ನೀತಿ ಸಂಹಿತೆ ಉಲ್ಲಂಘಿಸಿ ಲಕ್ಷ್ಮೀ ಹೆಬ್ಬಾಳ್ಕರ್ ಸಭೆ: ಮಗನ ಪರ ಮತ ಹಾಕಿಸುವಂತೆ ಆಶಾ ಕಾರ್ಯಕರ್ತೆಯರಿಗೆ ಸೂಚನೆ
ಅಂಗನವಾಡಿ ಕಾರ್ಯಕರ್ತೆಯರು ಮತ್ತು ಆಶಾ ಕಾರ್ಯಕರ್ತೆಯರ ಜೊತೆ ಸಭೆ ನಡೆಸಿರುವ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್ ಆ ಮೂಲಕ ಅಧಿಕಾರ ದುರುಪಯೋಗಪಡಿಸಿಕೊಂಡಿದ್ದಾರೆ. ತಮ್ಮ ಮಗ ಮೃಣಾಲ್ಗೆ ಟಿಕೆಟ್ ದೊರೆಯುವ ಸಾಧ್ಯತೆ ಹಿನ್ನೆಲೆಯಲ್ಲಿ ಕಾರ್ಯಕರ್ತೆಯರ ಬಳಿ ಆತನ ಪರ ಕೆಲಸ ಮಾಡುವಂತೆ ಸಚಿವೆ ಸೂಚಿಸಿದ್ದಾರೆ.
ಬೆಳಗಾವಿ, ಮಾರ್ಚ್ 20: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ರಿಂದ (Lakshmi Hebbalkar) ಅಧಿಕಾರ ದುರುಪಯೋಗದ ಆರೋಪ ಕೇಳಿಬಂದಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ಗೆ ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ದೊರೆಯುವುದು ಬಹುತೇಕ ಖಚಿತವಾಗುತ್ತಿದ್ದಂತೆಯೇ ಸಚಿವೆ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರ ಜತೆ ಸಭೆ ನಡೆಸಿದ್ದಾರೆ. ಮಗ ಮೃಣಾಲ್ ಪರ ಕೆಲಸ ಮಾಡುವಂತೆ ಮತ್ತು ಮತ ಹಾಕಿಸುವಂತೆ ಸೂಚನೆ ನೀಡಿದ್ದಾರೆ. ಈ ಮೂಲಕ ಚುನಾವಣಾ ನೀತಿ ಸಂಹಿತೆ (Model Code of Conduct) ಉಲ್ಲಂಘಿಸಿದ್ದಾರೆ.
ಬೆಳಗಾವಿಯ ಕುವೆಂಪು ನಗರದ ಗೃಹ ಕಚೇರಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರ ಜತೆ ಲಕ್ಷ್ಮೀ ಹೆಬ್ಬಾಳ್ಕರ್ ಸಭೆ ನಡೆಸಿದ್ದಾರೆ. ಸಭೆಯಲ್ಲಿ 500ಕ್ಕೂ ಅಧಿಕ ಕಾರ್ಯಕರ್ತೆಯರು ಇದ್ದರು.
ಅಧಿಕಾರಿಗಳಿಂದ ದಿಢೀರ್ ದಾಳಿ
ಲಕ್ಷ್ಮೀ ಹೆಬ್ಬಾಳ್ಕರ್ ಸಭೆ ನಡೆಸುತ್ತಿದ್ದ ಕಚೇರಿಯ ಮೇಲೆ ಚುನಾವಣಾಧಿಕಾರಿಗಳು, ಫ್ಲೈಯಿಂಗ್ ಸ್ಕ್ವಾಡ್ ಹಠಾತ್ ದಾಳಿ ನಡೆಸಿದೆ. ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ನೇತೃತ್ವದಲ್ಲಿ ದಾಳಿ ನಡೆಸಲಾಗಿದೆ. ಈ ವೇಳೆ, ಚುನಾವಣಾ ನೀತಿಸಂಹಿತೆ ಉಲ್ಲಂಘಿಸಿ ಸಭೆ ಮಾಡುತ್ತಿರುವುದು ಗಮನಕ್ಕೆ ಬಂದಿದೆ. ಸಭೆಯಲ್ಲಿದ್ದವರ ಎಲ್ಲರ ಮಾಹಿತಿ ಪಡೆದು ನಂತರ ಅವರನ್ನು ಅಧಿಕಾರಿಗಳು ವಾಪಸ್ ಕಳುಹಿಸಿದ್ದಾರೆ.
ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಘೋಷಣೆಗೆ ದೆಹಲಿಯಲ್ಲಿ ಚುನಾವಣಾ ಸಮಿತಿ ಸಭೆ ನಡೆಯುತ್ತಿದೆ. ಈ ಮಧ್ಯೆ ಕರ್ನಾಟಕದಲ್ಲಿ ಐವರು ಸಚಿವರ ಮಕ್ಕಳಿಗೆ ಟಿಕೆಟ್ ದೊರೆಯುವುದು ಬಹುತೇಕ ಖಚಿತ ಎಂದು ಉನ್ನತ ಮೂಲಗಳು ತಿಳಿಸಿವೆ. ಇದರಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಕೂಡ ಒಬ್ಬರಾಗಿದ್ದಾರೆ. ಮಗನಿಗೆ ಟಿಕೆಟ್ ದೊರೆಯುವ ಸಂಪೂರ್ಣ ಭರವಸೆ ಇರುವ ಕಾರಣ ಹೆಬ್ಬಾಳ್ಕರ್ ಅಂಗನವಾಡಿ ಮತ್ತು ಆಶಾ ಕಾರ್ಯಕರ್ತೆಯರ ಜೊತೆ ಸಭೆ ನಡೆಸಿ ಮಗನ ಪರ ಕೆಲಸ ಮಾಡುವಂತೆ ಅವರಲ್ಲಿ ಮನವಿ ಮಾಡಿದ್ದಾರೆ. ಮೃಣಾಲ್ ಪರ ಮತ ಚಲಾಯಿಸುವಂತೆ ಜನರ ಬಳಿ ಮನವರಿಕೆ ಮಾಡಿ ಕೊಡುವಂತೆ ಸಚಿವೆ ಆಶಾ ಕಾರ್ಯಕರ್ತೆಯರ ಬಳಿ ಸೂಚಿಸಿದ್ದಾರೆ ಎನ್ನಲಾಗಿದೆ.
ಇದನ್ನೂ ಓದಿ: ಐವರು ಸಚಿವರ ಮಕ್ಕಳಿಗೆ ಕಾಂಗ್ರೆಸ್ ಟಿಕೆಟ್! ಇಲ್ಲಿದೆ ಸಂಭಾವ್ಯರ ಪಟ್ಟಿ
ಈಗಾಗಲೇ ಏಳು ಲೋಕಸಭಾ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಕಾಂಗ್ರೆಸ್ ಬಾಕಿ ಇರುವ 21 ಕ್ಷೇತ್ರಗಳಿಗೆ ಇಂದೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುವ ಸಾಧ್ಯತೆ ಇದೆ. ಈಗಾಗಲೇ 16 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆ ಅಂತಿಮಗೊಳಿಸಲಾಗಿದ್ದು ಉಳಿದ ಐದು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿ ಸಮಾಲೋಚನೆ ನಡೆಸಲಾಗುತ್ತಿದೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 1:55 pm, Wed, 20 March 24