
ಬೆಳಗಾವಿ, ಜನವರಿ 08: ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮ್‌ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ ಪ್ರಕರಣಕ್ಕೆ (boiler explosion) ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಖಾಸಗಿ ಆಸ್ಪತ್ರೆಯಲ್ಲಿ ಇಂದು ಒಂದೇ ದಿನ ಐವರು ಕಾರ್ಮಿಕರು ಸಾವನ್ನಪ್ಪಿದ್ದಾರೆ (death). ಆ ಮೂಲಕ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆ ಆಗಿದೆ. ಮುರಗೋಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಅಕ್ಷಯ ತೋಪಡೆ, ದೀಪಕ್ ಮುನವಳ್ಳಿ, ಸುದರ್ಶನ ಬನೋಶಿ, ಬೈಲಹೊಂಗಲ ತಾಲೂಕಿನ ಅರವಳ್ಳಿ ನಿವಾಸಿ ಮಂಜುನಾಥ ಮಡಿವಾಳಪ್ಪ ಕಾಜಗಾರ್, ಗೋಕಾಕ್ ತಾಲೂಕಿನ ಗೊಡಚಿನಮಲ್ಕಿ ಗ್ರಾಮದ ನಿವಾಸಿ ಭರತೇಶ ಸಾರವಾಡಿ, ತೇರದಾಳ ಅಥಣಿ ಪಟ್ಟಣದ ನಿವಾಸಿ ಮಂಜುನಾಥ್ ತೇರದಾಳ, ಬಾಗಲಕೋಟ ಜಿಲ್ಲೆಯ ಮರೆಗುದ್ದಿ ಗ್ರಾಮದ ಗುರುಪಾದಪ್ಪ ತಮ್ಮನ್ನವರ್ ಮತ್ತು ಬೆಳಗಾವಿ ಜಿಲ್ಲೆಯ ಗೋಕಾಕ್ನ ರಾಘವೇಂದ್ರ ಗಿರಿಯಾಲ(35) ಮೃತ ದುರ್ದೈವಿಗಳು.
ಇದನ್ನೂ ಓದಿ: ಬೆಳಗಾವಿಯ ಸಕ್ಕರೆ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ, ಮೂವರು ಕಾರ್ಮಿಕರ ಸಾವು, 5 ಮಂದಿಗೆ ಗಾಯ
ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ಮರಕುಂಬಿ ಗ್ರಾಮದ ಬಳಿಯ ಇನಾಮ್‌ದಾರ್ ಸಕ್ಕರೆ ಕಾರ್ಖಾನೆಯಲ್ಲಿ ಬುಧವಾರ ಬಾಯ್ಲರ್ ಸ್ಫೋಟಗೊಂಡು ಎಂಟು ಜನರಲ್ಲಿ ಮೂವರು ಕಾರ್ಮಿಕರು ಸಾವನ್ನಪ್ಪಿದ್ದರು. ವಿಕ್ರಮ ಇನಾಮದಾರ್ ಎಂಬುವವರಿಗೆ ಕಾರ್ಖಾನೆ ಸೇರಿದೆ. ನಿನ್ನೆ ಕಾರ್ಖಾನೆ ವಾಲ್ ದುರಸ್ತಿ ಮಾಡುವಾಗ ವಾಲ್ ಸ್ಫೋಟಗೊಂಡು ಕುದಿಯುವ ಕಬ್ಬಿನ ಹಾಲು ಕಾರ್ಮಿಕರ ಮೈಮೇಲೆ ಬಿದ್ದಿತ್ತು. ಗಂಭೀರವಾಗಿ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಚಿಕಿತ್ಸೆ ಫಲಿಸದೆ ಒಬ್ಬೊಬ್ಬರೇ ಕಾರ್ಮಿಕರು ಸಾವನ್ನಪ್ಪಿದ್ದಾರೆ.
ಇನ್ನು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಮೃತ ಕಾರ್ಮಿಕರ ಕುಟುಂಬಸ್ಥರು ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಖಾನೆ ಸ್ಪಂದಿಸುತ್ತಿಲ್ಲ, ಸರ್ಕಾರ ಕೂಡ ಯಾವುದೇ ಪರಿಹಾರ ನೀಡಿಲ್ಲ ಎಂದು ಸರ್ಕಾರ ಹಾಗೂ ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದಾರೆ.
ಇದನ್ನೂ ಓದಿ: ಕಬ್ಬು ಕಟಾವು ಯಂತ್ರಕ್ಕೆ ಸಿಲುಕಿ ಮಹಿಳಾ ಕಾರ್ಮಿಕರಿಬ್ಬರು ಸಾವು: ಹೊಟ್ಟೆಪಾಡಿಗೆ ಹೋದವರು ಜೀವವನ್ನೇ ತೆತ್ತರು!
ಪರಿಹಾರ ಘೋಷಣೆ ಆಗುವವರೆಗೂ ಶವ ತೆಗೆದುಕೊಂಡು ಹೋಗಲ್ಲ ಎಂದು ಕುಟುಂಬಸ್ಥರು ಪಟ್ಟು ಹಿಡಿದಿದ್ದಾರೆ. ಮೃತಪಟ್ಟ ಪ್ರತಿಯೊಬ್ಬ ಕಾರ್ಮಿಕನ ಕುಟುಂಬಕ್ಕೆ 1 ಕೋಟಿ ರೂ ಪರಿಹಾರ ನೀಡುವಂತೆ ಬೈಲಹೊಂಗಲದಲ್ಲಿ ರಸ್ತೆ ತಡೆದು ಕುಟುಂಬ ಸದಸ್ಯರು ಮತ್ತು ರೈತ ಮುಖಂಡರ ಆಗ್ರಹಿಸಿದ್ದು, ಬಡವರ ಮಕ್ಕಳ ಸಾವಿಗೆ ಬೆಲೆಯೇ ಇಲ್ವಾ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 3:11 pm, Thu, 8 January 26