
ಬೆಂಗಳೂರು, ಜೂನ್ 09: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣ ಹೊರಗೆ ಸಂಭವಿಸಿದ ಕಾಲ್ತುಳಿತದಲ್ಲಿ (Chinnaswamy stadium Stampede) ಆರ್ಸಿಬಿಯ 11 ಅಭಿಮಾನಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಕರ್ತವ್ಯ ಲೋಪದ ಕಾರಣ ನೀಡಿ ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್ (Vikas Kumar) ಸೇರಿದಂತೆ ಐವರು ಅಧಿಕಾರಿಗಳನ್ನು ಅಮಾನತು ಮಾಡಿತ್ತು. ಸರ್ಕಾರದ ಅಮಾನತು ಆದೇಶವನ್ನು ಪ್ರಶ್ನಿಸಿ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರು ಸಿಎಟಿ ಮೊರೆ ಹೋಗಿದ್ದಾರೆ. ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (CAT)ಗೆ ಅರ್ಜಿ ಸಲ್ಲಿಸಿದ್ದಾರೆ.
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ (ಜೂನ್ 05) ರಾತ್ರಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾಗಿದ್ದ ಬಿ. ದಯಾನಂದ್ , ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಹೆಚ್.ಟಿ.ಶೇಖರ್, ಬೆಂಗಳೂರು ಪಶ್ಚಿಮ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ವಿಕಾಸ್ ಕುಮಾರ್, ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿಯಾಗಿದ್ದ ಹೆಚ್.ಟಿ.ಶೇಖರ್, ಎಸಿಪಿ ಬಾಲಕೃಷ್ಣ, ಕಬ್ಬನ್‌ಪಾರ್ಕ್ ಇನ್ಸ್‌ಪೆಕ್ಟರ್ ಗಿರೀಶ್.ಎ.ಕೆ ಅವರನ್ನು ಅಮಾನತು ಮಾಡಲಾಗಿತ್ತು.
ಅತೀ ಹಿಂದುಳಿದ ಮಠಾಧೀಶರ ಸಭಾ ಬೆಂಗಳೂರಿನ ಕಬ್ಬನ್‌ಪಾರ್ಕ್ ಠಾಣೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಗೃಹ ಸಚಿವ ಪರಮೇಶ್ವರ್ ಮತ್ತು ಆರ್‌ಸಿಬಿ ಆಡಳಿತ ಮಂಡಳಿ ವಿರುದ್ಧ ದೂರು ನೀಡಿದೆ. ಇವರ ನಿರ್ಲಕ್ಷ್ಯದಿಂದಲೇ ಆರ್ಸಿಬಿಯ 11 ಅಭಿಮಾನಿಗಳ ಸಾವಾಗಿದೆ. ಹೀಗಾಗಿ ನಾಲ್ವರ ವಿರುದ್ಧ ಕ್ರಮ ಜರುಗಿಸುವಂತೆ ದೂರಿನಲ್ಲಿ ಮನವಿ ಮಾಡಿದ್ದಾರೆ.
ಇದನ್ನೂ ಓದಿ: RCB, KSCA ವಿರುದ್ಧ ಇಡಿಗೆ ದೂರು, ಇತ್ತ ಸಿಎಂ-ಡಿಸಿಎಂ ಮೇಲೆ ಕ್ರಮಕ್ಕೆ ಸ್ವಾಮೀಜಿಗಳು ಮನವಿ
ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧ ದಾಖಲಾಗಿರುವ ಕೇಸ್ ಅನ್ನು ರದ್ದುಪಡಿಸುವಂತೆ ಆರ್‌ಸಿಬಿ ಸಿಒಒ ರಾಜೇಶ್ ಮೆನನ್, ನಿಖಿಲ್ ಸೋಸಲೆ, ಡಿಎನ್‌ಎ ಇವೆಂಟ್ ಮ್ಯಾನೇಜೆಂಟ್‌ನ ಸುನೀಲ್ ಮ್ಯಾಥ್ಯೂ, ಕಿರಣ್ ಕುಮಾರ್, ಶಮಂತ್ ಮಾವಿನಕೆರೆ ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿದಾರರು ಅರ್ಜಿಗಳಲ್ಲಿ ಸರ್ಕಾರವನ್ನೇ ಹೊಣೆಗಾರರನ್ನಾಗಿ ಮಾಡಿದ್ದಾರೆ. ಕಾರ್ಯಕ್ರಮ ಆಯೋಜನೆಯಲ್ಲಿ ಸರ್ಕಾರದ ಪಾತ್ರ ಇದೆ. ಸಿಎಂ ಟ್ವೀಟ್, ಡಿಸಿಎಂ ಹೇಳಿಕೆಗಳನ್ನೇ ಆಧಾರವನ್ನಾಗಿಸಿ ರಿಟ್ ಅರ್ಜಿ ಸಲ್ಲಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ