ಚಿಕ್ಕೋಡಿ: ಅಕ್ರಮ ಸಂಬಂಧ ಹೊಂದಿದ್ದ ಯುವಕನಿಂದಲೇ ವಿವಾಹಿತೆಯ ಕೊಲೆ, ಕಾರಣ ವಿಚಿತ್ರ

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚನ್ಯಾನದಡ್ಡಿ ಗ್ರಾಮದ ಹೊರವಲಯದಲ್ಲಿ ವಿವಾಹಿತ ಮಹಿಳೆಯೊಬ್ಬರು ಕೊಲೆಯಾಗಿದ್ದಾರೆ. ಸುಮಾರು 9 ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದ ಸಂಜಯ್ ಚವ್ಹಾಣ, ಮದುವೆ ವಿಚಾರವಾಗಿ ಉಂಟಾದ ಕಲಹದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಆರೋಪದ ಮೇಲೆ ಬಂಧಿತನಾಗಿದ್ದಾನೆ. ನಾಪತ್ತೆ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಆಘಾತಕಾರಿ ಮಾಹಿತಿ ತಿಳಿದುಬಂದ ಬೆನ್ನಲ್ಲೇ ಯುವಕನ ಬಂಧನವಾಗಿದೆ.

ಚಿಕ್ಕೋಡಿ: ಅಕ್ರಮ ಸಂಬಂಧ ಹೊಂದಿದ್ದ ಯುವಕನಿಂದಲೇ ವಿವಾಹಿತೆಯ ಕೊಲೆ, ಕಾರಣ ವಿಚಿತ್ರ
ಐರಾವತಿ ಖೋತ ಹಾಗೂ ಸಂಜಯ ಚವ್ಹಾಣ
Edited By:

Updated on: Nov 28, 2026 | 11:24 AM

ಮುಖ್ಯಾಂಶಗಳು

  • ಒಂಬತ್ತು ವರ್ಷಗಳಿಂದ ಅಕ್ರಮ ಸಂಬಂಧ ಹೊಂದಿದ್ದ ಮಹಿಳೆಯ ಕೊಲೆ ಮಾಡಿದ ಯುವಕ
  • ಮದುವೆ ವಿಚಾರವಾಗಿ ಕಲಹವಾಗಿದ್ದೇ ಕಾರಣ
  • ಯುವಕ ಮದುವೆಯಾಗಲು ಯತ್ನಿಸಿದ್ದನ್ನು ತಡೆಯುತ್ತಿದ್ದ ಮಹಿಳೆ

ಬೆಳಗಾವಿ, ನವೆಂಬರ್ 28: ವಿವಾಹವಾಗುವುದಕ್ಕೆ ಅಡ್ಡಿಪಡಿಸುತ್ತಿದ್ದಳು ಎಂಬ ಕಾರಣಕ್ಕೆ ವಿವಾಹಿತ ಮಹಿಳೆಯನ್ನು ಕೊಲೆ ಮಾಡಿದ ಆರೋಪದ ಮೇಲೆ ಯುವಕನೊಬ್ಬನನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚನ್ಯಾನದಡ್ಡಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದ್ದು, ಕೊಲೆಯಾದ ಮಹಿಳೆಯನ್ನು ನನದಿ ಗ್ರಾಮದ ಐರಾವತಿ ಖೋತ (38) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿಯನ್ನು ಬಾಗಲಕೋಟೆ ಜಿಲ್ಲೆಯ ನರೇನೂರು ಗ್ರಾಮದ ಸಂಜಯ ಚವ್ಹಾಣ (28) ಎಂದು ತಿಳಿದುಬಂದಿದೆ.

9 ವರ್ಷಗಳ ಅಕ್ರಮ ಸಂಬಂಧ, ಮದುವೆ ವಿಚಾರವಾಗಿ ಕಲಹ

ಆರೋಪಿ ಸಂಜಯ್ ಹುಕ್ಕೇರಿ ತಾಲೂಕಿನ ಯಾದಗೂಡು ಗ್ರಾಮದ ಡಾಬಾದಲ್ಲಿ ಕೆಲಸ ಮಾಡುತ್ತಿದ್ದಾಗ ಐರಾವತಿ ಪರಿಚಯವಾಗಿದ್ದರು. ಬಳಿಕ ಇಬ್ಬರೂ ಸುಮಾರು 9 ವರ್ಷಗಳಿಂದ ಸಂಬಂಧ ಹೊಂದಿದ್ದರು ಎನ್ನಲಾಗಿದೆ. ಸಂಜಯ್ ಬೇರೊಬ್ಬ ಯುವತಿಯನ್ನು ಮದುವೆಯಾಗಲು ಮುಂದಾಗಿದ್ದ. ಈ ವೇಳೆ ಐರಾವತಿ ಮದುವೆಗೆ ಅಡ್ಡಿಪಡಿಸಿದ್ದರು ಎಂದು ಆರೋಪಿಸಲಾಗಿದೆ. ಈ ಹಿಂದೆ ಎರಡು ಬಾರಿ ಮದುವೆಗೆ ಹೆಣ್ಣು ನಿಶ್ಚಯವಾಗಿದ್ದಾಗಲೂ ಐರಾವತಿ ಅದನ್ನು ತಪ್ಪಿಸಿದ್ದರು ಎಂಬ ಆರೋಪವಿದೆ. ಮೂರನೇ ಬಾರಿಗೆ ಮದುವೆಗೆ ಹೆಣ್ಣು ನಿಶ್ಚಯವಾದಾಗಲೂ ತಮ್ಮನ್ನು ಬಿಟ್ಟು ಮದುವೆಯಾಗಬಾರದು ಎಂದು ಐರಾವತಿ ಪಟ್ಟು ಹಿಡಿದಿದ್ದರು. ಇದೇ ವಿಚಾರವಾಗಿ ಸಂಜಯ್ ಕೊಲೆಗೆ ಯೋಜನೆ ರೂಪಿಸಿದ್ದ ಎಂಬುದು ತನಿಖೆ ವೇಳೆ ತಿಳಿದುಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

Loading...

ದೇವಸ್ಥಾನಕ್ಕೆ ತೆರಳಿದ್ದ ಮಹಿಳೆ ನಾಪತ್ತೆ

ನವೆಂಬರ್ 14ರಂದು ಐರಾವತಿ ತೋರಣಹಳ್ಳಿಯ ದೇವಸ್ಥಾನಕ್ಕೆ ತೆರಳಿದ್ದ ವೇಳೆ ನಾಪತ್ತೆಯಾಗಿದ್ದರು. ಈ ಸಂಬಂಧ ಕುಟುಂಬಸ್ಥರು ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಿದ್ದರು. ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಕರೆ ವಿವರಗಳ ದಾಖಲೆ (CDR) ಆಧರಿಸಿ ಪರಿಶೀಲನೆ ನಡೆಸಿ ಸಂಜಯ್‌ನನ್ನು ಪತ್ತೆಹಚ್ಚಿದ್ದಾರೆ. ವಿಚಾರಣೆ ವೇಳೆ ಮಹಿಳೆಯನ್ನು ಕೊಲೆ ಮಾಡಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಲ್ಲು, ಬಿಯರ್ ಬಾಟಲಿಯಿಂದ ಹಲ್ಲೆ ಆರೋಪ

ಆರೋಪಿ ಸಂಜಯ್ ಕಲ್ಲು ಹಾಗೂ ಬಿಯರ್ ಬಾಟಲಿಯಿಂದ ಹಲ್ಲೆ ನಡೆಸಿ ಐರಾವತಿಯನ್ನು ಕೊಲೆ ಮಾಡಿದ್ದಾನೆ. ಬಳಿಕ ಚನ್ಯಾನದಡ್ಡಿ ಗ್ರಾಮದ ಹೊರವಲಯದ ಕಾಡಿನಲ್ಲಿ ಶವವನ್ನು ಎಸೆದು ಪರಾರಿಯಾಗಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಆಸ್ತಿ ವಿವಾದಕ್ಕೆ ಅತ್ತೆ, ಅಳಿಯನ ಕೊಲೆ; ಕೊಡಲಿಯಿಂದ ಕೊಚ್ಚಿ ಡಬಲ್ ಮರ್ಡರ್!

ಪೊಲೀಸರು ಸ್ಥಳ ಪರಿಶೀಲನೆ ನಡೆಸಿದಾಗ ಮಹಿಳೆಯ ಮೂಳೆಗಳು ಹಾಗೂ ಬಟ್ಟೆಗಳು ಸಂಪೂರ್ಣ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಎಫ್‌ಎಸ್ಎಲ್ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಸಾಕ್ಷ್ಯಗಳನ್ನು ಸಂಗ್ರಹಿಸಿದೆ. ಆರೋಪಿ ಸಂಜಯ್ ಚವ್ಹಾಣನನ್ನು ಸದ್ಯ ಚಿಕ್ಕೋಡಿ ಪೊಲೀಸರು ಬಂಧಿಸಿದ್ದು, ಈ ಸಂಬಂಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸಹದೇವ್​ ಮಾನೆ

ಸಹದೇವ ಯಲ್ಲಪ್ಪ ಮಾನೆ. ಹುಟ್ಟಿದ್ದು ಧಾರವಾಡ ತಾಲೂಕಿನ ಗುಳೇದಕೊಪ್ಪ ಗ್ರಾಮ. ಕರ್ನಾಟಕ ವಿಶ್ವ ವಿದ್ಯಾಲಯದಲ್ಲಿ ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಕಳೆದ 12 ವರ್ಷದಿಂದ ಟಿವಿ ಮಾಧ್ಯಮದಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. 2014ರಲ್ಲಿ ಬೀದರ್ ಜಿಲ್ಲೆಯಿಂದ ವೃತ್ತಿ ಜೀವನ ಪ್ರಾರಂಭ ಮಾಡಿ ಕಲಬುರಗಿ, ಹುಬ್ಬಳ್ಳಿಯಲ್ಲಿ ಕೆಲಸ ಮಾಡಿ ಸದ್ಯ ‘ಟಿವಿ9’ ಕನ್ನಡ ಸುದ್ದಿ ವಾಹಿನಿಯಲ್ಲಿ 9ವರ್ಷಗಳಿಂದ ಬೆಳಗಾವಿ ಜಿಲ್ಲೆಯಲ್ಲಿ ಹಿರಿಯ ವರದಿಗಾರನಾಗಿ ಕೆಲಸ ನಿರ್ವಹಿಸುತ್ತಿದ್ದೇನೆ. ಬೀದರ್ ಜಿಲ್ಲೆಯಲ್ಲಿ ಅತ್ಯುತ್ತಮ ಜಿಲ್ಲಾ ವರದಿಗಾರ ಪ್ರಶಸ್ತಿ ಪಡೆದಿದ್ದು, ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ಕೂಡ ದೊರೆತಿದೆ. ರೈತರ ಸಮಸ್ಯೆಗಳತ್ತ ಬೆಳಕು ಚೆಲ್ಲುವ ವರದಿ ಸೇರಿ ಗಡಿ ಸಮಸ್ಯೆ, ಕ್ರೈಮ್, ಪ್ರವಾಹ ಪರಿಸ್ಥಿತಿ, ನೆರೆಯ ಮಹಾರಾಷ್ಟ್ರ, ಗೋವಾದಲ್ಲಿನ ಬೆಳವಣಿಗೆ ಕುರಿತು ವರದಿ ಮಾಡುತ್ತಿರುವುದು ವಿಶೇಷ.

Read More
Loading...
Unable to load recommendations.
Follow Us