ಬೆಳಗಾವಿ: ಕಾಂಗ್ರೆಸ್ ಸರ್ಕಾರ (Congress Government) ಸಂಪೂರ್ಣವಾಗಿ ವರ್ಗಾವಣೆ ದಂಧೆಯಲ್ಲಿ ತೊಡಗಿದೆ. ವರ್ಗಾವಣೆ ದಂಧೆ ವಿಚಾರಕ್ಕೆ ಸರ್ಕಾರದಲ್ಲಿ ಪೈಪೋಟಿ ನಡಿತಿದೆ. ವರ್ಗಾವಣೆ ಪೈಪೋಟಿ, ಭ್ರಷ್ಟಾಚಾರದ ಪೈಪೋಟಿ ಇರುವುದರಿಂದ ಮೊನ್ನೆ ಶಾಸಕಾಂಗದ ಸಭೆ (CPL Meeting) ನಡೆಸಿದ್ದಾರೆ. ವರ್ಗಾವಣೆ ದಂಧೆಯಲ್ಲಿ ಬಾರ್ಗೆನಿಂಗ್ ನಡೆಯುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ವಾಗ್ದಾಳಿ ಮಾಡಿದರು. ಬೆಳಗಾವಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು ಪೊಲೀಸರಿಂದ ದಿವ್ಯಾಂಗನ ಮೇಲೆ ಮಾರಣಾಂತಿಕ ಹಲ್ಲೆಯಾಗಿದ್ದು ಖಂಡನೀಯ ಎಂದರು.
ಪೊಲೀಸ್ ಅಧಿಕಾರಿಗಳಿಂದ ಅಮಾಯಕರ ಮೇಲೆ ಹಲ್ಲೆ ಆಗುತ್ತಿದೆ. ಸಾಮಾನ್ಯ ಜನರ ಮೇಲೆ ಹಲ್ಲೆ, ಮಹಿಳೆಯರ ಮೇಲೆ ಹಲ್ಲೆ ಆಗುತ್ತಿದೆ. ಸಮಾಜಘಾತುಕ ಶಕ್ತಿಗಳಿಗೆ ಈ ಸರ್ಕಾರವೇ ಬೆಂಬಲ ನೀಡುತ್ತಿದೆ. ಪೊಲೀಸ್ ಅಧಿಕಾರಿಗಳ ಕೊಲೆ ಆಗುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಿಲ್ಲ, ಸರ್ಕಾರ ವಿಫಲವಾಗಿದೆ. ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳದಿದ್ದರೇ ಜನರು ಸರ್ಕಾರದ ವಿರುದ್ಧ ದಂಗೆ ಏಳುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಬಸವರಾಜ ಬೊಮ್ಮಾಯಿ ಹೊರತುಪಡಿಸಿ ಎಲ್ಲರೂ ಇದ್ದರು!
ರಾಜ್ಯದ ಕೆಲ ಜಿಲ್ಲೆಗಳಲ್ಲಿ ಅತಿವೃಷ್ಟಿಯಿಂದ ಅಪಾರ ಹಾನಿಯಾಗಿದೆ. 11 ಜಿಲ್ಲೆಗಳಲ್ಲಿ ನೆರೆ ಪರಿಸ್ಥಿತಿ ಇದೆ. ಉಳಿದ ಕಡೆ ಬರದ ಛಾಯೆ ಮೂಡಿದೆ. ಮುಖ್ಯಮಂತ್ರಿಗಳು ವಿಡಿಯೋ ಸಂವಾದ ಬಿಟ್ಟರೆ ಪರಿಹಾರ ಕಾರ್ಯಕ್ಕೆ ಮುಂದಾಗಿಲ್ಲ. ಮನೆ ಹಾನಿಯಾದರೇ ತಕ್ಷಣ 10 ಸಾವಿರ ರೂ. ಪರಿಹಾರ ಕೊಡಬೇಕು. ನಾವು ಅಧಿಕಾರದಲ್ಲಿದ್ದಾಗ ನೆರೆಪೀಡಿತರಿಗೆ ನೆರವು ನೀಡಿದ್ದೇವೆ. ಎಸ್ಡಿಆರ್ಎಫ್ ಪರಿಹಾರ ಜತೆಗೆ ಸರ್ಕಾರದಿಂದಲೂ ಪರಿಹಾರ ನೀಡಿದ್ದೇವೆ. ಅದೇ ಮಾನದಂಡ ಅನುಸರಿಸಿ ರೈತರಿಗೆ ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.
ಬೆಳೆ ಹಾನಿ ಆಗಿರುವುದಕ್ಕೆ ಪ್ರಾಥಮಿಕ ಸಮೀಕ್ಷೆ ಕೂಡ ಮಾಡಿಲ್ಲ. ಯಾವ ಸಚಿವರೂ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿಲ್ಲ. ಸಚಿವರು ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಹೆಣಗಾಡುತ್ತಿದ್ದಾರೆ. ಎಲ್ಲ ಸಚಿವರು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಬೇಕು ಎಂದು ಆಗ್ರಹಿಸಿದರು.
ಇನ್ನು ಪ್ರಧಾನಿ ಮೋದಿ ನೇತೃತ್ವದಲ್ಲಿ ಲೋಕಸಭೆ ಚುನಾವಣೆ ಎದುರಿಸುತ್ತೇವೆ. ನಾವು ತಯಾರಿ ಮಾಡಿಕೊಳ್ಳುತ್ತಿದ್ದೇವೆ, ಜಿಲ್ಲಾವಾರು ಸಭೆ ಮಾಡುತ್ತೇವೆ. ಆದಷ್ಟು ಬೇಗ ಬಿಜೆಪಿ ರಾಜ್ಯಾಧ್ಯಕ್ಷರ ನೇಮಕ ಆಗಲಿದೆ ಎಂದು ತಿಳಿಸಿದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ