ಬೆಳಗಾವಿ: ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಎಂಟು ಜನ ಸತ್ತರೂ ಮಾಲೀಕರ ವಿರುದ್ಧ ದಾಖಲಾಗದ ದೂರು

ಬೆಳಗಾವಿ ಜಿಲ್ಲೆಯ ಬೈಲಹೊಂಗಲದ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಭೀಕರ ಬಾಯ್ಲರ್ ಸ್ಪೋಟ ದುರಂತದಲ್ಲಿ ಎಂಟು ಬಡ ಕಾರ್ಮಿಕರು ಮೃತಪಟ್ಟಿದ್ದಾರೆ. ಘಟನೆ ನಡೆದು ಎರಡು ದಿನಗಳಾದರೂ ಮಾಲೀಕರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದಿರುವುದು ಹಾಗೂ ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ನೀಡದಿರುವುದು ಸಾರ್ವಜನಿಕ ಆಕ್ರೋಶಕ್ಕೆ ಕಾರಣವಾಗಿದೆ. 

ಬೆಳಗಾವಿ: ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಪೋಟ; ಎಂಟು ಜನ ಸತ್ತರೂ ಮಾಲೀಕರ ವಿರುದ್ಧ ದಾಖಲಾಗದ ದೂರು
ಮೃತರ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
Edited By:

Updated on: Jan 09, 2026 | 8:52 AM

ಬೆಳಗಾವಿ, ಜನವರಿ 09:  ಜಿಲ್ಲೆಯ ಬೈಲಹೊಂಗಲ ತಾಲ್ಲೂಕಿನ ಇನಾಮದಾರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಭೀಕರ ಬಾಯ್ಲರ್ ಸ್ಪೋಟ ದುರಂತದಲ್ಲಿ ಎಂಟು ಜನ ಬಡ ಕಾರ್ಮಿಕರು ಮೃತಪಟ್ಟಿದ್ದು, ಘಟನೆ ರಾಜ್ಯವನ್ನೇ ಬೆಚ್ಚಿಬೀಳಿಸಿದೆ. ಆದರೆ ಇಷ್ಟೊಂದು ದೊಡ್ಡ ದುರಂತ ನಡೆದರೂ ಕಾರ್ಖಾನೆ ಮಾಲೀಕರ ವಿರುದ್ಧ ಯಾವುದೇ ದೂರು ದಾಖಲಾಗದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

ಮಾಲೀಕರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ

ಕಾರ್ಖಾನೆಯಲ್ಲಿ ಅಗತ್ಯ ಸುರಕ್ಷತಾ ಕ್ರಮಗಳಿಲ್ಲದಿರುವುದೇ ದುರಂತಕ್ಕೆ ಪ್ರಮುಖ ಕಾರಣ ಎನ್ನಲಾಗುತ್ತಿದ್ದು, ಸುರಕ್ಷತೆಗೆ ಆದ್ಯತೆ ನೀಡಬೇಕಿದ್ದ ಕಾರ್ಖಾನೆ ಆಡಳಿತ ಮಂಡಳಿ ತೋರಿದ ಬೇಜವಾಬ್ದಾರಿಯಿಂದ ಎಂಟು ಅಮಾಯಕ ಜೀವಗಳು ಬಲಿಯಾಗಿವೆ ಎಂಬ ಆರೋಪ ಕೇಳಿಬರುತ್ತಿದೆ. ಆದರೆ ಪೊಲೀಸರು ಕೇವಲ ಕಾರ್ಖಾನೆಯ ಜನರಲ್ ಮ್ಯಾನೇಜರ್ ಸೇರಿದಂತೆ ಮೂವರು ಸಿಬ್ಬಂದಿಗಳ ವಿರುದ್ಧ ಮಾತ್ರ ಪ್ರಕರಣ ದಾಖಲಿಸಿ, ಮಾಲೀಕರ ವಿರುದ್ಧ ಕ್ರಮ ತೆಗೆದುಕೊಳ್ಳದೆ ಕೈತೊಳೆದುಕೊಂಡಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಘಟನೆ ನಡೆದು ಎರಡು ದಿನಗಳಾದರೂ ಯಾರನ್ನೂ ಬಂಧಿಸದೇ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ವಿಕ್ರಮ್ ಇನಾಮದಾರ, ವಿಜಯ ಮೆಟಗುಡ್ಡ ಮತ್ತು ಪ್ರಭಾಕರ್ ಕೋರೆ ಪಾಲುದಾರಿಕೆಯಲ್ಲಿ ನಡೆಯುತ್ತಿರುವ ಈ ಕಾರ್ಖಾನೆಯ ಮೇಲೆ ಪ್ರಭಾವಿಗಳ ಒತ್ತಡದಿಂದ ತನಿಖೆ ದಿಕ್ಕು ತಪ್ಪಿದೆಯೇ ಎಂಬ ಪ್ರಶ್ನೆಗಳು ಉದ್ಭವಿಸಿವೆ.

8ರಲ್ಲಿ ಓರ್ವ ಮೃತರ ಕುಟುಂಬಕ್ಕೆ ಮಾತ್ರ ಪರಿಹಾರ ಘೋಷಣೆ

ಇತ್ತ ಮೃತರ ಕುಟುಂಬಸ್ಥರು ಸೂಕ್ತ ಪರಿಹಾರಕ್ಕೆ ಆಗ್ರಹಿಸಿ ಚನ್ನಮ್ಮ ವೃತ್ತದಲ್ಲಿ ಶವವಿಟ್ಟು ಪ್ರತಿಭಟನೆ ನಡೆಸಿದರೂ ಕಾರ್ಖಾನೆ ಆಡಳಿತ ಮಂಡಳಿ ನಿರ್ಲಕ್ಷ್ಯ ಮಾಡುತ್ತಿದೆ ಎಂದು ಆರೋಪಿಸಲಾಗಿದೆ. ಎಂಟು ಜನರಲ್ಲಿ ಕೇವಲ ಒಬ್ಬ ಮೃತ ಕಾರ್ಮಿಕನ ಕುಟುಂಬಕ್ಕೆ ಮಾತ್ರ 18 ಲಕ್ಷ ರೂ. ಪರಿಹಾರ ಭರವಸೆ ನೀಡಲಾಗಿದೆ. ಉಳಿದ ಕುಟುಂಬಗಳಿಗೆ ಪರಿಹಾರದ ಕುರಿತು ಯಾವುದೇ ಅಧಿಕೃತ ಘೋಷಣೆ ಮಾಡಿರದ ಕಾರಣ ಬಡವರ ಜೀವಕ್ಕೆ ಬೆಲೆ ಇಲ್ಲವೇ ಎಂದು ಮೃತರ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.