
ದೇವನಹಳ್ಳಿ, ಡಿಸೆಂಬರ್ 11: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ (Devanahalli) ಹೊರವಲಯದ ಲಾಲಗೊಂಡನಹಳ್ಳಿ ಗೇಟ್ ಬಳಿ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ (Accident) ಮೂವರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ದುರ್ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ದಿಕ್ಕಿನಿಂದ ದೇವನಹಳ್ಳಿ ಕಡೆಗೆ ಬರುತ್ತಿದ್ದ ಕಾರು ಅತಿವೇಗದಲ್ಲಿ ಸಂಚರಿಸುತ್ತಿತ್ತು ಎನ್ನಲಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರು ಡಿವೈಡರ್ ಹಾರಿ ಎದುರುಗಡೆಯಿಂದ ಬರುತ್ತಿದ್ದ ಕೆಎಸ್ಆರ್ಟಿಸಿ ಬಸ್‌ಗೆ (KSRTC Bus) ಡಿಕ್ಕಿಯಾಗಿದೆ.
ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕೆಎಸ್ಆರ್ಟಿಸಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಅಪಘಾತದಲ್ಲಿ ಮೃತಪಟ್ಟವರನ್ನು ಮೋಹನ್ ಕುಮಾರ್ (33), ಸುಮನ್ (28), ಸಾಗರ್ (23) ಎಂದು ಗುರುತಿಸಲಾಗಿದೆ. ಇವರೆಲ್ಲ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ನಿವಾಸಿಗಳು.
ಘಟನಾ ಸ್ಥಳಕ್ಕೆ ದೇವನಹಳ್ಳಿ ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿ ಧಾವಿಸಿದ್ದು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಅತಿವೇಗದ ಚಾಲನೆ ಈ ದುರಂತಕ್ಕೆ ಕಾರಣವೆಂದು ಹೇಳಲಾಗುತ್ತಿದೆ.
ಅಪಘಾತದ ಕಾರಣ ಹೈದರಾಬಾದ್ ಬೆಂಗಳೂರು ಹೆದ್ದಾರಿಯಲ್ಲಿ ರಾತ್ರಿ ಟ್ರಾಫಿಕ್ ಜಾಮ್ ಉಂಟಾಯಿತು. ಅಪಘಾತದ ರಭಸಕ್ಕೆ ನಜ್ಜುಗುಜ್ಜಾದ ಕಾರಿನಲ್ಲಿ ಸಿಲುಕಿದ್ದ ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಇದರಿಂದಾಗಿ ಹೆದ್ದಾರಿಯಲ್ಲಿ ಸಂಚಾರ ದಟ್ಟಣೆ ಉಂಟಯಿತು. ಸದ್ಯ ಮೃತದೇಹಗಳನ್ನು ಆಕಾಶ್ ಆಸ್ವತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ.
ಇದನ್ನೂ ಓದಿ: ಈ ರೀತಿಯ ಕಾರು ಅಪಘಾತ ನೀವು ನೋಡಿರಲು ಸಾಧ್ಯವೇ ಇಲ್ಲ!
Published On - 7:04 am, Thu, 11 December 25