ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಲು ವಿಧಾನಸಭೆಯಲ್ಲಿ ವೆಂಕಟರಾವ್ ನಾಡಗೌಡ ಆಗ್ರಹ
ರಾಜ್ಯದಲ್ಲಿ ಜನವರಿ 1ರಿಂದ ಬೆಂಬಲ ಬೆಲೆ ಖರೀದಿ ಕೇಂದ್ರಗಳು ಆರಂಭವಾಗಲಿವೆ ಎಂದು ಆಹಾರ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.
ಬೆಳಗಾವಿ: ಕರ್ನಾಟಕದಲ್ಲಿ ಬೆಂಬಲ ಬೆಲೆ ಯೋಜನೆಯಡಿ ಬೆಳೆ ಖರೀದಿ ಕೇಂದ್ರಗಳನ್ನು ಶೀಘ್ರ ಆರಂಭಿಸಬೇಕು ಎಂದು ಸಿಂಧನೂರು ಶಾಸಕ ವೆಂಕಟರಾವ್ ನಾಡಗೌಡ ವಿಧಾನಸಭೆಯಲ್ಲಿ ಬುಧವಾರ ಸರ್ಕಾರದ ಗಮನ ಸೆಳೆದರು. ಚರ್ಚೆಯಲ್ಲಿ ಸರ್ಕಾರದ ಪರವಾಗಿ ಉತ್ತರಿಸಿದ ಆಹಾರ ಸಚಿವ ಉಮೇಶ್ ಕತ್ತಿ, ರಾಜ್ಯದಲ್ಲಿ ಜನವರಿ 1ರಿಂದ ಬೆಂಬಲ ಬೆಲೆ ಖರೀದಿ ಕೇಂದ್ರಗಳು ಆರಂಭವಾಗಲಿವೆ ಎಂದರು. ಖರೀದಿ ನೋಂದಣಿ ಪ್ರಕ್ರಿಯೆ ಈಗಾಗಲೇ ಆರಂಭವಾಗಿದೆ. ಜನವರಿ 1ರಿಂದ ಭತ್ತ, ರಾಗಿ, ಜೋಳ ಖರೀದಿ ಮಾಡಲಾಗುವುದು ಎಂದು ಹೇಳಿದರು.
ತೊಗರಿ ಖರೀದಿ ಆರಂಭ ವಿಜಯಪುರ ಜಿಲ್ಲೆಯಲ್ಲಿ ಈ ಬಾರಿ 11.90 ಲಕ್ಷ ಎಕರೆ ಪ್ರದೇಶದಲ್ಲಿ ತೊಗರಿ ಬೆಳೆಯಲಾಗಿದೆ. ತೊಗರಿಯನ್ನು ಬೆಂಬಲ ಬೆಲೆಯಡಿ ಖರೀದಿ ಮಾಡಲು ಸರ್ಕಾರ ಸಮಯವನ್ನು ನಿಗದಿ ಮಾಡಿದೆ. ಪ್ರಸಕ್ತ ಸಾಲಿನಲ್ಲಿ FAQ ಗುಣಮಟ್ಟದ ತೊಗರಿಗೆ ಪ್ರತಿ ಕ್ವಿಂಟಾಲ್‍ಗೆ 6,300 ರೂ.ನಂತೆ ದರ ನಿಗದಿ ಮಾಡಲಾಗಿದೆ. ತೊಗರಿ ಖರೀದಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಬೆಂಬಲ ಬೆಲೆ ಯೋಜನೆ ಮಾರ್ಗ ಸೂಚಿಗಳನ್ವಯ ಪೂರ್ವ ಸಿದ್ಧತೆ ಮತ್ತು ರೈತರ ನೋಂದಣಿ ಕಾರ್ಯವನ್ನು ಸರ್ಕಾರದ ಆದೇಶದಂತೆ 2022ರ ಜನವರಿ ಕೊನೆಯವರೆಗೆ ನೋಂದಣಿ ಕಾರ್ಯ ಹಾಗೂ ತೊಗರಿ ಖರೀದಿಗೆ ಅವಕಾಶ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಮಾಹಿತಿ ನೀಡಿದ್ದಾರೆ.
ತೊಗರಿಯನ್ನು ಮಾರಾಟ ಮಾಡುವ ರೈತರ ಹೆಸರಿನ ಆಧಾರ್ ಸಂಖ್ಯೆ ಜೋಡಣೆಗೊಂಡ ಬ್ಯಾಂಕ್ ಖಾತೆಗೆ ಮಾತ್ರ ಉತ್ಪನ್ನದ ಮೌಲ್ಯವನ್ನು ಡಿಬಿಟಿ ಮೂಲಕ ಹಣ ಜಮಾ ಆಗುವಂತೆ ಪಾವತಿ ಕ್ರಮ ತೆಗೆದುಕೊಳ್ಳಲಾಗಿದೆ. ತೊಗರಿ ಖರೀದಿ ಕೇಂದ್ರಗಳಲ್ಲಿ ರೈತರ ಹೆಸರಿನಲ್ಲಿ ವರ್ತಕರು ತರುವ ತೊಗರಿ ಖರೀದಿಸದಂತೆ ಹಾಗೂ ಖರೀದಿ ಸಂಸ್ಥೆಗಳ ಯಾವುದೇ ರೀತಿಯ ದುರುಪಯೋಗವಾಗದಂತೆ ಎಲ್ಲ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಕೃಷಿ ಆಧಿಕಾರಿಗಳು ಹೇಳಿದ್ದಾರೆ.
ಇದನ್ನೂ ಓದಿ: ಭತ್ತ, ರಾಗಿ, ಜೋಳದ ಬೆಂಬಲ ಬೆಲೆಯ ಬಾಕಿ ಮೊತ್ತ ಬಿಡುಗಡೆಗೆ ಕೇಂದ್ರಕ್ಕೆ ಮನವಿ ಇದನ್ನೂ ಓದಿ: ಸರ್ಕಾರಿ ಬೆಂಬಲ ಬೆಲೆಯಡಿ ತೊಗರಿ ಖರೀದಿ ಆರಂಭ
Published On - 11:33 pm, Wed, 15 December 21