ಬೆಳಗಾವಿ: ಕಾಂಗ್ರೆಸ್ ಕಚೇರಿಯೊಳಗೆ ನುಗ್ಗಿದ ಬಿಜೆಪಿ ಕಾರ್ಯಕರ್ತರು; 27 ಜನರ ವಿರುದ್ಧ ಎಫ್ಐಆರ್.
ಇಂದು ರಾಜ್ಯಕ್ಕೆ ಕೇಂದ್ರ ಸರ್ಕಾರದಿಂದ ಅನ್ಯಾಯ ಆಗುತ್ತಿದೆ. ಮಲತಾಯಿ ಧೋರಣೆ ತೋರುತ್ತಿದೆ ಎಂದು ಇಡೀ ರಾಜ್ಯ ಸರ್ಕಾರವೇ ದೆಹಲಿಯ ಜಂತರ್ ಮಂತರ್ನಲ್ಲಿ ಹೋರಾಟ ಮಾಡಿದೆ. ಇತ್ತ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ದ ಬಿಜೆಪಿ ಪಕ್ಷದಿಂದ ಹೋರಾಟ ನಡೆದಿದೆ. ಈ ಹೋರಾಟ ಬೆಳಗಾವಿಯಲ್ಲಿ ಇಂದು ತೀವ್ರ ಸ್ವರೂಪ ಪಡೆದುಕೊಂಡಿತ್ತು. ಅದರಂತೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಒಳಗೆ ನುಗ್ಗಿದ್ದು, 27 ಜನರ ವಿರುದ್ದ ಪ್ರಕರಣ ದಾಖಲಾಗಿದೆ.
ಬೆಳಗಾವಿ, ಫೆ.07: ಬೆಳಗಾವಿಯಲ್ಲಿ ಕಾಂಗ್ರೆಸ್ ಕಚೇರಿಗೆ (Belagavi Congress Office) ಬಿಜೆಪಿ ಕಾರ್ಯಕರ್ತರು ನುಗ್ಗಿದ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಕಚೇರಿಗೆ ನುಗ್ಗಿದ 27 ಬಿಜೆಪಿ ಕಾರ್ಯಕರ್ತರ ವಿರುದ್ಧ ಇದೀಗ ಎಫ್ಐಆರ್(FIR) ದಾಖಲಿಸಲಾಗಿದೆ. ಕಾಂಗ್ರೆಸ್ ಭವನಕ್ಕೆ ಅತಿಕ್ರಮಣ ಪ್ರವೇಶ ಹಾಗೂ ಸಂಚಾರಕ್ಕೆ ಅಡ್ಡಿ ಪಡಿಸಿದ ಆರೋಪದಡಿ ಬಿಜೆಪಿ ಮಹಾನಗರ ಅಧ್ಯಕ್ಷೆ ಗೀತಾ ಸುತಾರ್, ಜಿಲ್ಲಾಧ್ಯಕ್ಷ ಸುಭಾಷ್ ಪಾಟೀಲ್, ಬಿಜೆಪಿ ಜಿಲ್ಲಾ ಪ್ರಧಾನಕಾರ್ಯದರ್ಶಿ ಮುರಗೇಂದ್ರಗೌಡ ಪಾಟೀಲ್ ಸೇರಿದಂತೆ 27 ಜನರ ವಿರುದ್ಧ ಐಪಿಸಿ ಸೆಕ್ಷನ್ 143, 147, 341, 283, 448 ಹಾಗೂ 149 ಅಡಿ ಮಾರ್ಕೆಟ್ ಠಾಣೆಯಲ್ಲಿ ಎಫ್ಐಆರ್ ದಾಖಲು ಮಾಡಲಾಗಿದೆ.
ಇಂದು ಬಿಜೆಪಿ ಕಾರ್ಯಕರ್ತರಿಂದ ದೊಡ್ಡ ಹೈಡ್ರಾಮ ಬೆಳಗಾವಿಯಲ್ಲಿ ನಡೆದಿದೆ. ರಾಜ್ಯ ಸರ್ಕಾರದ ವಿರುದ್ದ ಬಿಜೆಪಿಯಿಂದ ಕರೆ ಕೊಟ್ಟಿದ್ದ ಹೋರಾಟ, ಬೆಳಗಾವಿಯಲ್ಲಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿತ್ತು. ನಗರದ ಚೆನ್ನಮ್ಮ ವೃತ್ತದಲ್ಲಿ ಜಮಾವಣೆಗೊಂಡ ಬಿಜೆಪಿ ಕಾರ್ಯಕರ್ತರು, ಎಮ್ಮೆಗಳನ್ನ ತಂದು, ತಲೆ ಮೇಲೆ ಹಾಲಿನ ಕ್ಯಾನ್ ಹಿಡಿದು ಹೋರಾಟ ಶುರು ಮಾಡಿದರು. ಬಳಿಕ ಪ್ರತಿಭಟನಾ ಮೆರವಣಿಗೆ ಮೂಲಕ ಡಿಸಿ ಕಚೇರಿಗೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು, ಡಿಸಿ ಕಚೇರಿ ಎದುರು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.
ಇದನ್ನೂ ಓದಿ:ಬೆಳಗಾವಿ: ರಾಜ್ಯ ಸರ್ಕಾರದ ವಿರುದ್ಧ ಪ್ರತಿಭಟನೆ: ಕಾಂಗ್ರೆಸ್ ಕಚೇರಿಯೊಳಗೆ ನುಗ್ಗಿದ ಬಿಜೆಪಿ ಕಾರ್ಯಕರ್ತರು
ರೈತರಿಗೆ ನೀಡಬೇಕಾದ ನಾಲ್ಕು ಸಾವಿರ ಹಣ ವಾಪಾಸ್ ಪಡೆದಿದ್ದು, ಹಾಲು ಉತ್ಪಾದರ ಪ್ರೋತ್ಸಾಹಧನ ನೀಡದಿರುವುದು, ಜಮೀನು ವಹೀವಾಟು ಮೇಲೆ ಮುದ್ರಾಂಕ ಶುಲ್ಕು ಹೆಚ್ಚಿಸಿರುವುದು ಸೇರಿದಂತೆ ಹಲವು ವಿಷಯಗಳನ್ನಿಟ್ಟುಕೊಂಡು ಹೋರಾಟ ಮಾಡಿದರು. ಇದಾದ ಬಳಿಕ ಏಕಾಏಕಿ ಎಲ್ಲ ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಮುತ್ತಿಗೆಗೆ ಹೊರಟರು. ಐವತ್ತಕ್ಕೂ ಅಧಿಕ ಕಾರ್ಯಕರ್ತರು ಕಾಂಗ್ರೆಸ್ ಕಚೇರಿ ಎದುರಿನ ಬ್ಯಾರಿಕೆಡ್ ತಳ್ಳಿ ಒಳ ನುಗ್ಗಲು ಯತ್ನಿಸಿದರು. ಈ ವೇಳೆ ಕೆಲವರನ್ನ ಪೊಲೀಸರು ತಡೆಯುವ ಕೆಲಸ ಮಾಡಿದರೂ, ಇನ್ನು ಕೆಲವರು ಕಚೇರಿಗೆ ನುಗ್ಗಿ ಡಿಕೆ ಸುರೇಶ್ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು.
ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕುತ್ತಿದ್ದಂತೆ ಅಲರ್ಟ್ ಆದ ಮಾರ್ಕೆಟ್ ಠಾಣೆ ಪೊಲೀಸರು, ಕೂಡಲೇ ಎಲ್ಲರನ್ನ ಎಳೆದು ಹೊರ ತರುವ ಕೆಲಸ ಮಾಡಿದರು. ಈ ವೇಳೆ ಪೊಲೀಸರು ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ಕೂಡ ನಡೆಯಿತು. ಈ ವೇಳೆ ಕಾಂಗ್ರೆಸ್ ಕಾರ್ಯಕರ್ತರೊಬ್ಬರು ಬಿಜೆಪಿ ಕಾರ್ಯಕರ್ತರ ಎದುರೇ ಮೋದಿಗೆ ಧಿಕ್ಕಾರ ಕೂಗಿ ಆಕ್ರೋಶ ಹೊರ ಹಾಕಿದರು. ಇತ್ತ ಮೂವತ್ತಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರನ್ನ ಪೊಲೀಸರು ವಶಕ್ಕೆ ಪಡೆದುಕೊಂಡು ಹೋದರು. ವಿಚಾರ ಗೊತ್ತಾಗುತ್ತಿದ್ದಂತೆ ಕೆಪಿಸಿಸಿ ಸದಸ್ಯೆ ಆಯಿಶಾ ಸನದಿ ಮತ್ತು ಕಾರ್ಯಕರ್ತರು ಕಾಂಗ್ರೆಸ್ ಕಚೇರಿಗೆ ಆಗಮಿಸಿ ಬಿಜೆಪಿ ಕಾರ್ಯಕರ್ತರ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಜತೆಗೆ ರಸ್ತೆಯಲ್ಲಿ ಧರಣಿ ಕುಳಿತು ಕಚೇರಿಗೆ ನುಗ್ಗಿದ ಬಿಜೆಪಿ ಕಾರ್ಯಕರ್ತರನ್ನ ಬಂಧಿಸುವಂತೆ ಒತ್ತಾಯಿಸಿದರು. ಕೂಡಲೇ ಎಸಿಪಿ ಸ್ಥಳಕ್ಕೆ ಆಗಮಿಸಿ ಕಾಂಗ್ರೆಸ್ ಕಾರ್ಯಕರ್ತರ ಮನವೊಲಿಸಿ ವಾಪಾಸ್ ಕಳುಹಿಸುವ ಕೆಲಸ ಮಾಡಿದರು.
ಇದನ್ನೂ ಓದಿ:ದಿಲ್ಲಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ: ಪ್ರತಿಯಾಗಿ ರಾಜ್ಯದಲ್ಲಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ
ಒಟ್ಟಿನಲ್ಲಿ ಒಂದು ಕಡೆ ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಹೋರಾಟ ಮಾಡುತ್ತಿದ್ದರೆ, ಇನ್ನೊಂದು ಕಡೆ ರಾಜ್ಯ ಸರ್ಕಾರದ ವಿರುದ್ದ ಬಿಜೆಪಿ ಕಾರ್ಯಕರ್ತರು ಹೋರಾಟ ಮಾಡಿದ್ದಾರೆ. ಅಷ್ಟೇ ಅಲ್ಲದೇ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಿ ತಿರುಗೇಟು ಕೊಡುವ ಕೆಲಸ ಮಾಡಿದ್ದಾರೆ. ಇದೀಗ ಕಾಂಗ್ರೆಸ್ ಕಚೇರಿ ಎದುರು ಬ್ಯಾರಿಕೆಡ್ ಹಾಕಿ ಪೊಲೀಸರು ಬಂದೋಬಸ್ತ್ ಮಾಡಿಕೊಂಡಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ