ಬೆಂಗಳೂರು: ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಉಂಟಾದ ಪರಿಣಾಮ ಕರ್ನಾಟಕ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುತ್ತಿದ್ದು (Bangalore Rain), ಇಂದಿನಿಂದ ನಾಲ್ಕು ದಿನಗಳ ಕಾಲ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ (Weather Forecast) ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ನಿನ್ನೆ ಮೇಲ್ಮಟ್ಟದಲ್ಲಿ ಸುಳಿಗಾಳಿ ಉಂಟಾಗಿದ್ದು, ಅದರ ಪ್ರಭಾವದಿಂದಾಗಿ ಸಮುದ್ರ ಮಟ್ಟದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದು ನಾಳೆ ಮತ್ತು ನಾಡಿದ್ದು ತೀವ್ರವಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ವಾಯುಭಾರ ಕುಸಿತ ಆಗ್ನೇಯದಿಂದ ಉತ್ತರ ದಿಕ್ಕಿನಲ್ಲಿ ತಲುಪಿ, ಮಧ್ಯಬಂಗಾಳ ಕೊಲ್ಲಿಯಲ್ಲಿ,ಚಂಡಮಾರುತವಾಗುವ ಸಾಧ್ಯತೆಗಳಿವೆ. ಇದರ ಪ್ರಭಾವದಿಂದಾಗಿ ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ. ಇದರ ಪ್ರಭಾವ ದಕ್ಷಿಣ ಒಳನಾಡಿನಲ್ಲಿ ಹೆಚ್ಚಾಗಿರುತ್ತದೆ. ಇಂದಿನಿಂದ ದಕ್ಷಿಣ ಒಳನಾಡಿನ ಹಲವು ಕಡೆ ಮಳೆಯಾಗಲಿದ್ದು, ಐದನೇ ದಿನ ಕೆಲವು ಕಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇದನ್ನೂ ಓದಿ: Karnataka Rains: ಚಂಡಮಾರುತ ಪ್ರಭಾವ: ಬೆಂಗಳೂರು ಸೇರಿ ರಾಜ್ಯದ ಬಹುತೇಕ ಕಡೆ ಮುಂದಿನ 4 ದಿನಗಳ ಕಾಲ ಮಳೆ
ಇಂದು ಮತ್ತು ಮೇ 11ರಂದು ಕೆಲವು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಲಾಗಿದೆ. ಇಂದು ಪಶ್ಚಿಮ ಘಟ್ಟ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಹಾಗೂ ಮೈಸೂರು ಜಿಲ್ಲೆಗಳಿಗೆ ಹಾಗೂ ಮೇ 10ರಂದು ಪಶ್ಚಿಮ ಘಟ್ಟ ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳಿಗೆ ಗುಡುಗು ಮಿಂಚು ಸಹಿತ ಮಳೆಯಾಗಲಿದೆ ಎಂದು ಟಿವಿ9 ಗೆ ಹವಾಮಾನ ಇಲಾಖೆ ವಿಜ್ಞಾನಿ ಪ್ರಸಾದ್ ಮಾಹಿತಿ ನೀಡಿದ್ದಾರೆ.
ನಗರದ ಶಾಂತಿನಗರ ಸೇರಿದಂತೆ ವಿವಿಧ ಕಡೆಗಳಲ್ಲಿ ಸಂಜೆಯಿಂದಲೇ ಮಳೆ ಸುರಿಯಲು ಆರಂಭವಾಗಿದೆ. ಸದ್ಯ ನಗದ ವಿವಿಧ ಕಡೆಗಳಲ್ಲಿ ಮೋಡಕವಿದ ವಾತಾವರಣ ಇದ್ದು, ಭಾರೀ ಮಳೆಯಾಗುವ ಲಕ್ಷಣಗಳು ಕಾಣುತ್ತಿವೆ. ಮಳೆ ಹೆಚ್ಚಾದರೆ ರಸ್ತೆಗಳಲ್ಲಿ ನೀರು ತುಂಬಿ ಕರೆಯಂತಾಗಲಿದ್ದು, ವಾಹನ ಸವಾರರ ಸಂಚಾರಕ್ಕೆ ಅಡಚಣೆಯಾಗಲಿದೆ.
Published On - 4:07 pm, Mon, 8 May 23