋ ಸಿಲಿಂಡರ್ ಕಳಿಸಿಕೊಟ್ಟ ಸೋನು ಸೂದ್; ಎಡಿಜಿಪಿ ಭಾಸ್ಕರ್‌ರಾವ್ ನೇತೃತ್ವದಲ್ಲಿ ಆಕ್ಸಿಜನ್ ಕೇಂದ್ರ ಸ್ಥಾಪನೆ

ಬಿಸಿಲು ಇರುವಾಗ ಹೊರಗೆ ಬರಬಹುದಾ ಎಂದು ಕೇಳಿದ ವ್ಯಕ್ತಿಗೆ ಸಖತ್​ ತಿರುಗೇಟು ಕೊಟ್ಟ ಪೊಲೀಸರು; ವೈರಲ್​ ಆಯ್ತು ಟ್ವೀಟ್​

(HM Basavaraj Bommai heading a conference with Legal experts tomorrow on Mekedatu Controversy)