ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ಉಪವಿಭಾದಲ್ಲಿ 34 ಮಂದಿ ಬಾಂಗ್ಲಾ ಅಕ್ರಮ ವಲಸಿಗರು ಪತ್ತೆ
ಬಾಂಗ್ಲಾದೇಶದ ಅಕ್ರಮ ವಲಸಿಗರ ವಿರುದ್ಧ ಬೆಂಗಳೂರು ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಪೊಲೀಸರು ಕಳೆದ ಒಂದು ವಾರದಲ್ಲಿ 34 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಒಂದೆಡೆ, ವೀಸಾ ಅವಧಿ ಮುಗಿದರೂ ಅಕ್ರಮವಾಗಿ ವಾಸಿಸುತ್ತಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ವಶಕ್ಕೆ ಪಡೆಯಲಾಗಿದೆ.

ಬೆಂಗಳೂರು, ಜನವರಿ 13: ಬೆಂಗಳೂರಿನ (Bangalore) ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಪೊಲೀಸರು ಶಂಕಿತ ಅಕ್ರಮ ಬಾಂಗ್ಲಾ ವಲಸಿಗರ (Bangadesh Immigrants) ವಿರುದ್ಧ ಸರಣಿ ಕಾರ್ಯಾಚರಣೆ ನಡೆಸಿ ಒಟ್ಟು 34 ಮಂದಿಯನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿಯ ಆಧಾರದ ಮೇಲೆ ಕಳೆದ ಒಂದು ವಾರದಲ್ಲಿ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ದಾಳಿ ನಡೆಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 7ಕ್ಕೂ ಹೆಚ್ಚು, ಹೆಬ್ಬಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16, ಹಾಗೂ ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10 ಮಂದಿ ಶಂಕಿತ ಅಕ್ರಮ ಬಾಂಗ್ಲಾ ವಲಸಿಗರನ್ನು ವಶಕ್ಕೆ ಪಡೆಯಲಾಗಿದೆ.
ವಶಕ್ಕೆ ಪಡೆದವರು ಅಕ್ರಮವಾಗಿ ಬಾಂಗ್ಲಾದೇಶದಿಂದ ಭಾರತಕ್ಕೆ ಪ್ರವೇಶಿಸಿರುವ ಆರೋಪ ಎದುರಿಸುತ್ತಿದ್ದು ನಕಲಿ ಪಾಸ್‌ಪೋರ್ಟ್, ಆಧಾರ್ ಕಾರ್ಡ್ ಸೇರಿದಂತೆ ವಿವಿಧ ದಾಖಲೆಗಳನ್ನು ಸೃಷ್ಟಿಸಿಕೊಂಡು ಇಲ್ಲಿಗೆ ಬಂದಿರುವ ಶಂಕೆ ವ್ಯಕ್ತವಾಗಿದೆ. ಹೆಚ್ಚಿನವರು ಗುಜರಿ ಗೋದಾಮುಗಳ ಶೆಡ್‌ಗಳಲ್ಲಿ ವಾಸವಿದ್ದು, ಕೆಲವರು ಅಪಾರ್ಟ್‌ಮೆಂಟ್‌ಗಳಲ್ಲಿ ಕೆಲಸ ಮಾಡುತ್ತಿದ್ದರು. ಇನ್ನೂ ಕೆಲವರು ರಾತ್ರಿ ಸಮಯದಲ್ಲಿ ಚಿಂದಿ ಆಯುವ ಕೆಲಸ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಕಾರ್ಯಾಚರಣೆ ವೇಳೆ ವಶಕ್ಕೆ ಪಡೆದ ಎಲ್ಲ ಶಂಕಿತರನ್ನು ದಾಖಲೆಗಳ ಪರಿಶೀಲನೆಗಾಗಿ ಎಫ್‌ಆರ್‌ಆರ್‌ಒ (Foreigners Regional Registration Office) ಮುಂದೆ ಹಾಜರುಪಡಿಸಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಎಲೆಕ್ಟ್ರಾನಿಕ್ ಸಿಟಿ ಉಪವಿಭಾಗದ ಪೊಲೀಸರು ತಿಳಿಸಿದ್ದಾರೆ.
ಅಕ್ರಮವಾಗಿ ನೆಲೆಸಿದ್ದ ಇಬ್ಬರು ನೈಜೀರಿಯಾ ಪ್ರಜೆಗಳು ವಶಕ್ಕೆ
ಬೆಂಗಳೂರು ನಗರ ಜಿಲ್ಲೆ ಆನೇಕಲ್ ತಾಲೂಕಿನ ಹಾರಗದ್ದೆ ಗ್ರಾಮದಲ್ಲಿ ವೀಸಾ ಅವಧಿ ಮುಗಿದಿದ್ದರೂ ಅಕ್ರಮವಾಗಿ ನೆಲೆಸಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆಯಲಾದವರನ್ನು ಡೊವ್ಯಾರೋ(34) ಹಾಗೂ ಮಾನ್ಯುಯಲ್ ನಾಜುಬಿ (32) ಎಂದು ಗುರುತಿಸಲಾಗಿದೆ. ಬಾಂಗ್ಲಾ ವಲಸಿಗರು ವಾಸ ಇರುವ ಬಗ್ಗೆ ದೂರು ಬಂದ ಹಿನ್ನೆಲೆ ಜಿಗಣಿ ಪೊಲೀಸರು ಕಾರ್ಯಾಚರಣೆ ನಡೆಸಿದ ವೇಳೆ ನೈಜೀರಿಯಾ ಪ್ರಜೆಗಳು ಪತ್ತೆಯಾಗಿದ್ದಾರೆ.
ಇದನ್ನೂ ಓದಿ: ಜೈ ಬಾಂಗ್ಲಾ: ದೇಶ ವಿರೋಧಿ ಘೋಷಣೆ ಕೂಗಿದ ಆರೋಪ, ಎಲೆಕ್ಟ್ರಾನಿಕ್ ಸಿಟಿಯಲ್ಲಿ ಮುಸ್ಲಿಂ ಮಹಿಳೆಯ ಬಂಧನ
ಕೋಗಿಲು ಲೇಔಟ್ನಲ್ಲಿ ಬಾಂಗ್ಲಾ ಅಕ್ರಮ ವಲಸಿಗರಿಲ್ಲ: ಪರಮೇಶ್ವರ್
ಕೋಗಿಲು ಲೇಔಟ್ನಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಇರಲಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್ ಸ್ಪಷ್ಟಪಡಿಸಿದ್ದಾರೆ. ಅಲ್ಲಿ ವಾಸವಿದ್ದವರ ಪಟ್ಟಿ ಪಡೆದು ನೋಡಿದ್ದೇವೆ, ಅದರಲ್ಲಿ ಬಾಂಗ್ಲಾದವರಿಲ್ಲ. ಬಾಂಗ್ಲಾದೇಶದವರು ಇದ್ದಾರೆ ಎಂಬುದು ಸತ್ಯಕ್ಕೆ ದೂರವಾಗಿದೆ ಎಂದು ಪರಮೇಶ್ವರ ಹೇಳಿದ್ದಾರೆ.