ಬೆಳಗಾವಿ: ಸರ್ಕಾರಿ ಆಸ್ಪತ್ರೆ ವೈದ್ಯನ ಮನೆಯಲ್ಲೇ ಇತ್ತು ಗಾಂಜಾ ಸ್ಟಾಕ್!
ಸರ್ಕಾರಿ ಆಸ್ಪತ್ರೆ ವೈದ್ಯರೊಬ್ಬರ ಮನೆಯಲ್ಲಿ ಬೆಳಗಾವಿಯಲ್ಲಿ ಗಾಂಜಾ ಪತ್ತೆಯಾಗಿದ್ದು, ಅವರು ಸೇವನೆ ಮಾಡಿರುವುದೂ ದೃಢವಾಗಿದೆ. ಪ್ರಕರಣ ದಾಖಲಿಸಿದ ಪೊಲೀಸರು ವಿಚಾರಣೆ ಮುಂದುವರಿಸಿದ್ದು, ಆರೋಗ್ಯ ಇಲಾಖೆಯು ವೈದ್ಯನಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದೆ. ಸರ್ಕಾರಿ ಆಸ್ಪತ್ರೆ ವೈದ್ಯನೇ ಗಾಂಜಾ ಸೇವನೆ ಮಾಡಿರುವ ಈ ಘಟನೆ ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

ಬೆಳಗಾವಿ, ಜನವರಿ 14: ಬೆಳಗಾವಿಯ (Belagavi) ಸರ್ಕಾರಿ ಆಸ್ಪತ್ರೆಯ ವೈದ್ಯರೊಬ್ಬರ ಮನೆಯಲ್ಲೇ ಗಾಂಜಾ ಪತ್ತೆಯಾಗಿದೆ. ಗಾಂಜಾ ಪತ್ತೆ ಹಾಗೂ ಸೇವನೆ ಆರೋಪದ ಹಿನ್ನೆಲೆಯಲ್ಲಿ ಆರೋಗ್ಯ ಇಲಾಖೆ ವೈದ್ಯನಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸಿದೆ. ನಾಲ್ಕು ದಿನಗಳ ಹಿಂದೆ ಬೆಳಗಾವಿ ಮಾಳಮಾರುತಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ವೈದ್ಯ ಡಾ. ರಾಹುಲ್ ಬಂತಿ ಅವರ ಮನೆಯಲ್ಲಿ ಸುಮಾರು 134 ಗ್ರಾಂ ಗಾಂಜಾ ಪತ್ತೆಯಾಗಿತ್ತು. ಬಳಿಕ ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವನೆ ಮಾಡಿದಿರುವುದೂ ದೃಢಪಟ್ಟಿತ್ತು ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಡಾ. ರಾಹುಲ್ ಬಂತಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ಮುಂದುವರಿಸಿದ್ದಾರೆ.
ಡಾ. ರಾಹುಲ್ ಬಂತಿ ಅವರು ಪ್ರಸ್ತುತ ಬೆಳಗಾವಿ ತಾಲ್ಲೂಕಿನ ಹಿರೇಬಾಗೇವಾಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಮುಖ್ಯ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಮಕ್ಕಳ ತಜ್ಞ ವೈದ್ಯರಾಗಿದ್ದಾರೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಬೆಳಗಾವಿ ಜಿಲ್ಲಾ ಆರೋಗ್ಯಾಧಿಕಾರಿ (ಡಿಎಚ್ಒ) ಡಾ. ಈಶ್ವರ ಗಡಾದ ಅವರು ರಾಹುಲ್ ಬಂತಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಇದನ್ನೂ ಓದಿ: SSLC ಪ್ರಶ್ನೆಪತ್ರಿಕೆ ಸೋರಿಕೆ: ಟಿವಿ9 ವರದಿ ಬೆನ್ನಲ್ಲೇ ಸೆಂಟರ್ ಪತ್ತೆ, ಡಿಡಿಪಿಐ ಸ್ಥಳಕ್ಕೆ ಭೇಟಿ
ಡ್ರಗ್ ಪತ್ತೆ ಹಾಗೂ ಡ್ರಗ್ ಸೇವನೆ ಸಂಬಂಧಿಸಿದ ಪ್ರಕರಣವಾಗಿರುವುದರಿಂದ ಯಾಕೆ ಶಿಸ್ತು ಕ್ರಮ ಕೈಗೊಳ್ಳಬಾರದು ಎಂಬ ಬಗ್ಗೆ ನೋಟಿಸ್‌ನಲ್ಲಿ ಸ್ಪಷ್ಟನೆ ಕೇಳಲಾಗಿದೆ. ಜೊತೆಗೆ ಪೊಲೀಸ್ ಇಲಾಖೆಯಿಂದಲೂ ಪ್ರಕರಣದ ಸಂಪೂರ್ಣ ಮಾಹಿತಿಯನ್ನು ಡಿಎಚ್ಒ ಪಡೆದುಕೊಂಡಿದ್ದು, ಪ್ರಾಥಮಿಕ ವರದಿಯನ್ನು ಆರೋಗ್ಯ ಇಲಾಖೆಯ ಮುಖ್ಯಸ್ಥರಿಗೆ ಸಲ್ಲಿಸಲಾಗಿದೆ.
ಈ ಪ್ರಕರಣವು ಸರ್ಕಾರಿ ಆಸ್ಪತ್ರೆಯ ವೈದ್ಯರ ನಡೆ ಬಗ್ಗೆ ಗಂಭೀರ ಪ್ರಶ್ನೆಗಳನ್ನು ಎತ್ತಿದ್ದು, ಆರೋಗ್ಯ ಇಲಾಖೆಯ ಮುಂದಿನ ಕ್ರಮಗಳತ್ತ ಎಲ್ಲರ ಗಮನ ನೆಟ್ಟಿದೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 12:14 pm, Wed, 14 January 26