Bangalore Rain ಬೆಂಗಳೂರಿನಲ್ಲಿ ಭಾರೀ ಮಳೆಗೆ ಜನರ ಪರದಾಟ, ಸಂಚಾರ ಅಸ್ತವ್ಯಸ್ತ ಇಲ್ಲಿದೆ ವಿಡಿಯೊ
ರಿಚ್ಮಂಡ್ ಟೌನ್, ಕಾರ್ಪೊರೇಷನ್, ಕೆಆರ್ ಮಾರುಕಟ್ಟೆ, ಮೆಜೆಸ್ಟಿಕ್, ಜಯನಗರ, ಶಾಂತಿ ನಗರ, ವಿಲ್ಸನ್ ಗಾರ್ಡನ್, ಮಲ್ಲೇಶ್ವರಂನಲ್ಲಿ ಭಾರೀ ಮಳೆಯಾಗಿದೆ
ಬೆಂಗಳೂರು: ಬೆಂಗಳೂರು ನಗರದಲ್ಲಿಂದು (Bangalore) ಭಾರೀ ಮಳೆಯಾಗಿದ್ದು(Rain), ಜನ ಸಂಚಾರಕ್ಕೆ ಅಡಚಣೆಯಾಗಿದೆ. ರಿಚ್ಮಂಡ್ ಟೌನ್, ಕಾರ್ಪೊರೇಷನ್, ಕೆಆರ್ ಮಾರುಕಟ್ಟೆ, ಮೆಜೆಸ್ಟಿಕ್, ಜಯನಗರ, ಶಾಂತಿ ನಗರ, ವಿಲ್ಸನ್ ಗಾರ್ಡನ್, ಮಲ್ಲೇಶ್ವರಂನಲ್ಲಿ ಭಾರೀ ಮಳೆಯಾಗಿದೆ .ಕೆಲವು ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳು ಜಲಾವೃತವಾಗಿದ್ದು,ವಾಹನ ಸವಾರರು ಸಂಕಷ್ಟಕ್ಕೀಡಾಗಿದ್ದಾರೆ.
ಬೆಂಗಳೂರು ನಗರದಲ್ಲಿ ಇಂದು (ಸೋಮವಾರದಿಂದ) ಅಕ್ಟೋಬರ್ 12 ಬುಧವಾರದವರೆಗೆ ಭಾರೀ ಮಳೆಯಾಗಲಿದೆ. ಈ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ (IMD) ನಗರ ಹಾಗೂ ಕರ್ನಾಟಕದ ಇತರ ಭಾಗಗಳಿಗೆ ಬುಧವಾರದವರೆಗೆ ಹಳದಿ ಎಚ್ಚರಿಕೆಯನ್ನು ನೀಡಿದೆ. ಸೋಮವಾರದಂದು ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಚಿಕ್ಕಮಗಳೂರು, ತುಮಕೂರು, ಮಂಡ್ಯ, ರಾಮನಗರ ಮತ್ತು ಚಾಮರಾಜನಗರ ಜಿಲ್ಲೆಯಲ್ಲಿ ಹಳದಿ ಎಚ್ಚರಿಕೆ ನೀಡಲಾಗಿದೆ.
ಅಕ್ಟೋಬರ್ 11, ಮಂಗಳವಾರ, ಉತ್ತರ ಜಿಲ್ಲೆಗಳಲ್ಲಿಯೂ ಮಳೆಯಾಗುವ ನಿರೀಕ್ಷೆಯಿದೆ, ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬೆಳಗಾವಿ, ಬಳ್ಳಾರಿ, ಚಿತ್ರದುರ್ಗ, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಬುಧವಾರ ಗುಲ್ಬರ್ಗ, ಯಾದಗಿರಿ, ರಾಯಚೂರು, ಕೊಪ್ಪಳ, ಗದಗ, ಬೆಳಗಾವಿ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆಗಳಲ್ಲಿ ಹಳದಿ ಎಚ್ಚರಿಕೆ ನೀಡಲಾಗಿದೆ.
ಐಎಂಡಿ ಬುಲೆಟಿನ್ ಪ್ರಕಾರ, ಅಕ್ಟೋಬರ್ 5 ಕ್ಕೆ ಕೊನೆಗೊಂಡ ವಾರದಲ್ಲಿ ಉತ್ತರ ಕನ್ನಡ, ಶಿವಮೊಗ್ಗ, ಬೀದರ್, ಕಲಬುರ್ಗಿ, ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ. ಅದೇದೇ ವೇಳೆ, ಗದಗ, ಕೊಪ್ಪಳ, ರಾಯಚೂರು, ಬಳ್ಳಾರಿ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಿದೆ ಎಂದು ಬುಲೆಟಿನ್ ತಿಳಿಸಿದೆ.
ಬೆಂಗಳೂರಿನಲ್ಲಿ ಕಳೆದ ಕೆಲವು ವಾರಗಳಿಂದ ಮಳೆಯ ವಾತಾವರಣವಿದ್ದು, ಚಳಿ ಆವರಿಸಿದೆ. ಮುಂದಿನ ಕೆಲವು ದಿನಗಳಲ್ಲಿ ಬೆಂಗಳೂರು ಮೋಡ ಕವಿದ ವಾತಾವರಣವನ್ನು ಕಾಣಲಿದ್ದು, ಸಾಧಾರಣ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಐಎಂಡಿ ತಿಳಿಸಿದೆ.
Published On - 7:01 pm, Mon, 10 October 22