AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಲ್ಲಿ ಇನ್ಮುಂದೆ ದಿನದ 24 ಗಂಟೆಯೂ ಹೋಟೆಲ್​​ಗಳು ಓಪನ್​​? ಶೀಘ್ರವೇ ಮಹತ್ವದ ಆದೇಶ ಸಾಧ್ಯತೆ

ಬೆಂಗಳೂರಿನಲ್ಲಿ ದಿನದ 24 ಗಂಟೆಯೂ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳನ್ನು ತೆರೆಯಲು ಅನುಮತಿ ನೀಡುವಂತೆ ಹೋಟೆಲ್ ಸಂಘ ಸರ್ಕಾರಕ್ಕೆ ಮನವಿ ಮಾಡಿದೆ. ಈ ಕುರಿತು ಪರಿಶೀಲಿಸುವಂತೆ ಸಿಎಂ ಡಿಕೆ ಶಿವಕುಮಾರ್ ಪೊಲೀಸ್ ಆಯುಕ್ತರಿಗೆ ಶಿಫಾರಸು ಮಾಡಿದ್ದಾರೆ. ಸಂಘದ ಮನವಿಗೆ ಸ್ಪಂದಿಸಿ ಪೊಲೀಸ್ ಇಲಾಖೆಯು ಆದಷ್ಟು ಬೇಗ ಈ ಕುರಿತು ಹೊಸ ಆದೇಶವನ್ನು ಹೊರಡಿಸಬೇಕು ಎಂದು ಬೆಂಗಳೂರು ಹೋಟೆಲ್​​ಗಳ ಸಂಘ ನಿರೀಕ್ಷೆ ವ್ಯಕ್ತಪಡಿಸಿದೆ.

ಬೆಂಗಳೂರಲ್ಲಿ ಇನ್ಮುಂದೆ ದಿನದ 24 ಗಂಟೆಯೂ ಹೋಟೆಲ್​​ಗಳು ಓಪನ್​​? ಶೀಘ್ರವೇ ಮಹತ್ವದ ಆದೇಶ ಸಾಧ್ಯತೆ
ಸಾಂದರ್ಭಿಕ ಚಿತ್ರ
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
| Edited By: |

Updated on: Nov 27, 2026 | 6:31 AM

Share

ಬೆಂಗಳೂರು, ನವೆಂಬರ್​​ 27: ಬೆಂಗಳೂರು ಮಹಾನಗರವಾಗಿ ಬೆಳೆದಿದ್ದರೂ ಅದಕ್ಕೆ ತಕ್ಕ ಸೌಲಭ್ಯಗಳನ್ನ ಹೊಂದಿಲ್ಲ. ಹೀಗಾಗಿಯೇ ದೇಶದ ಇತರೆ ಮಹಾನಗರಗಳಂತೆಯೇ ಬೆಂಗಳೂರಿನಲ್ಲೂ 24/7 ಹೋಟೆಲ್ ಮತ್ತು ರೆಸ್ಟೋರೆಂಟ್​ಗಳನ್ನ ತೆರೆಯಲು ಅನುಮತಿ ನೀಡುವಂತೆ ಹೋಟೆಲ್​​ಗಳ ಸಂಘ ಸರ್ಕಾರಕ್ಕೆ ಮನವಿ ಸಲ್ಲಿಸಿದೆ. ಮಹಾರಾಷ್ಟ್ರ, ಗುಜರಾತ್, ತಮಿಳುನಾಡು, ಕೇರಳ, ಗೋವಾ ಸೇರಿದಂತೆ ಬೇರೆ ಮೆಟ್ರೋ ನಗರಗಳಲ್ಲಿ ಈಗಾಗಲೇ 24/7 ಹೋಟೆಲ್​​ಗಳನ್ನು ತೆರೆಯಲು ಅನುಮತಿ ನೀಡಲಾಗಿದೆ ಎಂಬುದನ್ನೂ ಸಂಘ ಸರ್ಕಾರದ ಗಮನಕ್ಕೆ ತಂದಿದೆ.

ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಸಿಎಂ ಶಿಫಾರಸ್ಸು

ಹೋಟೆಲ್ ಉದ್ಯಮದ ಬಹುಕಾಲದ ಈ ಬೇಡಿಕೆಗೆ ಸ್ಪಂದಿಸಿರುವ ಮುಖ್ಯಮಂತ್ರಿ ಡಿಕೆ ಶಿವಕುಮಾರ್​​, ಈ ಬಗ್ಗೆ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಶಿಫಾರಸ್ಸು ಮಾಡಿದ್ದಾರೆ. ಇನ್ನು ಪ್ರಧಾನಮಂತ್ರಿಯವರು ಕೂಡ ಮಾಲ್, ಮಲ್ಟಿಪ್ಲೆಕ್ಸ್, ಹೋಟೆಲ್, ರೆಸ್ಟೋರೆಂಟ್ ಹಾಗೂ ಅಂಗಡಿ ಮುಂಗಟ್ಟುಗಳನ್ನು ಹೆಚ್ಚಿನ ಸಮಯ ತೆರೆದಿಟ್ಟರೆ ಬೆಂಗಳೂರಿನಲ್ಲಿ ಹಗಲಿನ ವಾಹನ ದಟ್ಟಣೆ ಕಡಿಮೆಯಾಗಲಿದೆ ಎಂಬ ಸಲಹೆಯನ್ನು ನೀಡಿದ್ದಾರೆ. ಹೋಟೆಲ್ ಸಂಘದ ಈ ಮನವಿಗೆ ಸಾರ್ವಜನಿಕರಿಂದಲೂ ಬೆಂಬಲ ವ್ಯಕ್ತವಾಗಿದ್ದು, ವಿಶೇಷವಾಗಿ ರಾತ್ರಿ ವೇಳೆ ಕೆಲಸ ಮಾಡುವ ಜನರಿಗೆ ಇದರಿಂದ ತುಂಬಾ ಅನುಕೂಲವಾಗಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ರಾತ್ರಿ ವ್ಯಾಪಾರ ಹೆಚ್ಚಾದರೆ ಹಗಲಿನ ಟ್ರಾಫಿಕ್ ಒತ್ತಡ ಕಡಿಮೆಯಾಗಲಿದೆ ಎಂಬುದು ಸಂಘದ ಲೆಕ್ಕಾಚಾರವಾಗಿದೆ.

ಇದನ್ನೂ ಓದಿ: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಸೇರಿ ಹಲವು ಐಎಎಸ್ ಅಧಿಕಾರಿಗಳ ವರ್ಗಾವಣೆ

ಸದ್ಯ ಪೊಲೀಸ್ ಇಲಾಖೆಯ ಹೊಸ ಆದೇಶಕ್ಕಾಗಿ ಎಲ್ಲರೂ ಕಾಯುತ್ತಿದ್ದಾರೆ. ಸಂಘದ ಮನವಿಗೆ ಸ್ಪಂದಿಸಿ ಪೊಲೀಸ್ ಇಲಾಖೆಯು ಆದಷ್ಟು ಬೇಗ ಈ ಕುರಿತು ಹೊಸ ಆದೇಶವನ್ನು ಹೊರಡಿಸಬೇಕು ಎಂದು ಬೆಂಗಳೂರು ಹೋಟೆಲ್​​ಗಳ ಸಂಘ ನಿರೀಕ್ಷೆ ವ್ಯಕ್ತಪಡಿಸಿದೆ. ಒಂದು ವೇಳೆ ಅನುಮತಿ ಸಿಕ್ಕರೆ ಇತರ ಕೆಲವು ರಾಜ್ಯಗಳಂತೆ ಸಿಲಿಕಾನ್​​ ಸಿಟಿಯಲ್ಲಿಯೂ 24/7 ಹೋಟೆಲ್​​ಗಳ ಸೌಲಭ್ಯ ಜನರಿಗೆ ಸಿಗಲಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.
ಲಕ್ಷ್ಮಿ ನರಸಿಂಹ ಸ್ವಾಮಿ ಎಲ್.

ಲಕ್ಷ್ಮಿ ನರಸಿಂಹ ಸ್ವಾಮಿ. ಎಲ್ ಆದ ನಾನು ಮೂಲತಃ ಬೆಂಗಳೂರಿನವಾಗಿದ್ದು, ಪೂರ್ವ ತಾಲೂಕಿನ ದೊಡ್ಡಗುಬ್ಬಿ ಎಂಬ ಗ್ರಾಮದಲ್ಲಿ ವಾಸವಿದ್ದೇನೆ. ಕಳೆದ 6 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ಪ್ರಸ್ತುತ ಟಿವಿ9 ಕನ್ನಡ ಸುದ್ದಿ ವಾಹಿನಿಯಲ್ಲಿ ಬೆಂಗಳೂರು ವರದಿಗಾರನಾಗಿ ಸೇವೆ ಸಲ್ಲಿಸುತ್ತಿದ್ದೇನೆ. ಐತಿಹಾಸಿಕ ಸರ್ಕಾರಿ ಕಲಾ ಕಾಲೇಜಿನಲ್ಲಿ ಸ್ನಾತಕ ಪದವಿ ಪೂರೈಸಿದ ಬಳಿಕ ಬೆಂಗಳೂರು ವಿಶ್ವವಿದ್ಯಾಲಯ (ಜ್ಞಾನಭಾರತಿ) ದಲ್ಲಿ M.A (ಪತ್ರಿಕೋದ್ಯಮ ಮತ್ತು ಸಂವಹನ) ಸ್ನಾತಕೋತ್ತರ ಪದವಿ ಪೂರೈಸಿದ್ದೇನೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಡಿಯ ನಗರ ಪಾಲಿಕೆಗಳು, ಬೆಸ್ಕಾಂ, ಜಲಮಂಡಳಿ, ಆಹಾರ, ಆರೋಗ್ಯ, ಶಿಕ್ಷಣ ಸೇರಿ ವಿವಿಧ ಕ್ಷೇತ್ರಗಳಲ್ಲಿ ನಾಗರಿಕರಿಗೆ ಎದುರಾಗುವ ಸಮಸ್ಯೆಗಳಿಗೆ, ಸಂಕಷ್ಟಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಈವರೆಗೂ ಶ್ರಮವಹಿಸಿದ್ದು, ಮುಂದಿನ ದಿನಗಳಲ್ಲೂ ನಾಗರಿಕರ ಸೇವೆಯನ್ನೂ ಮುಂದುವರೆಸುವ ಗುರಿಯೊಂದಿಗೆ ಉತ್ತಮ ಸಮಾಜಕ್ಕಾಗಿ ಬದ್ಧನಾಗಿದ್ದೇನೆ..

Read More