JP Nadda in Belagavi: ಪಾಕ್ ಪರ ಘೋಷಣೆ ಕೂಗಿದವರ ಬಗ್ಗೆ ಖರ್ಗೆ, ರಾಹುಲ್ ಯಾಕೆ ಮೌನವಾಗಿದ್ದಾರೆ, ಜೆಪಿ ನಡ್ಡಾ ಪ್ರಶ್ನೆ
ವಿಧಾನಸೌಧದ ಆವರಣದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ವಿಚಾರವಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಮೌನವನ್ನು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಪ್ರಶ್ನಿಸಿದ್ದಾರೆ. ಬೆಳಗಾವಿ ಪ್ರವಾಸದಲ್ಲಿರುವ ಅವರು, ಪ್ರಕರಣ ಸಂಬಂಧ ರಾಜ್ಯ ಸರ್ಕಾರದ ವಿರುದ್ಧವೂ ವಾಗ್ದಾಳಿ ನಡೆಸಿದ್ದಾರೆ.
ಬೆಂಗಳೂರು, ಮಾರ್ಚ್ 6: ವಿಧಾನಸೌಧದ ಆವರಣದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆಗಳನ್ನು ಕೂಗಿರುವ ಬಗ್ಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಕಾಂಗ್ರೆಸ್‌ನ ಇತರರು ಮೌನವಾಗಿರುವುದನ್ನು ಬಿಜೆಪಿ (BJP) ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ (JP Nadda) ಪ್ರಶ್ನಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ (Chikkodi) ಲೋಕಸಭಾ ಕ್ಷೇತ್ರದ ಬೂತ್ ಮಟ್ಟದ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನುದ್ದೇಶಿಸಿ ನಡ್ಡಾ ಮಂಗಳವಾರ ಮಾತನಾಡಿದ್ದಾರೆ. ಇದೇ ವೇಳೆ, ರಾಜ್ಯಸಭೆ ಚುನಾವಣೆ ಫಲಿತಾಂಶದ ವೇಳೆ ಕಾಂಗ್ರೆಸ್ ಅಭ್ಯರ್ಥಿ ನಾಸಿರ್ ಹುಸೇನ್ ಬೆಂಬಲಿಗರೆನ್ನಲಾದವರು ಪಾಕಿಸ್ತಾನ ಪರ ಘೋಷಣೆಗಳನ್ನು ಕೂಗಿರುವ ವಿಚಾರವಾಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಕೂಡ ಪಾಕ್ ಪರ ಘೋಷಣೆ ಖಂಡಿಸಿ ಒಂದು ಮಾತನ್ನೂ ಆಡಿಲ್ಲ. ರಾಹುಲ್ ಗಾಂಧಿ ಇಲ್ಲಿ ಭಾರತ್ ಜೋಡೋ ಯಾತ್ರೆ ನಡೆಸಿದ್ದರು. ದೇಶವನ್ನು ಜೋಡಿಸಲು ಅವರು ಬಯಸುತ್ತಿರುವ ಮಾರ್ಗ ಇದುವೇ? ಕಾಂಗ್ರೆಸ್ ನಾಯಕರ ಮೌನವು ಅವರು ಪಾಕಿಸ್ತಾನದ ಭಾಷೆಯಲ್ಲಿ ಮಾತನಾಡುತ್ತಾರೆ ಮತ್ತು ಭಾರತದಲ್ಲಿ ಅವರೇ ಆ ದೇಶದ ಪ್ರತಿನಿಧಿಗಳು ಎಂಬುದನ್ನು ಸೂಚಿಸುತ್ತದೆ ಎಂದು ನಡ್ಡಾ ಕಿಡಿ ಕಾರಿದ್ದಾರೆ.
ದೇಶದ ಜನತೆ ಮತ್ತು ವಿಶೇಷವಾಗಿ ಕನ್ನಡಿಗರು ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರು ಹೇಳಿದ್ದಾರೆ.
ಉಚಿತದ ಹೆಸರಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಭಯೋತ್ಪಾದನೆ ಗ್ಯಾರಂಟಿ: ನಡ್ಡ ವ್ಯಂಗ್ಯ
ಉಚಿತ ಭರವಸೆ ನೀಡಿ ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಆದರೆ ರಾಜ್ಯಕ್ಕೆ ಸಿಕ್ಕಿದ್ದು ಭಯೋತ್ಪಾದನೆಯ ಗ್ಯಾರಂಟಿ ಎಂದು ನಡ್ಡಾ ವ್ಯಂಗ್ಯವಾಡಿದರು. ಕೇಂದ್ರದಲ್ಲಿ ಕೂಡ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಬಾಂಬ್ ಸ್ಫೋಟಗಳು ಮಾಮೂಲಿಯಾಗಿದ್ದವು ಎಂದು ಅವರು ದೂರಿದ್ದಾರೆ.
ಇದನ್ನೂ ಓದಿ: ರಾಜ್ಯಸಭಾ ಸದಸ್ಯತ್ವಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ರಾಜೀನಾಮೆ!
ಈ ಮಧ್ಯೆ, ಬೆಳಗಾವಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪಾಕಿಸ್ತಾನ ಪರ ಘೋಷಣೆ ಕೂಗಿರುವ ಪ್ರಕರಣದಲ್ಲಿ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ನಾಸಿರ್ ಹುಸೇನ್ ಅವರನ್ನು ‘ಆರೋಪಿ ಸಂಖ್ಯೆ 4’ ಎಂದು ದಾಖಲಿಸಬೇಕು ಎಂದು ಒತ್ತಾಯಿಸಿದ್ದಾರೆ. ಪ್ರಕರಣದ ತನಿಖೆ ಪೂರ್ಣಗೊಳ್ಳುವವರೆಗೆ ಹುಸೇನ್ ಅವರಿಗೆ ಪ್ರಮಾಣ ವಚನ ಬೋಧಿಸದಂತೆ ರಾಜ್ಯಸಭಾ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಜಗದೀಪ್ ಧನಕರ್ ಅವರಿಗೆ ಪತ್ರ ಬರೆಯುತ್ತೇವೆ ಎಂದು ಅವರು ಹೇಳಿದ್ದಾರೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ