
ಬೆಂಗಳೂರು, ಅಕ್ಟೋಬರ್ 14: ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣ ರಾಜ್ಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಸದ್ಯ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ಹೆಚ್ಚುವರಿ ಚಾರ್ಜ್ಶೀಟ್ ಸಲ್ಲಿಸಿದ್ದಾರೆ. ಬೆಂಗಳೂರಿನ ಇಡಿ ವಿಶೇಷ ನ್ಯಾಯಾಲಯಕ್ಕೆ ಹೆಚ್ಚುವರಿ ಚಾರ್ಜ್ಶೀಟ್ ಸಲ್ಲಿಸಲಾಗಿದ್ದು, ಆಯೂಬ್ ಸಯ್ಯದ್ ಸೇರಿದಂತೆ ಐವರ ವಿರುದ್ಧ ಆರೋಪಪಟ್ಟಿ ಸಲ್ಲಿಸಲಾಗಿದೆ.
ಡಾ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಹೆಸರಿನಲ್ಲಿ ನಕಲಿ ಬ್ಯಾಂಕ್ ಖಾತೆಗಳನ್ನು ತೆರೆಯುವ ಮೂಲಕ ಅಕ್ರಮವಾಗಿ ಹಣ ವರ್ಗಾವಣೆ ಮಾಡಲಾಗಿದೆ. ನಾಲ್ಕು ನಕಲಿ ಎಫ್ಡಿ ಖಾತೆಗಳನ್ನು ತೆರೆದು, ಅವುಗಳ ಮೂಲಕ ಹಣವನ್ನು ಅಕ್ರಮವಾಗಿ ವರ್ಗಾಯಿಸಲಾಗಿದೆ. ಬಳಿಕ ಈ ಹಣವನ್ನು ಬೇರೆ ಖಾತೆಗಳಿಗೆ ವರ್ಗಾಯಿಸಿ, ನಗದು ರೂಪದಲ್ಲಿ ಹಿಂಪಡೆಯಲಾಗಿದೆ ಎಂದು ಚಾರ್ಜ್ಶೀಟ್ನಲ್ಲಿ ಉಲ್ಲೇಖಿಸಲಾಗಿದೆ.
ಇದನ್ನೂ ಓದಿ: ಅಂಬೇಡ್ಕರ್ ಅಭಿವೃದ್ಧಿ ನಿಗಮದಲ್ಲಿ ಭಾರಿ ಅವ್ಯವಹಾರ; ಲೋಕಾಯುಕ್ತಕ್ಕೆ ಸಿಕ್ತು ದಾಖಲೆ
ಈ ರೀತಿಯಾಗಿ ಒಟ್ಟು 14.95 ಕೋಟಿ ರೂ ದುರುಪಯೋಗಪಡಿಸಿಕೊಳ್ಳಲಾಗಿದೆ ಎಂದು ಇಡಿ ಅಧಿಕಾರಿಗಳು ಆರೋಪಪಟ್ಟಿಯಲ್ಲಿ ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದ ಇಡಿ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
ED, Bangalore has filed Supplementary Prosecution Complaint before the Hon’ble Special Court (PMLA), Bangalore, on 05.10.2026 against 05 accused persons involving Ayub Sayyed & others in a matter related to siphoning off of funds pertaining to Dr. B. R. Ambedkar Development Corporation Ltd. by using forged documents and impersonation.
— ED (@dir_ed) October 14, 2026
ಇನ್ನು ಇದಕ್ಕೂ ಮೊದಲು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ 15 ಆರೋಪಿಗಳ ವಿರುದ್ಧ ಇಡಿ ಅಧಿಕಾರಿಗಳು ಚಾರ್ಜ್ಶೀಟ್ ಸಲ್ಲಿಸಿದ್ದರು. ಆರೋಪಿಗಳಿಗೆ ಸೇರಿದ ಸುಮಾರು 6.02 ಕೋಟಿ ರೂ ಮೌಲ್ಯದ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳುವಂತೆ ಕೋರಲಾಗಿತ್ತು. ಅಲ್ಲದೆ, 2026ರ ಜುಲೈ 22ರಂದು ಆರೋಪಿಯೊಬ್ಬರಿಗೆ ಸೇರಿದ 24 ಲಕ್ಷ ರೂ ಮೌಲ್ಯದ ಸ್ಥಿರ ಆಸ್ತಿಯನ್ನು ಜಪ್ತಿ ಮಾಡಲಾಗಿತ್ತು. ಇದೀಗ ಹೆಚ್ಚುವರಿಯಾಗಿ ಐವರ ವಿರುದ್ಧ ಚಾರ್ಜ್ಶೀಟ್ ಸಲ್ಲಿಸುವ ಮೂಲಕ ಪ್ರಕರಣದ ತನಿಖೆಯನ್ನು ಮುಂದುವರಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.