ಬೆಳಗಾವಿ, ಡಿ.14: ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಸಭೆ ಅಧಿವೇಶನದಲ್ಲಿ ಇಂದು ಕರ್ನಾಟಕದ ಬೆಳಗಾವಿ, ಶಿವಮೊಗ್ಗ, ಹುಬ್ಬಳ್ಳಿ, ವಿಜಯಪುರ ವಿಮಾನ ನಿಲ್ದಾಣಗಳಿಗೆ (Airport) ನಾಮಕರಣ ಮಾಡುವ ನಿರ್ಣಯ ಅಂಗೀಕಾರ ಪಡೆಯಿತು. ಇದೇ ವೇಳೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರಿಡುವಂತೆ ಬಿಜೆಪಿ ಶಾಸಕ ಸುನೀಲ್ ಕುಮಾರ್ ಒತ್ತಾಯಿಸಿದರೆ, ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಹೆಸರು ಇಡುವಂತೆ ಕಾಂಗ್ರೆಸ್ ಶಾಸಕ ಅಬ್ಬಯ್ಯ ಪ್ರಸಾದ್ ಒತ್ತಾಯಿಸಿದರು.
ರಾಜ್ಯದ ನಾಲ್ಕು ವಿಮಾನ ನಿಲ್ದಾಣಗಳಿಗೆ ನಾಮಕರಣ ಮಾಡುವ ವಿಚಾರದ ಬಗ್ಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ನಿರ್ಣಯವನ್ನು ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಸಚಿವ ಎಂಬಿ ಪಾಟೀಲ್ ಅವರು ಮಂಡಿಸಿದರು. ಈ ನಿರ್ಣಯವು ಅಂಗೀಕಾರ ಪಡೆಯಿತು.
ಇದನ್ನೂ ಓದಿ: Belagavi session: ಮುದ್ರಾಂಕ ಶುಲ್ಕ ಹೆಚ್ಚಳಕ್ಕೆ ಮಸೂದೆ ಮಂಡಿಸಿದ ಸರ್ಕಾರ
ಅದರಂತೆ, ವಿಜಯಪುರ ವಿಮಾನ ನಿಲ್ದಾಣಕ್ಕೆ ಜಗಜ್ಯೋತಿ ಬಸವೇಶ್ವರ ಹೆಸರು, ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ರಾಷ್ಟ್ರಕವಿ ಕುವೆಂಪು ಹೆಸರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ಹಾಗೂ ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಹೆಸರು ಇಡಲು ಶಿಫಾರಸ್ಸು ಮಾಡಲು ಒಪ್ಪಿಗೆ ಸೂಚಿಸಲಾಗಿದೆ.
ಹುಬ್ಬಳ್ಳಿ ವಿಮಾನ ನಿಲ್ದಾಣಕ್ಕೆ ಸಂಗೊಳ್ಳಿ ರಾಯಣ್ಣ, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರು ನಾಮಕರಣಕ್ಕೆ ಶಿಫಾರಸು ಮಾಡಲು ಒಪ್ಪಿಗೆ ಸೂಚಿಸಲಾಗಿದೆ. ಇದರಿಂದ ಸಂಸತಗೊಂಡ ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿ ಹಾಗೂ ಶ್ರೀ ಡಾ.ಬಸವರಾಜ ದೇವರು ಅವರು ಸಿಎಂ ಸಿದ್ದರಾಮಯ್ಯಗೆ ಅಭಿನಂದನೆ ಸಲ್ಲಿಸಿದರು.
ಮಂಗಳೂರು ವಿಮಾನ ನಿಲ್ದಾಣಕ್ಕೆ ಕೋಟಿ ಚನ್ನಯ್ಯ ಹೆಸರಿಡಲು ಕಾರ್ಕಳ ಬಿಜೆಪಿ ಶಾಸಕ ಸುನೀಲ್ ಕುಮಾರ್ ಒತ್ತಾಯಿಸಿದ್ದಾರೆ. ವಿಧಾನಸಭೆಯಲ್ಲಿ ಈ ಬಗ್ಗೆ ಒತ್ತಾಯಿಸಿದರು. ಈ ವೇಳೆ ವೀರ ರಾಣಿ ಅಬ್ಬಕ್ಕ ಹೆಸರು ಇಡುವ ಬಗ್ಗೆಯೂ ಪ್ರಸ್ತಾಪ ಇದೆ. ಈ ಬಗ್ಗೆ ನಾವು ಚರ್ಚೆ ಮಾಡಿ ತೀರ್ಮಾನ ಮಾಡುವ ಎಂದು ಸ್ಪೀಕರ್ ಯುಟಿ ಖಾದರ್ ಹೇಳಿದರು.
ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವಂತೆ ವಿಧಾನಸಭೆಯಲ್ಲಿ ಒತ್ತಾಯಿಸಲಾಯಿತು. ನಿರ್ಣಯ ಅಂಗೀಕಾರದ ವೇಳೆ ಮಾತನಾಡಿದ ಹುಬ್ಬಳ್ಳಿ-ಧಾರವಾಡ ಪೂರ್ವ ಕಾಂಗ್ರೆಸ್ ಶಾಸಕ ಅಬ್ಬಯ್ಯ ಪ್ರಸಾದ್, ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವಂತೆ ಒತ್ತಾಯಿಸಿದರು. ಇದಕ್ಕೆ ವಿಪಕ್ಷ ಬಿಜೆಪಿ ಶಾಸಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದಾಗ ಗದ್ದಲ ಉಂಟಾಯಿತು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ