ಬೆಳಗಾವಿ ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ನೀಡಿದ ಮಾನವ ಹಕ್ಕುಗಳ ಆಯೋಗ
ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿರುವ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದೆ. ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ಸೂಚನೆ ನೀಡಿದೆ.
ಬೆಳಗಾವಿ, ಡಿಸೆಂಬರ್ 15: ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆ ಬೆತ್ತಲೆಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (Human Rights Commission) ದಿಂದ ನೋಟಿಸ್ ಜಾರಿ ಮಾಡಲಾಗಿದೆ. ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಲಾಗಿದೆ. ನಾಲ್ಕು ವಾರಗಳಲ್ಲಿ ಉತ್ತರಿಸುವಂತೆ ರಾಷ್ತ್ರೀಯ ಮಾನವ ಹಕ್ಕುಗಳ ಆಯೋಗ ಸೂಚಿಸಿದೆ.
ತನಿಖೆಯ ಪ್ರಗತಿ, ಬಂಧನ, ಪರಿಹಾರ ನೀಡಿದ ಬಗ್ಗೆ ಮಾಹಿತಿ ನೀಡಿ. ಇಂತಹ ಘಟನೆ ತಡೆಗಟ್ಟಲು ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ಸೂಚನೆ ನೀಡಲಾಗಿದೆ.
ಇದನ್ನೂ ಓದಿ: ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ ಕೇಸ್: 5 ಸದಸ್ಯರನ್ನೊಳಗೊಂಡ ಸಮಿತಿ ರಚಿಸಿದ ಜೆಪಿ ನಡ್ಡಾ
ಸದ್ಯ ಈ ಪ್ರಕರಣ ಕುರಿತಾಗಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಅವರು 5 ಸದಸ್ಯರನ್ನೊಳಗೊಂಡ ಸತ್ಯ ಶೋಧನಾ ಸಮಿತಿಯೊಂದನ್ನು ರಚನೆ ಮಾಡಿದ್ದು, ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸುವಂತೆ ಸೂಚಿಸಿದ್ದಾರೆ.
ಜೆ.ಪಿ.ನಡ್ಡಾ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಇದು ಸಿಎಂ ಸಿದ್ದರಾಮಯ್ಯ ಅವರ ಆಕ್ರೋಶಕ್ಕೂ ಕಾರಣವಾಗಿದ್ದು, ಭಾರತೀಯ ಜನತಾ ಪಕ್ಷದ ಆಡಳಿತಾವಧಿಯಲ್ಲಿ ರಾಜ್ಯದಲ್ಲಿ ಮಹಿಳೆಯರ ಮೇಲೆ ಸಾಲು ಸಾಲು ದೌರ್ಜನ್ಯದ ಪ್ರಕರಣಗಳು ನಡೆಯುತ್ತಿದ್ದಾಗ ಕಣ್ಣು ಮುಚ್ಚಿ ಕೂತಿದ್ದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ನಿದ್ದೆಗಣ್ಣಿಗೆ ಬೆಳಗಾವಿಯಲ್ಲಿ ಇತ್ತೀಚೆಗೆ ಮಹಿಳೆಯೊಬ್ಬರ ಮೇಲೆ ನಡೆದಿರುವ ದೌರ್ಜನ್ಯ ಮಾತ್ರ ಕಾಣಿಸಿಕೊಂಡು ಅದರಲ್ಲಿ ರಾಜಕೀಯ ಬೇಳೆ ಬೇಯಿಸಲು ಮುಂದಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಬಿಜೆಪಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡುತ್ತಿದ್ದಂತೆ ಎಚ್ಚೆತ್ತ ಸರ್ಕಾರ ಸಂತ್ರಸ್ತೆ ಮಹಿಳೆಗೆ ಸಿಎಂ ಸಿದ್ದರಾಮಯ್ಯ 5 ಲಕ್ಷ ರೂಪಾಯಿ ಪರಿಹಾರ ಘೋಷಿಸಿದ್ದಾರೆ. ಸಿಎಂ ಪರಿಹಾರ ಘೋಷಣೆ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾಹಿತಿ ನೀಡಿದ್ದಾರೆ. ಬೆಳಗಾವಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದಿಂದಲೂ 50 ಸಾವಿರ ರೂಪಾಯಿ ಪರಿಹಾರ ನೀಡಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 9:57 pm, Fri, 15 December 23