ಬೆಂಗಳೂರು ಕಾಲ್ತುಳಿತ: ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿದ ಹೈಕೋರ್ಟ್, ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ
ಬೆಂಗಳೂರು ಕಾಲ್ತುಳಿತ ದುರಂತ ಸದ್ಯ ಗಂಭೀರ ಸ್ವರೂಪ ಪಡೆದುಕೊಂಡಿದ್ದು, ಕಬ್ಬನ್ ಪಾರ್ಕ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ. ಮ್ಯಾಜಿಸ್ಟ್ರೇಟ್ ತನಿಖೆಗೂ ಸರ್ಕಾರ ಆದೇಶಿಸಿದೆ. ಈ ಮಧ್ಯೆ, ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಕೂಡ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕೆಎಸ್ಸಿಎ ವಿರುದ್ಧ ದೂರು ದಾಖಲಿಸಿದ್ದಾರೆ. ಇದೀಗ ಕರ್ನಾಟಕ ಹೈಕೋರ್ಟ್ ಸ್ವಯಂಪ್ರೇರಿತವಾಗಿ ಪಿಐಎಲ್ ದಾಖಲಿಸಿಕೊಂಡಿದೆ.

ಬೆಂಗಳೂರು, ಜೂನ್ 5: ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ಹೊರಭಾಗದಲ್ಲಿ ಆರ್ಸಿಬಿ (RCB) ಐಪಿಎಲ್ ವಿಜಯೋತ್ಸವ ಆಚರಣೆ ಸಂದರ್ಭ ಸಂಭವಿಸಿದ ಕಾಲ್ತುಳಿತ ಹಾಗೂ 11 ಜನರ ಸಾವಿಗೆ ಸಂಬಂಧಿಸಿದ ಕರ್ನಾಟಕ ಹೈಕೋರ್ಟ್ (Karnataka High Court) ಸ್ವಯಂಪ್ರೇರಿತವಾಗಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದೆ. ಘಟನೆ ಬಗ್ಗೆ ವರದಿ ಸಲ್ಲಿಸಲು ಸರ್ಕಾರಕ್ಕೆ ಸೂಚನೆ ನೀಡಿದ್ದು, ಮಧ್ಯಾಹ್ನ 2.30 ಕ್ಕೆ ವಿಚಾರಣೆ ನಿಗದಿಪಡಿಸಿದೆ. ಪತ್ರಿಕೆಗಳಲ್ಲಿ ಬಂದ ವರದಿ ಆಧರಿಸಿ ಸ್ವಯಂಪ್ರೇರಿತ ಪಿಐಎಲ್ ದಾಖಲಿಸಿಕೊಳ್ಳಲಾಗಿದೆ. ಬುಧವಾರ ಚಿನ್ನಸ್ವಾಮಿ ಸ್ಟೇಡಿಯಂ ಹೊರಗಡೆ ನಡೆದ ಘಟನೆ ತೀವ್ರ ಕಳವಳಕಾರಿಯಾಗಿದೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಕರ್ನಾಟಕ ಹೈಕೋರ್ಟ್ ನ್ಯಾಯಪೀಠ ಹೇಳಿದೆ.
ಸರ್ಕಾರ ಕೈಗೊಂಡಿದ್ದ ಭದ್ರತಾ ಕ್ರಮಗಳ ಮಾಹಿತಿ ನೀಡಲು ಪೀಠ ಸೂಚನೆ ನೀಡಿದೆ. ವಿಚಾರಣೆ ವೇಳೆ, ಹೈಕೋರ್ಟ್ನಲ್ಲಿ ಎಜಿ ಶಶಿಕಿರಣ್ ಶೆಟ್ಟಿ ಉಪಸ್ಥಿತರಿದ್ದರು. ಬಳಿಕ ಮಾತನಾಡಿದ ಅವರು, ಹೈಕೋರ್ಟ್ ನೀಡುವ ಸೂಚನೆಗಳನ್ನು ಪಾಲಿಸಲಾಗುವುದು. ನಡೆದ ಘಟನೆ, ಸರ್ಕಾರದ ಕ್ರಮ ಎಲ್ಲದರ ಮಾಹಿತಿಯನ್ನು ಉಚ್ಚ ನ್ಯಾಯಾಲಯಕ್ಕೆ ನೀಡಲಾಗುವುದು ಎಂದು ಅವರು ಮಾಹಿತಿ ನೀಡಿದರು.
ಘಟನೆ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಲಾಗಿದೆ. ಈ ಕುರಿತ ಎಲ್ಲಾ ವಿವರಗಳನ್ನು ಕೋರ್ಟ್ಗೆ ಒದಗಿಸುವುದಾಗಿ ಎಜಿ ಶಶಿಕಿರಣ್ ಶೆಟ್ಟಿ ಹೇಳಿದ್ದಾರೆ.
ಏತನ್ಮಧ್ಯೆ ಘಟನೆ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ. 11 ಸಾವುಗಳಿಗೆ ಸಂಬಂಧಿಸಿ 11 ಅಸಹಜ ಸಾವು ಪ್ರಕರಣಗಳನ್ನು ದಾಖಲಿಸಲಾಗಿದೆ. ಆದರೆ, ಎಫ್ಐಆರ್ ದಾಖಲಿಸದೇ ಇರುವ ಪೊಲೀಸರ ನಡೆ ಅನುಮಾನಗಳಿಗೆ ಕಾರಣವಾಗಿದೆ. ಹಿರಿಯ ಪೊಲೀಸ್ ಅಧಿಕಾರಿಗಳ ಸೂಚನೆ ಮೇರೆಗೆ ಅಸಹಜ ಸಾವು ಪ್ರಕರಣ ದಾಖಲಿಸಲಾಗಿದೆ ಎನ್ನಲಾಗಿದೆ.
ಇದನ್ನೂ ಓದಿ: ತಕ್ಷಣವೇ ಆರ್ಸಿಬಿ ಸಂಭ್ರಮಾಚರಣೆ ಬೇಡವೆಂದರೂ ಕೇಳಿಲ್ಲ: ಪೊಲೀಸ್ ಅಧಿಕಾರಿಗಳಿಂದ ತೀವ್ರ ಅಸಮಾಧಾನ
ಮತ್ತೊಂದೆಡೆ, ಸಾಮಾಜಿಕ ಹೋರಾಟಗಾರ ಸ್ನೇಹಮಯಿ ಕೃಷ್ಣ ಘಟನೆ ಸಂಬಂಧ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಪೊಲೀಸ್ ಕಮಿಷನರ್ ದಯಾನಂದ್ ಭೇಟಿ
ಘಟನೆ ನಡೆದ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಬೆಂಗಳೂರು ಪೊಲೀಸ್ ಆಯುಕ್ತ ಬಿ ದಯಾನಂದ್ ಗುರುವಾರ ಭೇಟಿ ನೀಡಿದರು. ಚಿನ್ನಸ್ವಾಮಿ ಕ್ರೀಡಾಂಗಣದ ಗೇಟ್ ನಂಬರ್ 6, 7, 21 ರಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಜನ ಮೃತಪಟ್ಟಿದ್ದರು. ಹೀಗಾಗಿ ಆ ಜಾಗಗಳಿಗೆ ಕಮಿಷನರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 10:47 am, Thu, 5 June 25







