ಬೆಳಗಾವಿ, (ಡಿಸೆಂಬರ್ 06): ಐಗಳಿ ಪೋಲಿಸ್ ಠಾಣೆಯ ಎಎಸ್ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಐಗಳಿ ಪೋಲಿಸ್ ಠಾಣೆಯಲ್ಲಿ ಎಎಸ್ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಶಂಭು ಮೆತ್ರಿ (50) ಇಂದು(ಡಿಸೆಂಬರ್ 06) ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅನಂತಪೂರ ಗ್ರಾಮದ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದ್ರೆ, ಶಂಭು ಮೆತ್ರಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿದಲ್ಲ. ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಅಥಣಿ ಪೋಲಿಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.
ಕಳೆದ ತಿಂಗಳೂ ಅಷ್ಟೇ ಬೆಳಗಾವಿ ತಹಶೀಲ್ದಾರ್ ಕೊಠಡಿಯಲ್ಲೇ ಎಸ್ಡಿಎ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದರು. ರುದ್ರಣ್ಣ ಯಡವಣ್ಣವರ ಎನ್ನುವ ದ್ವಿತೀಯ ದರ್ಜೆ ನೌಕರ ಬೆಳಗಾವಿ ತಹಶೀಲ್ ಕಚೇರಿಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದರು. ವರ್ಗಾವಣೆ ಕಿರುಕುಳದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದರು. ಇನ್ನು ಪ್ರಕರಣದದಲ್ಲಿ ಎ1 ತಹಶೀಲ್ದಾರ್ ಬಸವರಾಜ ನಾಗರಾಳ, ಎ2 ಅಶೋಕ ಕಬ್ಬಲಿಗೇರ್, ಇನ್ನು ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಪಿಎ ಸೋಮು ಎ3 ಆರೋಪಿಯಾಗಿದ್ದರು. ಇದು ರಾಜ್ಯ ರಾಜಕಾರಣದಲ್ಲಿ ಭಾರೀ ಸಂಚಲನ ಮೂಡಿಸಿತ್ತು.
ಇದನ್ನೂ ಓದಿ: ರುದ್ರೇಶ್ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಆತ್ಮಹತ್ಯೆಯಲ್ಲ ಕೊಲೆ ಎಂದು ಬಂತು ಅನಾಮಧೇಯ ಪತ್ರ!
ಈ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಆರೋಪ=ಪ್ರತ್ಯಾರೋಪಗಳು ನಡೆದಿದ್ದವು. ಆತ್ಮಹತ್ಯೆಗೆ ಲಕ್ಷ್ಮೀ ಹೆಬ್ಬಾಳ್ಕರ್ ಕಾರಣ ಎಂಬ ಆರೋಪ ಕೇಳಿಬಂದಿದ್ದವು. ಹೀಗಾಗಿ ಬಿಜೆಪಿ ಪ್ರತಿಭಟನೆ ನಡೆಸಿ ಹೆಬ್ಬಾಳ್ಕರ್ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದರು.
ಇದರ ಬೆನ್ನಲ್ಲೇ ಇದೀಗ ಬೆಳಗಾವಿ ಜಿಲ್ಲೆಯಲ್ಲಿ ಮತ್ತೋರ್ವ ಸರ್ಕಾರಿ ನೌಕರ ಆತ್ಮಹತ್ಯೆ ಮಾಡಿಕೊಂಡಿದ್ದು ಅಚ್ಚರಿಗೆ ಕಾರಣವಾಗಿದೆ. ಎಎಸ್ಐ ಆತ್ಮಹತ್ಯೆಗೆ ಇನ್ನೂ ನಿಖರ ಕಾರಣ ತಿಳಿದುಬಂದಿಲ್ಲ. ಸದ್ಯ ಈ ಬಗ್ಗೆ ಪೊಲೀಸರು ತನಿಖೆ ನಡೆಸಿದ್ದು, ಬಳಿಕ ಆತ್ಮಹತ್ಯೆಗೆ ಕಾರಣ ಗೊತ್ತಾಗಲಿದೆ. ಇನ್ನು ಈ ಎಎಸ್ಐ ಆತ್ಮಹತ್ಯೆ ಪ್ರಕರಣ ರಾಜಕೀಯವಾಗಿ ತೀವ್ರ ಸ್ವರೂಪ ಪಡೆದುಕೊಳ್ಳುವ ಸಾಧ್ಯತೆಗಳಿವೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:52 pm, Fri, 6 December 24