‘ಮಂಚಕ್ಕೆ ಬಾ ನಂಗೆ ಮಜಾ ಬೇಕು ನಿಂಗೆ ಹಣ ಬೇಕು’: ಸೈಟ್ ಕೊಡಿಸ್ತೇನೆಂದು ಸ್ವಾಮೀಜಿಯಿಂದ ಮಹಿಳೆಗೆ ಲೈಂಗಿಕ ಕಿರುಕುಳ
ಸೈಟ್ ಕೊಡಿಸುವುದಾಗಿ ಲಕ್ಷಾಂತರ ರೂ. ಪಡೆದು ವಂಚಿಸಿದ್ದಾರೆ ಹಾಗೂ ಹಣ ವಾಪಸ್ ಕೇಳಿದಾಗ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ದೊಡ್ಡಬಳ್ಳಾಪುರದ ಮೆಳೆಕೋಟೆಯ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಆಡಿಯೋ-ವಿಡಿಯೋ ಸಾಕ್ಷ್ಯಗಳ ಸಹಿತ ಪೊಲೀಸರಿಗೆ ದೂರು ನೀಡಿದ್ದಾರೆ. ಅತ್ತ ಸ್ವಾಮೀಜಿಯೂ ಪ್ರತಿ ದೂರು ನೀಡಿದ್ದು, ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ದೇವನಹಳ್ಳಿ, ಡಿಸೆಂಬರ್ 13: ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ (Doddaballapur) ತಾಲೂಕು ಮೆಳೆಕೋಟೆಯಲ್ಲಿರುವ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠದ ಸ್ವಾಮೀಜಿ ಬ್ರಹ್ಮಾನಂದ ಗುರೂಜಿ ವಿರುದ್ಧ ಮಹಿಳೆಯೊಬ್ಬರು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸೈಟ್ ಕೊಡಿಸುವುದಾಗಿ ಹೇಳಿ ಲಕ್ಷಾಂತರ ರೂಪಾಯಿ ಹಣ ಪಡೆದಿದ್ದಲ್ಲದೆ, ಅದನ್ನು ವಾಪಸ್ ಕೊಡಿಸುವ ನೆಪದಲ್ಲಿ ಲೈಂಗಿಕ ಕಿರುಕುಳ ನೀಡಲಾಗಿದೆ ಎಂದು ಮಹಿಳೆ ದೂರಿದ್ದಾರೆ. ಮಹಿಳೆ ಮತ್ತು ಆಕೆಯ ಪತಿ ಸ್ವಾಮೀಜಿ ನಿವಾಸದ ಬಳಿಯೇ ವಾಸವಿದ್ದು, ಪರಿಚಯವಾಗಿತ್ತು ಎನ್ನಲಾಗಿದೆ.
ಸ್ವಾಮೀಜಿ ತಮ್ಮ ಪರಿಚಯದವರಿಂದ ಕಡಿಮೆ ಬೆಲೆಗೆ ಸೈಟ್ ಕೊಡಿಸುವ ಭರವಸೆ ನೀಡಿದ್ದರು. 13 ಲಕ್ಷ ರೂ. ಮೌಲ್ಯದ ಸೈಟ್ ಅನ್ನು 12 ಲಕ್ಷಕ್ಕೆ ಕೊಡಿಸುವುದಾಗಿ ಮಾತುಕತೆ ನಡೆಸಿದ್ದರು. ಆದರೆ, ತಮ್ಮ ಬಳಿ 8 ಲಕ್ಷ ರೂ. ಮಾತ್ರ ಇದೆ ಎಂದು ಮಹಿಳೆ ಹೇಳಿದ್ದರು. ಹೀಗಾಗಿ ಉಳಿದ ಹಣಕ್ಕೆ ಸಹಾಯ ಮಾಡುವುದಾಗಿ ಸ್ವಾಮೀಜಿ ಹೇಳಿದ್ದರು ಎಂಬ ಆರೋಪವಿದೆ.
ಮಹಿಳೆ ಬಳಿಯಿದ್ದ 8 ಲಕ್ಷ ರೂ.ಗಳಲ್ಲಿ 5 ಲಕ್ಷ ರೂಪಾಯಿಯನ್ನು ಅಡ್ವಾನ್ಸ್ ಆಗಿ ಮತ್ತೊಬ್ಬರಿಗೆ ಸ್ವಾಮೀಜಿ ಕೊಡಿಸಿದ್ದಾರೆ. ಆದರೆ ಒಂದು ವರ್ಷ ಕಳೆದರೂ ಸೈಟ್ ನೀಡದೆ, ಅಡ್ವಾನ್ಸ್ ಹಣವನ್ನೂ ವಾಪಸ್ ನೀಡದೇ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಮಹಿಳೆ ಆರೋಪಿಸಿದ್ದಾರೆ.
ಹಣ ವಾಪಸ್ ಕೇಳಿದಾಗ ಮಂಚಕ್ಕೆ ಕರೆದ ಸ್ವಾಮೀಜಿ
ಒಂದು ವರ್ಷವಾದರೂ ಸೈಟ್ ಕೊಡದ ಕಾರಣ ಹಣವನ್ನು ಮಹಿಳೆ ವಾಪಸ್ ಕೇಳಿದ್ದಾರೆ. ಆಗ ಸ್ವಾಮೀಜಿ, ‘‘ರೂಂಗೆ ಬಾ ಹಣ ಕೊಡಿಸುತ್ತೇನೆ, ನಿನಗೆ ಹಣ ಬೇಕು, ನನಗೆ ಮಜಾ ಬೇಕು’’ ಎಂದು ಹೇಳಿದ್ದಾರೆ ಎನ್ನಲಾಗಿದೆ. ಸ್ವಾಮೀಜಿಯ ಈ ಮಾತುಗಳನ್ನು ಮಹಿಳೆ ಮೊಬೈಲ್‌ನಲ್ಲಿ ಆಡಿಯೋ ಹಾಗೂ ವಿಡಿಯೋ ರೂಪದಲ್ಲಿ ರೆಕಾರ್ಡ್ ಮಾಡಿಕೊಂಡಿದ್ದಾರೆ.
ಸ್ವಾಮೀಜಿ ನಿರಂತರವಾಗಿ ಫೋನ್ ಕರೆ, ಆಡಿಯೋ ಮೆಸೇಜ್ ಹಾಗೂ ವಿಡಿಯೋ ಕಾಲ್ ಮಾಡಿ ಕಿರುಕುಳ ನೀಡಿದ್ದಾರೆ. ಅಲ್ಲದೇ ಒಂಟಿಯಾಗಿದ್ದ ವೇಳೆ ಮನೆಗೆ ಬಂದು ಕಿರುಕುಳ ನೀಡಿದ್ದಾರೆ. ಆಡಿಯೋ-ವಿಡಿಯೋಗಳನ್ನು ಡಿಲೀಟ್ ಮಾಡುವಂತೆ ಒತ್ತಡ ಹೇರಿದ್ದು, ಅದಕ್ಕಾಗಿ 50 ಸಾವಿರ ರೂ. ನೀಡುವ ಆಮಿಷವನ್ನೂ ಒಡ್ಡಿದ್ದಾರೆ ಎಂದು ಮಹಿಳೆ ಆರೋಪಿಸಿದ್ದಾರೆ.
ಈ ಎಲ್ಲ ಘಟನೆಗಳು ಗಂಡನಿಗೆ ಗೊತ್ತಾಗಿ ಆತ ತನ್ನನ್ನು ಬಿಟ್ಟು ಹೋಗಿದ್ದಾನೆ ಎಂದೂ ಮಹಿಳೆ ಅಲವತ್ತುಕೊಂಡಿದ್ದಾರೆ. ಸಂತ್ರಸ್ತೆಯು ಈಗಾಗಲೇ ಪೊಲೀಸ್ ಠಾಣೆಗೆ ಆಡಿಯೋ-ವಿಡಿಯೋ ಸಾಕ್ಷ್ಯಗಳೊಂದಿಗೆ ದೂರು ನೀಡಿದ್ದಾರೆ. ಆದರೆ ನ್ಯಾಯ ಸಿಗುತ್ತಿಲ್ಲ ಎಂದು ‘ಟಿವಿ9’ ಬಳಿ ನೋವು ತೋಡಿಕೊಂಡಿದ್ದಾರೆ.
ಇದನ್ನೂ ಓದಿ: ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್: ಹೊಸಕೆರೆಹಳ್ಳಿ ನೈಸ್ ರಸ್ತೆಯಲ್ಲಿ ಇಬ್ಬರು ಮಹಿಳಾ ಕಾರ್ಮಿಕರು ಸಾವು
ಮತ್ತೊಂದೆಡೆ, ಬ್ರಹ್ಮಾನಂದ ಗುರೂಜಿ ಮೆಳೆಕೋಟೆ ಬಳಿ ಸರ್ಕಾರದ ಆರ್ಥಿಕ ನೆರವಿನಿಂದ ಮಹರ್ಷಿ ಶ್ರೀ ವಾಲ್ಮೀಕಿ ಗುರುಕುಲ ಪೀಠ ಆಶ್ರಮವನ್ನು ಸ್ಥಾಪಿಸಿರುವುದು ಕೂಡ ಬಯಲಾಗಿದ್ದು, ಇದೀಗ ಚರ್ಚೆಗೆ ಗ್ರಾಸವಾಗಿದೆ. ಪ್ರಕರಣದ ಕುರಿತು ಪೊಲೀಸ್ ಇಲಾಖೆ ತನಿಖೆ ನಡೆಸಬೇಕಿದ್ದು, ಆರೋಪಗಳ ಸತ್ಯಾಸತ್ಯತೆ ಹೊರಬರಬೇಕಿದೆ.
ಬ್ರಹ್ಮಾನಂದ ಸ್ವಾಮೀಜಿಯಿಂದ ಪ್ರತಿ ದೂರು
ಏತನ್ಮಧ್ಯೆ, ಮಹಿಳೆ ಮತ್ತು ಆಕೆಯ ಕುಟುಂಬದವರು ಹಣಕ್ಕಾಗಿ ಬ್ಲ್ಯಾಕ್ಮೇಲ್ ಮಾಡಿದ್ದಾರೆ ಎಂದು ಬ್ರಹ್ಮಾನಂದ ಸ್ವಾಮೀಜಿ ಪ್ರತಿ ದೂರು ದಾಖಲಿಸಿದ್ದಾರೆ. ಹಣ ಕೊಡಬೇಕು. ಇಲ್ಲದಿದ್ದರೆ ನಿಮ್ಮ ಫೋಟೊ, ಆಡಿಯೋ, ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟ್ ಮಾಡಿ ಮಾನ ಮತ್ತು ಖ್ಯಾತಿಯನ್ನು ಹಾಳು ಮಾಡುತ್ತೇವೆಂದು ಬೆದರಿಕೆಯೊಡ್ಡಿದ್ದಾರೆ ಎಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ಸ್ವಾಮೀಜಿ ಉಲ್ಲೇಖಿಸಿದ್ದಾರೆ.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 9:40 am, Sat, 13 December 25



