
ಬೆಳಗಾವಿ, ಜನವರಿ 10: 2026ರ ರಾಜ್ಯಮಟ್ಟದ ಎಸ್‌ಎಸ್‌ಎಲ್‌ಸಿ ಪೂರ್ವಸಿದ್ಧತಾ ಪರೀಕ್ಷೆ–1ಕ್ಕೆ ಸಂಬಂಧಿಸಿದ ಸಮಾಜ ವಿಜ್ಞಾನ ವಿಷಯದ ಪ್ರಶ್ನೆಪತ್ರಿಕೆ ಸೋರಿಕೆಯಾಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಇಂದು ನಡೆಯುತ್ತಿರುವ ಪೂರ್ವಭಾವಿ ಪರೀಕ್ಷೆಯ ವೇಳೆ ಬೆಳಗಾವಿ ಕೇಂದ್ರದಿಂದ ಪ್ರಶ್ನೆಪತ್ರಿಕೆ ಲೀಕ್ ಆಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿರುವುದು ಆತಂಕ ಮೂಡಿಸಿದೆ.
ಸಮಾಜ ವಿಜ್ಞಾನ ಪರೀಕ್ಷೆಯ ಪ್ರಶ್ನೆಪತ್ರಿಕೆ ಪರೀಕ್ಷೆ ಆರಂಭಕ್ಕೂ ಮುನ್ನವೇ ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಿದ್ದು, ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಉಂಟಾಗಿದೆ. “Delta SSLC” ಎಂಬ ಇನ್‌ಸ್ಟಾಗ್ರಾಮ್ ಖಾತೆಯಿಂದ ಪ್ರಶ್ನೆಪತ್ರಿಕೆ ವೈರಲ್ ಆಗಿರುವುದು ಬೆಳಕಿಗೆ ಬಂದಿದೆ. ಈ ಖಾತೆ ಪ್ರತಿವರ್ಷವೂ ಪರೀಕ್ಷೆ ಸಮಯದಲ್ಲಿ ಸಕ್ರಿಯವಾಗುತ್ತಿದ್ದು, ಕಳೆದ ವರ್ಷವೂ ಇದೇ ಖಾತೆಯಿಂದ ಪ್ರಶ್ನೆಪತ್ರಿಕೆ ಸೋರಿಕೆಯಾದ ಆರೋಪಗಳು ಕೇಳಿಬಂದಿದ್ದವು. ಆದರೂ, ಈ ಬಗ್ಗೆ ಪರೀಕ್ಷಾ ಮಂಡಳಿ ಅಧಿಕಾರಿಗಳು ಸಮರ್ಪಕ ಕ್ರಮ ಕೈಗೊಂಡಿಲ್ಲ ಎಂಬ ಟೀಕೆಗಳು ಕೇಳಿಬರುತ್ತಿವೆ.
ಪದೇ ಪದೇ ನಡೆಯುತ್ತಿರುವ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳು ಪರೀಕ್ಷಾ ವ್ಯವಸ್ಥೆಯ ಭದ್ರತೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎಬ್ಬಿಸಿವೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಧಕ್ಕೆಯಾಗುವಂತಹ ಈ ಘಟನೆಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ. ಈ ವಿಷಯದ ಕುರಿತು ಇನ್ನೂ ಪರೀಕ್ಷಾ ಮಂಡಳಿಯಿಂದ ಅಧಿಕೃತ ಸ್ಪಷ್ಟನೆ ಲಭ್ಯವಾಗಿಲ್ಲ. ಪ್ರಶ್ನೆಪತ್ರಿಕೆ ಸೋರಿಕೆ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆಹಚ್ಚುವಂತೆ ಶಿಕ್ಷಣ ಇಲಾಖೆ ಮೇಲೆ ಒತ್ತಡ ಹೆಚ್ಚುತ್ತಿದೆ.
ಇದನ್ನೂ ಓದಿ SSLC ವಿದ್ಯಾರ್ಥಿಗಳೇ ಎಚ್ಚರ! ಹಣ ಕೊಟ್ರೆ ಪ್ರಶ್ನೆ ಪತ್ರಿಕೆ ಸಿಗತ್ತೆ ಅಂತಾ ಯಾಮಾರಬೇಡಿ
ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಮೀಪಿಸುತ್ತಿದ್ದಂತೆ, ಕಿಡಿಗೇಡಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆ ಪತ್ರಿಕೆಗಳನ್ನು ಲೀಕ್ ಮಾಡುವುದಾಗಿ ವಿದ್ಯಾರ್ಥಿಗಳನ್ನು ವಂಚಿಸುತ್ತಿದ್ದಾರೆ. 100 ರೂಪಾಯಿಗೆ ನಕಲಿ ಪತ್ರಿಕೆ ನೀಡಿ, ವಿದ್ಯಾರ್ಥಿಗಳ ಹಣ ಹಾಗೂ ಸಮಯವನ್ನು ಹಾಳು ಮಾಡುತ್ತಿದ್ದಾರೆ. ಶಿಕ್ಷಣ ಇಲಾಖೆ ಮತ್ತು ತಜ್ಞರು ಈ ವದಂತಿಗಳಿಗೆ ಬಲಿಯಾಗದಂತೆ ಮಕ್ಕಳಿಗೆ ಎಚ್ಚರಿಕೆ ನೀಡಿದ್ದು, ಅಧಿಕೃತ ಮಾಹಿತಿಗಳನ್ನಷ್ಟೇ ನಂಬಲು ಮನವಿ ಮಾಡಿದ್ದಾರೆ. ವಂಚಕರ ವಿರುದ್ಧ ದೂರು ದಾಖಲಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.