ಬೆಂಗಳೂರು ಗ್ರಾಮಾಂತರಕ್ಕೆ ಅರೆಸೇನಾ ಪಡೆ ಭದ್ರತೆ ಬೇಕು: ಕುಮಾರಸ್ವಾಮಿ ಬೇಡಿಕೆ, ಕೊಟ್ಟ ಕಾರಣ ಇಲ್ಲಿದೆ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ ಪಾರದರ್ಶಕವಾಗಿ ನಡೆಯುವ ಬಗ್ಗೆ ಜೆಡಿಎಸ್ ನಾಯಕ ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ನವರು ಪೊಲೀಸ್ ದಬ್ಬಾಳಿಕೆ ಮಾಡಿ ರಾಜಕೀಯ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಕ್ಷೇತ್ರದಲ್ಲಿ ಭದ್ರತೆಗೆ ಹರಿಸೇನಾಪಡೆ ಕಳುಹಿಸಬೇಕು ಎಂದು ಕೇಂದ್ರಕ್ಕೆ ಬೇಡಿಕೆ ಸಲ್ಲಿಸುವುದಾಗಿ ಹೇಳಿದ್ದಾರೆ.

ಬೆಂಗಳೂರು ಗ್ರಾಮಾಂತರಕ್ಕೆ ಅರೆಸೇನಾ ಪಡೆ ಭದ್ರತೆ ಬೇಕು: ಕುಮಾರಸ್ವಾಮಿ ಬೇಡಿಕೆ, ಕೊಟ್ಟ ಕಾರಣ ಇಲ್ಲಿದೆ
ಪತ್ರಿಕಾಗೋಷ್ಠಿಯಲ್ಲಿ ನಿಖಿಲ್ ಕುಮಾರಸ್ವಾಮಿ ಜತೆ ಹೆಚ್​ಡಿ ಕುಮಾರಸ್ವಾಮಿ

Updated on: Mar 19, 2024 | 1:54 PM

ಬೆಂಗಳೂರು, ಮಾರ್ಚ್​ 19: ಜಯದೇವ ಹೃದ್ರೋಗ ಸಂಸ್ಥೆಯ ಮಾಜಿ ನಿರ್ದೇಶಕ ಡಾ. ಸಿಎನ್​ ಮಂಜುನಾಥ್ (Dr CN Manjunath) ಬಿಜೆಪಿಯಿಂದ ಕಣಕ್ಕಿಳಿಯುತ್ತಿರುವ ಬೆಂಗಳೂರು ಗ್ರಾಮಾಂತರ (Bengaluru Rural) ಲೋಕಸಭಾ ಕ್ಷೇತ್ರಕ್ಕೆ ಅರೆಸೇನಾ ಪಡೆ ಭದ್ರತೆ ಒದಗಿಸಬೇಕು ಎಂದು ಜೆಡಿಎಸ್ ನಾಯಕ ಹೆಚ್​ಡಿ ಕುಮಾರಸ್ವಾಮಿ (HD Kumaraswamy) ಬೇಡಿಕೆ ಇಟ್ಟಿದ್ದಾರೆ. ಕಾಂಗ್ರೆಸ್ ಸಂಸದ ಡಿಕೆ ಸುರೇಶ್ ಹಾಗೂ ಮಂಜುನಾಥ್ ನಡುವಣ ಸ್ಪರ್ಧೆಯಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಈಬಾರಿಯ ಲೋಕಸಭಾ ಚುನಾವಣೆಯಲ್ಲಿ ಹೈವೋಲ್ಟೇಜ್ ಕಣವಾಗಿ ಮಾರ್ಪಟ್ಟಿದೆ. ಈ ಕ್ಷೇತ್ರದಲ್ಲಿ ಪಾರದರ್ಶಕ ಚುನಾವಣೆ ನಡೆಯುವ ಬಗ್ಗೆ ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದ್ದಾರೆ.

ಹೃದಯದ ಚಿಕಿತ್ಸೆಗಾಗಿ ಚೆನ್ನೈಗೆ ತೆರಳುವುದಕ್ಕೂ ಮುನ್ನ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣೆ ಭದ್ರತೆಗಾಗಿ ಪ್ಯಾರಾ ಮಿಲಿಟರಿ ಫೋರ್ಸ್ ನಿಯೋಜಿಸುವಂತೆ ಕೇಂದ್ರ ಸರ್ಕಾರದ ಬಳಿ ಬೇಡಿಕೆ ಇಡುತ್ತೇನೆ. ಇಲ್ಲ ಅಂದರೆ ಈ ಕ್ಷೇತ್ರದಲ್ಲಿ ಪಾರದರ್ಶಕ ಚುನಾವಣೆ ನಡೆಯಲಾರದು ಎಂದು ಹೇಳಿದರು.

ಕಾಂಗ್ರೆಸ್ ವಿರುದ್ಧ ವಾಗ್ದಾಳಿ

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಚುನಾವಣೆ ಘೋಷಣೆಯಾಗುವುದಕ್ಕೂ ಮೊದಲೇ ಕಾಂಗ್ರೆಸ್ ಪಕ್ಷದಿಂದ ಸೀರೆ, ಕುಕ್ಕರ್ ಹಂಚಿಕೆ ನಡೆದಿದೆ. ಹಣ ಮತ್ತು ತೋಳ್ಬಲದಿಂದ ಚುನಾವಣೆಗೆಲ್ಲಲು ಡಿಕೆ ಸಹೋದರರು ಹೊರಟಿದ್ದಾರೆ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು. ಡಿಕೆ ಸಹೋದರರ ಈ ತಂತ್ರಗಳಿಗೆಲ್ಲ ನಾವು ಹೆದರುವುದಿಲ್ಲ. ಬಿಜೆಪಿ ಜೊತೆಗೆ ಜೆಡಿಎಸ್ ಮೈತ್ರಿಯನ್ನು ಕಾಂಗ್ರೆಸ್ ಸಹಿಸುತ್ತಿಲ್ಲ. ಪೊಲೀಸ್ ದಬ್ಬಾಳಿಕೆ ಮಾಡಿಕೊಂಡು ರಾಜಕೀಯ ಮಾಡುತ್ತಿದ್ದಾರೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: 3 ಸ್ಥಾನಗಳಿಗೆ ಬೇಡಿಕೆ ಇಟ್ಟಿದ್ದ ಜೆಡಿಎಸ್​ಗೆ ಬಿಜೆಪಿ ಹೈಕಮಾಂಡ್​ ಹೇಳಿದ್ದೇನು? ಬಹಿರಂಗಪಡಿಸಿದ ಕುಮಾರಸ್ವಾಮಿ

ಡಾ. ಮಂಜುನಾಥ್ ಅವರ ಸ್ಪರ್ಧೆಯಿಂದ ಬೆಂಗಳೂರು ಗ್ರಾಮಾಂತರ ಕ್ಷೇತ್ರ ಇದೀಗ ರಾಜ್ಯದ ಗಮನ ಸೆಳೆಯುತ್ತಿದೆ. ಕಳೆದ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಗೆದ್ದಿದ್ದ ಏಕೈಕ ಕ್ಷೇತ್ರ ಬೆಂಗಳೂರು ಗ್ರಾಮಾಂತರ. ಹೀಗಾಗಿ ಕಾಂಗ್ರೆಸ್ ಪಕ್ಷಕ್ಕೆ ಇದು ಬಹಳ ಮುಖ್ಯವಾದ ಕ್ಷೇತ್ರವಾಗಿದೆ. ಮತ್ತೊಂದೆಡೆ, ಡಿಸಿಎಂ ಡಿಕೆ ಶಿವಕುಮಾರ್ ಸಹೋದರನೇ ಸಂಸದನಾಗಿದ್ದು, ಈ ಬಾರಿಯೂ ಸ್ಪರ್ಧಿಸುತ್ತಿದ್ದಾರೆ. ಹೀಗಾಗಿ ಬಿಜೆಪಿಯು ಮಂಜುನಾಥ್ ಅವರನ್ನು ಕಣಕ್ಕಿಳಿಸಿರುವುದನ್ನು ಕಾಂಗ್ರೆಸ್ ಪ್ರತಿಷ್ಠೆಯಾಗಿ ತೆಗೆದುಕೊಳ್ಳಲಿದೆ.

ಚೆನ್ನೈಗೆ ತೆರಳಿದ ಕುಮಾರಸ್ವಾಮಿ

ಹೃದಯ ಸಂಬಂಧಿ ಅನಾರೋಗ್ಯದಿಂದ ಬಳಲುತ್ತಿರುವ ಕುಮಾರಸ್ವಾಮಿ ಚಿಕಿತ್ಸೆಗಾಗಿ ಚೆನ್ನೈಗೆ ತೆರಳಿದರು. ಪದ್ಮನಾಭ ನಗರದ ದೇವೇಗೌಡರ ನಿವಾಸದಲ್ಲಿ ತಂದೆ ಹೆಚ್​ಡಿ ದೇವೇಗೌಡ ಹಾಗೂ ತಾಯಿ ಚೆನ್ನಮ್ಮ ಅವರಿಂದ ಆಶೀರ್ವಾದ ಪಡೆದ ಕುಮಾರಸ್ವಾಮಿ ನಂತರ ವಿಮಾನ ನಿಲ್ದಾಣಕ್ಕೆ ತೆರಳಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Loading...
Unable to load recommendations.
Follow Us