Manmohan Singh Death: ಸರ್ಕಾರಿ ರಜೆ, ಕರ್ನಾಟಕದ ಕೆಲ ವಿಶ್ವವಿದ್ಯಾಲಯಗಳ ಪರೀಕ್ಷೆ ಮುಂದೂಡಿಕೆ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಶುಕ್ರವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ಇಂದು ನಡೆಯಬೇಕಿದ್ದ ರಾಜ್ಯದ ಕೆಲವು ವಿಶ್ವವಿದ್ಯಾಲಯಗಳ ಪರೀಕ್ಷೆಗಳನ್ನು ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕಗಳನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಎಂದು ವಿಶ್ವವಿದ್ಯಾಲಯಗಳು ತಿಳಿಸಿವೆ.
ಬೆಂಗಳೂರು/ಮೈಸೂರು, ಡಿಸೆಂಬರ್ 27: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ (Manmohan Singh) ನಿಧನ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇದರಿಂದ, ಶುಕ್ರವಾರ (ಡಿ.27) ನಡೆಯಬೇಕಿದ್ದ ಹಲವು ಪರೀಕ್ಷೆಗಳನ್ನು ಮುಂದೂಡಲಾಗಿದೆ. ಬೆಂಗಳೂರು ವಿಶ್ವವಿದ್ಯಾಲಯದ (Bangalore University) ಎಂಬಿಎ ದ್ವಿತೀಯ ಸೆಮಿಸ್ಟರ್ ಪರೀಕ್ಷೆಯನ್ನು ಮುಂದೂಡಿದೆ. ಮುಂದಿನ ಪರೀಕ್ಷಾ ದಿನಾಂಕ ವಿಶ್ವವಿದ್ಯಾಲಯದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತೆ ಎಂದು ಬೆಂಗಳೂರು ವಿಶ್ವವಿದ್ಯಾಲಯ ಮೌಲ್ಯಮಾಪನ ಕುಲಸಚಿವರು ಮಾಹಿತಿ ನೀಡಿದ್ದಾರೆ.
ಮೈಸೂರು ವಿಶ್ವವಿದ್ಯಾಲಯದ ಪದವಿ, ಸ್ನಾತಕೋತ್ತರ ಎಲ್ಲ ಪರೀಕ್ಷೆಗಳು ಮುಂದೂಡಲಾಗಿದೆ. ಮುಂದಿನ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಮೈಸೂರು ವಿಶ್ವ ವಿದ್ಯಾಲಯ ಕುಲಸಚಿವ ಎನ್.ನಾಗರಾಜ್ ಮಾಹಿತಿ ನೀಡಿದ್ದಾರೆ.
ಕುವೆಂಪು ವಿಶ್ವವಿದ್ಯಾಲಯದ ಸ್ನಾತಕ Non – NEP ಪರೀಕ್ಷೆ ಮುಂದೂಡಲಾಗಿದೆ. ಪರೀಕ್ಷೆ ದಿನಾಂಕ ಮುಂದಿನ ದಿನಗಳಲ್ಲಿ ತಿಳಿಸಲಾಗುತ್ತದೆ ಎಂದು ಕುವೆಂಪು ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವ ಡಾ.ಪಿ.ಧರಣಿಕುಮಾರ್ ತಿಳಿಸಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನೆಲೆಯಲ್ಲಿ ಶುಕ್ರವಾರ ರಾಜ್ಯದಲ್ಲಿ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಎಲ್ಲ ಸರ್ಕಾರಿ ಕಚೇರಿಗಳು, ಶಾಲಾ, ಕಾಲೇಜುಗಳು ರಜೆ ಇರಲಿದೆ. ರಾಜ್ಯದಲ್ಲಿ 7 ದಿನಗಳ ಕಾಲ ಶೋಕಾಚರಣೆ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ದಿವಾಳಿಯಂಚಿನಲ್ಲಿದ್ದ ದೇಶವನ್ನು ಆ ಒಂದು ಬಜೆಟ್ನಿಂದ ರಕ್ಷಿಸಿದ್ದ ಮನಮೋಹನ್ ಸಿಂಗ್!
ಇಂದಿನಿ (ಡಿ.27) ಕೇಂದ್ರ ಸರ್ಕಾರದ ಎಲ್ಲ ಕಾರ್ಯಕ್ರಮಗಳು ರದ್ದು ಮಾಡಲಾಗಿದೆ. ಬೆಳಗ್ಗೆ 11 ಗಂಟೆಗೆ ಕೇಂದ್ರ ಸಚಿವ ಸಂಪುಟ ಸಭೆ ನಡೆಯಲಿದ್ದು, ಮನಮೋಹನ್ ಸಿಂಗ್ರಿಗೆ ಸಂತಾಪ ಸೂಚಿಸಲಾಗುತ್ತದೆ.
ಸಿದ್ದರಾಮಯ್ಯ ಸಂತಾಪ
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಂಬನಿ ಮಿಡಿದಿದ್ದಾರೆ. “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಅಪಾರ ಜ್ಞಾನ, ದೂರದೃಷ್ಟಿಯ ಆಲೋಚನೆ ಹಾಗೂ ಸಮರ್ಥ ನಾಯಕತ್ವವು ಭಾರತದ ನೆಲದಲ್ಲಿ ಅವರನ್ನು ಅಮರವಾಗಿಸಲಿದೆ.
ಮನಮೋಹನ್ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ನಾನು ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡೆ. ಈ ಸಂದರ್ಭದಲ್ಲಿ ನಮ್ಮ ಸರ್ಕಾರದ ಯೋಜನೆಗಳಿಗೆ ಅವರಿಂದ ದೊರೆತ ಮಾರ್ಗದರ್ಶನ ಹಾಗೂ ಬೆಂಬಲವನ್ನು ಸ್ಮರಿಸಲೇಬೇಕು. ಯುಪಿಎ ಸರ್ಕಾರದ ಆಹಾರ ಹಕ್ಕು ಕಾಯ್ದೆಯು ನಮ್ಮ ನಾಡಿನ ಪ್ರಗತಿಯ ಹಾದಿಗೆ ಹೊಸ ಆಯಾಮ ಕಲ್ಪಿಸಿಕೊಟ್ಟಿದೆ.
ಮಾತಿಗಿಂತ ಕೃತಿ ಲೇಸೆಂಬ ನುಡಿಗಟ್ಟಿಗೆ ಅನ್ವರ್ಥದಂತೆ ಬದುಕಿದ ಓರ್ವ ಮುತ್ಸದ್ದಿ ನಾಯಕನನ್ನು ಕಳೆದುಕೊಂಡ ಭಾರತವಿಂದು ಬಡವಾಗಿದೆ.
ಮೃತರ ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಕೋಟ್ಯಂತರ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ಸಿಗಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ.” ಎಂದು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:56 am, Fri, 27 December 24