ಬೆಂಗಳೂರಿನಲ್ಲಿ 1,500 ರೌಡಿಗಳು ಪೊಲೀಸರ ವಶಕ್ಕೆ; 2 ಸಾವಿರ ರೌಡಿ ಶೀಟರ್ಸ್ ಮನೆ ಮೇಲೆ ದಾಳಿ
ಒಟ್ಟು 2000 ರೌಡಿ ಶೀಟರ್ಸ್ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಒಂದೂವರೆ ಸಾವಿರ ಮಂದಿಯನ್ನು ವಶಕ್ಕೆ ಪಡೆದಿದ್ದು, ಅಕ್ರಮ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ.
ಬೆಂಗಳೂರು: ಬೆಂಗಳೂರು ನಗರದಾದ್ಯಂತ ಸಮಾಜಘಾತುಕ ಶಕ್ತಿಗಳ ವಿರುದ್ಧ ಕಾರ್ಯಾಚರಣೆಗೆ ಇಳಿದ ಬೆಂಗಳೂರು ಪೊಲೀಸರು (Bengaluru Police) ಬೆಳಗ್ಗೆಯಿಂದ ಇಲ್ಲಿಯ ತನಕ ಸುಮಾರು 1,500 ರೌಡಿಗಳನ್ನು ವಶಕ್ಕೆ ಪಡೆದಿದ್ದಾರೆ. ಒಟ್ಟು 2000 ರೌಡಿ ಶೀಟರ್ಸ್ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು ಒಂದೂವರೆ ಸಾವಿರ ಮಂದಿಯನ್ನು ವಶಕ್ಕೆ ಪಡೆದಿದ್ದು, ಅಕ್ರಮ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳದಂತೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಲಾಕ್ಡೌನ್ ತೆರವು ಬಳಿಕ ಅಪರಾಧ ಕೃತ್ಯ ಹೆಚ್ಚಳವಾಗುತ್ತಿದ್ದ ಹಿನ್ನೆಲೆಯಲ್ಲಿ ದೊಡ್ಡ ಮಟ್ಟದ ಕಾರ್ಯಾಚರಣೆ ನಡೆಸಲಾಗಿದೆ. ಹಣಕಾಸು ವ್ಯವಹಾರ, ವೈಯಕ್ತಿಕ ದ್ವೇಷ ಸೇರಿದಂತೆ ಇತ್ಯಾದಿ ಕಾರಣಗಳಿಂದ ದಾಖಲಾಗಿದ್ದ ಕೊಲೆ ಪ್ರಕರಣಗಳು ಹಾಗೂ ಜೈಲಿನಲ್ಲೇ ಕುಳಿತು ರೌಡಿಸಂ ನಡೆಸುತ್ತಿದ್ದ ವಿಚಾರವನ್ನು ಅತಿ ಗಂಭೀರವಾಗಿ ಪರಿಗಣಿಸಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಕಮಲ್ ಪಂತ್ (Kamal Pant), ಹೆಚ್ಚುವರಿ ಆಯುಕ್ತರು, ಡಿಸಿಪಿಗಳೊಂದಿಗೆ ಸಭೆ ನಡೆಸಿ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಸೂಚಿಸಿದ್ದರು. ಅದರಂತೆ ಆಯಾ ವ್ಯಾಪ್ತಿಯಲ್ಲಿ ರೌಡಿಗಳ ಮೇಲೆ ನಿಗಾ ವಹಿಸಿದ್ದ ಪೊಲೀಸರು ಇಂದು ಬೆಳಗ್ಗೆ ಬೆಂಗಳೂರು ನಗರದಾದ್ಯಂತ ಸುಮಾರು 2000 ರೌಡಿ ಶೀಟರ್ಸ್ ಮನೆ ಮೇಲೆ ದಾಳಿ ನಡೆಸಿ 1,500 ಜನರನ್ನು ವಶಕ್ಕೆ ಪಡೆದಿದ್ದಾರೆ.
ದೊಡ್ಡ ಮಟ್ಟದ ಕಾರ್ಯಾಚರಣೆಗಿಳಿದ ಪೊಲೀಸರು ಬೆಳಗ್ಗೆಯಿಂದಲೇ ರೌಡಿಶೀಟರ್ಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ಆರಂಭಿಸಿದ್ದಾರೆ. ನಗರದ 8 ವಲಯಗಳ ಪೊಲೀಸರಿಂದ ಏಕಕಾಲಕ್ಕೆ ದಾಳಿ ಮಾಡಲಾಗಿದ್ದು, ಸಮಾಜಘಾತುಕ ಶಕ್ತಿಗಳಿಗೆ ಬಿಸಿ ಮುಟ್ಟಿಸಲಾಗಿದೆ. ದಾಳಿ ವೇಳೆ ಕೆಲ ಸ್ಥಳಗಳಲ್ಲಿ ಮಾರಕಾಸ್ತ್ರಗಳು, ಲಾಂಗ್ ಪತ್ತೆಯಾಗಿವೆ. ವಶಕ್ಕೆ ಪಡೆದ ಎಲ್ಲಾ ರೌಡಿಶೀಟರ್ಸ್ಗೆ ವೈದ್ಯಕೀಯ ಪರೀಕ್ಷೆ ನಡೆಸಿ, ಮಾದಕ ವಸ್ತುಗಳ ಬಳಕೆ ಬಗ್ಗೆಯೂ ಪರೀಕ್ಷೆ ಮಾಡಲಾಗಿದೆ.
ದಾಳಿ ವೇಳೆ ಕೆಲವೆಡೆ ಗಾಂಜಾ, ಮಾದಕ ವಸ್ತುಗಳು ಪತ್ತೆಯಾಗಿದ್ದು ಅದನ್ನು ಜಪ್ತಿ ಮಾಡಲಾಗಿದೆ. ಯಲಹಂಕ ಪೊಲೀಸರ ದಾಳಿ ವೇಳೆ ಕೆಜಿ ಕೆಜಿ ಗಾಂಜಾ ಸಿಕ್ಕಿದ್ದು, ಲಾಲ ಎಂಬಾತನ ಮನೆಯಲ್ಲಿ ಐದು ಕೆಜಿ ಗಾಂಜಾ ಪತ್ತೆಯಾಗಿದೆ. ಈ ಬಗ್ಗೆ ಪ್ರತ್ಯೇಕ ಪ್ರಕರಣ ದಾಖಲಾಗಿದೆ. ಪರಪ್ಪನ ಅಗ್ರಹಾರ ಪೊಲೀಸರ ಕಾರ್ಯಾಚರಣೆ ವೇಳೆ ಅಕ್ರಮ ಚಟುವಟಿಕೆಯಲ್ಲಿ ತೊಡಗಿದ್ದ 12 ರೌಡಿಗಳನ್ನು ವಶಕ್ಕೆ ಪಡೆದು ಆಡುಗೋಡಿಗೆ ಕರೆದೊಯ್ಯಲಾಗಿದೆ. ವೃತ್ತ ನಿರೀಕ್ಷಕ ಸಂದೀಪ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ವಶಕ್ಕೆ ಪಡೆಯಲಾಗಿದೆ.
ವೈಟ್ಫೀಲ್ಡ್ ವಿಭಾಗದಲ್ಲಿ ಡಿಸಿಪಿ ದೇವರಾಜ್ ನೇತೃತ್ವದಲ್ಲಿ, ಬಾಗಲಗುಂಟೆ ಬಳಿ ಸಿಪಿಐ ಸುನಿಲ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಡಿಸಿಪಿ ಸಂಜೀವ್ ಪಾಟೀಲ್ ವಿಚಾರಣೆ ನಡೆಸಿದ್ದಾರೆ. ಕೆಲವೆಡೆ ಶ್ವಾನದಳದ ಸಮೇತ ದಾಳಿ ನಡೆಸಿರುವ ಪೊಲೀಸರು ಅಕ್ರಮದಲ್ಲಿ ತೊಡಗಿಕೊಂಡಿದ್ದವರಿಗೆ ಬಿಸಿ ಮುಟ್ಟಿಸಿದ್ದಾರೆ. ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಆಯುಕ್ತ ಮುರಗನ್ ಭೇಟಿ ನೀಡಿ ರೌಡಿಗಳಿಗೆ ಕಾನೂನು ಬಾಹಿರ ಚಟುವಟಿಕೆಯಲ್ಲಿ ಭಾಗಿಯಾಗದಂತೆ ಎಚ್ಚರಿಕೆ ನೀಡಿದ್ದಾರೆ.
ಇದನ್ನೂ ಓದಿ: Big News: ಸಾವಿರಾರು ರೌಡಿಗಳ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದ ಬೆಂಗಳೂರು ಪೊಲೀಸರು; ನೂರಾರು ಜನ ವಶಕ್ಕೆ
ಬೆಂಗಳೂರಿನಲ್ಲಿ ಹೆಚ್ಚಾದ ರೌಡಿಗಳ ಆರ್ಭಟ; ಹದ್ದಿನ ಕಣ್ಣಿಡಲು ಕಮಲ್ ಪಂತ್ ಸೂಚನೆ