ಬೆಂಗಳೂರು: ರಾಜ್ಯ ರಾಜ್ಯಧಾನಿಯಲ್ಲಿ ಇಂದು ನಗರದ ಹಲವೆಡೆ ಗುಡುಗು ಸಹಿತ ಭಾರಿ ಮಳೆ ಶುರುವಾಗಿದ್ದು, ಶಾಂತಿನಗರ, ಕಾರ್ಪೋರೇಷನ್, ಮೈಸೂರು ರೋಡ್, ವಿಧಾನಸೌಧ, ಶಿವಾಜಿನಗರ, ಕಾಡುಗೋಡಿ, ಹೆಬ್ಬಾಳ, ಕೋರಮಂಗಲ ಸೇರಿದಂತೆ ಹಲವೆಡೆ ಧಾರಾಕಾರ ಮಳೆ ಆಗುತ್ತಿದ್ದು, ಮಳೆಯಿಂದ ಬೈಕ್ ಸವಾರರು ಮತ್ತು ರಸ್ತೆ ಬದಿ ವ್ಯಾಪಾರಿಗಳು ಪರದಾಡುವಂತ್ತಾಗಿದೆ. ಹಲವೆಡೆ ಮಳೆಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿ ಸವಾರರು ಪರದಾಡುತ್ತಿದ್ದಾರೆ. ಮಳೆಯಿಂದಾಗಿ ರಸ್ತೆಗಳು ಜಾಲಾವೃತಗೊಂಡಿದ್ದು, ಬೈಕ್ ಸವಾರರು ನೀರು ತುಂಬಿದ ರಸ್ತೆಗಳಲ್ಲಿ ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ. ಸಂಜೆಯ ಮಳೆಯಿಂದಾಗಿ ದ್ವಿಚಕ್ರ ವಾಹನ ಸಾವರಿಗೆ ಸಮಸ್ಯೆಯಾಗಿದ್ದು, ಗಾಳಿ ಸಹಿತ ಮಳೆಯಿಂದಾಗಿ ರಸ್ತೆಗಳಲ್ಲಿ ನೀರು ಹರಿಯುತ್ತಿದೆ.
ಕರ್ನಾಟಕದಾದ್ಯಂತ ಇಂದು ಗುಡುಗು ಸಹಿತ ಮಳೆ ಸಾಧ್ಯತೆ; ಮೇ 5ರಿಂದ ಇನ್ನೂ ಹೆಚ್ಚಲಿದೆ ವರುಣನ ಅಬ್ಬರ
ಕರ್ನಾಟಕದಲ್ಲಿ ಮಳೆಯ (Rain in Karnataka) ಆರ್ಭಟ ಹೆಚ್ಚಾಗುತ್ತಿದೆ. ಮುಂದಿನ ತಿಂಗಳಿನಿಂದ ಮಾನ್ಸೂನ್ (Monsoon) ಶುರುವಾಗುವ ಹಿನ್ನೆಲೆಯಲ್ಲಿ ಈಗಾಗಲೇ ಬೆಂಗಳೂರು, ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪರಿಣಾಮ ಕರ್ನಾಟಕದ ಹಲವೆಡೆ 2 ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಇನ್ನೆರಡು ದಿನಗಳ ಕಾಲ ರಾಜ್ಯಾದ್ಯಂತ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ಕೊಟ್ಟಿದೆ. ಕರ್ನಾಟಕದಾದ್ಯಂತ ಹಲವೆಡೆ ಇಂದು ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
ಮೇ 5ರ ನಂತರ ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವಡೆ ಸಾಧಾರಣ ಮಳೆಯಾದರೆ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ಕೊಡಗು, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರದಲ್ಲಿ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ. ಮೇ 5ರಿಂದ ಕರಾವಳಿ ಹಾಗೂ ಉತ್ತರ ಒಳನಾಡಿಗಿಂತ ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಹೆಚ್ಚಾಗಲಿದೆ. ಭಾನುವಾರ ಬೆಂಗಳೂರಿನಲ್ಲಿ ಸುರಿದ ಆಲಿಕಲ್ಲು, ಗುಡುಗು, ಮಿಂಚು ಸಹಿತ ಮಳೆಗೆ ಜನಜೀವನ ಅಸ್ತವ್ಯಸ್ತವಾಗಿತ್ತು. ಮೇ 5ರಿಂದ ಬೆಂಗಳೂರಿನಲ್ಲಿ ಮತ್ತೆ ಮಳೆ ಹೆಚ್ಚಾಗುವ ನಿರೀಕ್ಷೆಯಿದೆ.
ಕರ್ನಾಟಕ ಮಾತ್ರವಲ್ಲದೆ ಇಂದು ಅಸ್ಸಾಂ ಮತ್ತು ಮೇಘಾಲಯ ಮತ್ತು ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಅರುಣಾಚಲ ಪ್ರದೇಶ, ಅಸ್ಸಾಂ ಮತ್ತು ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ಮತ್ತು ಪಶ್ಚಿಮ ಬಂಗಾಳ ಮತ್ತು ಸಿಕ್ಕಿಂನಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ನಲ್ಲಿ ಗುಡುಗು ಸಹಿತ ವ್ಯಾಪಕ ಮಳೆ ಅಥವಾ ಹಿಮ ಬೀಳುವ ಸಾಧ್ಯತೆ ಇದೆ
ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 7:00 pm, Tue, 3 May 22