ಸಾವಿನಲ್ಲೂ ಒಂದಾದ ಯುವ ದಂಪತಿ! ಪತ್ನಿಯ ಸಾವಿನ ದಿನವೇ ರಸ್ತೆ ಅಪಘಾತದಲ್ಲಿ ಪ್ರಾಣಬಿಟ್ಟ ಪತಿ

ಬೆಳಗಾವಿ ಜಿಲ್ಲೆಯಲ್ಲಿ ದಂಪತಿ ಒಂದೇ ದಿನ ಸಾವನ್ನಪ್ಪಿದ್ದು, ಮೂವರು ಮಕ್ಕಳು ಅನಾಥರಾಗಿದ್ದಾರೆ. ಬೈಲಹೊಂಗಲದ ಮಧುರಾ (30) ಹೊಟ್ಟೆನೋವಿನಿಂದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡರೆ, ಪತಿ ಕರೆಪ್ಪ (36) ಈ ಸುದ್ದಿ ಕೇಳಿ ಆಸ್ಪತ್ರೆಗೆ ಧಾವಿಸುವಾಗ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ದುರಂತ ಕುಟುಂಬದಲ್ಲಿ ಶೋಕ ಆವರಿಸಿದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಸಾವಿನಲ್ಲೂ ಒಂದಾದ ಯುವ ದಂಪತಿ! ಪತ್ನಿಯ ಸಾವಿನ ದಿನವೇ ರಸ್ತೆ ಅಪಘಾತದಲ್ಲಿ ಪ್ರಾಣಬಿಟ್ಟ ಪತಿ
ಸಾವಿನಲ್ಲೂ ಒಂದಾದ ಯುವ ದಂಪತಿ! ಪತ್ನಿಯ ಸಾವಿನ ದಿನವೇ ರಸ್ತೆ ಅಪಘಾತದಲ್ಲಿ ಪ್ರಾಣಬಿಟ್ಟ ಪತಿ
Edited By:

Updated on: Apr 06, 2026 | 2:09 PM

ಬೆಳಗಾವಿ, ಏಪ್ರಿಲ್ 06: ಜಿಲ್ಲೆಯಲ್ಲಿ ಒಂದೇ ದಿನ ಪತಿ-ಪತ್ನಿ (Husband and wife death) ಸಾವನ್ನಪ್ಪಿರುವ ಘಟನೆ ನಡೆದಿದ್ದು, ದಂಪತಿಯ ಮೂವರು ಮಕ್ಕಳು ಅನಾಥರಾಗಿದ್ದಾರೆ. ಪತ್ನಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ವಿಷಯ ತಿಳಿದ ಪತಿ, ಬೈಕ್​ನಲ್ಲಿ ಬರುವಾಗ ಅಪಘಾತಕ್ಕೀಡಾಗಿದ್ದು, ದಾರುಣವಾಗಿ ಸಾವನ್ನಪ್ಪಿದ್ದಾನೆ.

ಹೊಟ್ಟೆನೋವಿನಿಂದ ಬಳಲುತ್ತಿದ್ದ ಪತ್ನಿ

ಬೈಲಹೊಂಗಲ ತಾಲೂಕಿನ ಅರವಳ್ಳಿ ಗ್ರಾಮದ ಕರೆಪ್ಪ (36) ಹಾಗೂ ಅವರ ಪತ್ನಿ ಮಧುರಾ (30) ಮೃತ ದಂಪತಿ. ಹಲವು ವರ್ಷಗಳಿಂದ ಹೊಟ್ಟೆನೋವಿನಿಂದ ಬಳಲುತ್ತಿದ್ದ ಮಧುರಾ, ನೋವು ತಾಳಲಾರದೆ ಕ್ರಿಮಿನಾಶಕ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ತಕ್ಷಣವೇ ಕುಟುಂಬಸ್ಥರು ಅವರನ್ನು ಆಸ್ಪತ್ರೆಗೆ ಸಾಗಿಸಲು ಮುಂದಾದರೂ, ಮಾರ್ಗ ಮಧ್ಯೆಯೇ ಅವರು ಮೃತಪಟ್ಟಿದ್ದಾರೆ.

ಪತ್ನಿಯ ಸಾವಿನ ಸುದ್ದಿ ತಿಳಿದು ಆಘಾತಗೊಂಡ ಕರೆಪ್ಪ, ಬೈಕ್‌ನಲ್ಲಿ ಆಸ್ಪತ್ರೆಗೆ ಧಾವಿಸುತ್ತಿದ್ದ ವೇಳೆ ಅಪಘಾತಕ್ಕೀಡಾಗಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅವಸರದಲ್ಲಿ ಬರುತ್ತಿದ್ದ ವೇಳೆ ಬಸ್ ಚಕ್ರಕ್ಕೆ ಸಿಲುಕಿದ ಪರಿಣಾಮ ಸ್ಥಳದಲ್ಲೇ ಅವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಮೂವರು ಮಕ್ಕಳು ಅನಾಥ!

ಒಂದೇ ದಿನ ದಂಪತಿಗಳಿಬ್ಬರ ಸಾವಿನಿಂದ ಕುಟುಂಬದಲ್ಲಿ ಶೋಕದ ವಾತಾವರಣ ಆವರಿಸಿದ್ದು, ಗ್ರಾಮದಲ್ಲಿ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ದಂಪತಿಗೆ ಒಂದು ಹೆಣ್ಣು ಮಗು ಹಾಗೂ ಇಬ್ಬರು ಗಂಡು ಮಕ್ಕಳಿದ್ದು, ಇದೀಗ ಅವರು ಅನಾಥರಾಗಿದ್ದಾರೆ.

ಕರೆಪ್ಪ ಮತ್ತು ಮಧುರಾ ದಂಪತಿ ಸುಮಾರು ಒಂಬತ್ತು ವರ್ಷಗಳ ಹಿಂದೆ ವಿವಾಹವಾಗಿದ್ದರು. ನಿನ್ನೆಯಷ್ಟೇ ತಮ್ಮ ಮಕ್ಕಳಿಗೆ ಹೊಸ ಬಟ್ಟೆಗಳನ್ನು ಖರೀದಿಸಿ, ಮನೆಗೆ ಬೇಕಾದ ಸಾಮಗ್ರಿಗಳನ್ನು ಕೂಡ ತಂದಿದ್ದರು. ಮಧುರಾ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರೂ, ತೀವ್ರ ನೋವಿನ ಹಿನ್ನೆಲೆ ಈ ರೀತಿಯ ನಿರ್ಧಾರ ತೆಗೆದುಕೊಂಡಿರಬಹುದು ಎಂದು ಶಂಕಿಸಲಾಗಿದೆ. ಈ ಘಟನೆ ಬೈಲಹೊಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದು, ಪೊಲೀಸರು ಪ್ರಕರಣದ ಕುರಿತು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

 

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us