Bangalore Weather: ಬೆಂಗಳೂರಿನಲ್ಲಿ ಮೈ ಕೊರೆವ ಚಳಿಯ ಜೊತೆ ತುಂತುರು ಮಳೆ; 10 ವರ್ಷದಲ್ಲೇ ಕಡಿಮೆ ತಾಪಮಾನ ದಾಖಲು
Bengaluru Rain: ಇನ್ನೂ 3 ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆ ಸುರಿಯಲಿದೆ. ಬೆಂಗಳೂರಿನಲ್ಲಿ 13.9 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು, ಕಳೆದ 10 ವರ್ಷಗಳಲ್ಲೇ ನವೆಂಬರ್ನಲ್ಲಿ ದಾಖಲಾದ ಅತಿ ಕಡಿಮೆ ತಾಪಮಾನ ಇದಾಗಿದೆ.
ಬೆಂಗಳೂರು: ಬೆಂಗಳೂರಿನಲ್ಲಿ ಇಂದು ಮುಂಜಾನೆಯಿಂದಲೇ ತುಂತುರು ಮಳೆ (Bengaluru Rain) ಶುರುವಾಗಿದ್ದು, ಅದರ ಜೊತೆಗೆ ತುಂತುರು ಮಳೆ ಹಾಗೂ ಮಂಜು ಕವಿದ ವಾತಾವರಣವೂ (Bangalore Weather) ನಿರ್ಮಾಣವಾಗಿತ್ತು. ಕಳೆದೊಂದು ವಾರದಿಂದ ಬೆಂಗಳೂರಿನಲ್ಲಿ ಚಳಿ (Bengaluru Weather Today) ವಿಪರೀತ ಹೆಚ್ಚಾಗಿದೆ. ಬೆಳಗ್ಗೆ, ರಾತ್ರಿ ಮಾತ್ರವಲ್ಲದೆ ಮಧ್ಯಾಹ್ನದ ವೇಳೆಯಲ್ಲೂ ಚಳಿ ಇರುತ್ತದೆ. ಇದರ ಜೊತೆಗೆ ಇನ್ನೂ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆ ಸುರಿಯುವುದರಿಂದ ತಾಪಮಾನ ಇನ್ನಷ್ಟು ಕುಸಿಯುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ 13.9 ಡಿಗ್ರಿ ಸೆಲ್ಸಿಯಸ್ ತಾಪಮಾನವಿದ್ದು, ಕಳೆದ 10 ವರ್ಷಗಳಲ್ಲೇ ನವೆಂಬರ್ನಲ್ಲಿ ದಾಖಲಾದ ಅತಿ ಕಡಿಮೆ ತಾಪಮಾನ ಇದಾಗಿದೆ.
ಈ ಹಿಂದೆ 2012ರಲ್ಲಿ ಬೆಂಗಳೂರಿನಲ್ಲಿ 13.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಅದಾದ ಬಳಿಕ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನವೆಂಬರ್ ತಿಂಗಳಲ್ಲಿ 13.9 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ತಿಳಿಸಿದೆ.
ಇದನ್ನೂ ಓದಿ: Karnataka Rain: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ; ಬೆಂಗಳೂರು, ಕರಾವಳಿ ಸೇರಿ ಹಲವೆಡೆ ನಾಳೆಯಿಂದ ಭಾರೀ ಮಳೆ
ಉದ್ಯಾನನಗರಿ ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25.2 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ 13.9 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಕನಿಷ್ಠ ತಾಪಮಾನ 12.5 ಡಿಗ್ರಿ ಸೆಲ್ಸಿಯಸ್‌ನಷ್ಟಿದ್ದರೆ, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 14.7 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. 2012ರ ನವೆಂಬರ್ 21ರಂದು ಬೆಂಗಳೂರಿನಲ್ಲಿ 13.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು. ಅದಾದ ಬಳಿಕ ನವೆಂಬರ್ ತಿಂಗಳಲ್ಲಿ ದಾಖಲಾದ ಅತಿ ಕಡಿಮೆ ತಾಪಮಾನ ಇದಾಗಿದೆ. 1967ರ ನವೆಂಬರ್ 15ರಂದು ಬೆಂಗಳೂರಿನಲ್ಲಿ 9.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ ಉಂಟಾಗುವ ಮೂಲಕ ಸಾರ್ವಕಾಲಿಕ ದಾಖಲೆ ನಿರ್ಮಾಣವಾಗಿತ್ತು.
At 13.9c, Bengaluru City IMD recorded the lowest November minimum since 19th November 2012 today. Minimum temperatures are likely to start increasing from tonight as some cloudy weather creeps in (again).
— Bengaluru Weather (@BngWeather) November 21, 2022
ಒಂದೆಡೆ ಚಳಿಯಾದರೆ ಇನ್ನೊಂದೆಡೆ ನಾಳೆಯಿಂದ ಬೆಂಗಳೂರಿನಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದರಿಂದ ಮತ್ತೊಮ್ಮೆ ಸಿಲಿಕಾನ್ ಸಿಟಿಯ ಜನರು ಮಳೆ ಆರ್ಭಟಕ್ಕೆ ಸಾಕ್ಷಿಯಾಗಲಿದ್ದಾರೆ. ಬೆಂಗಳೂರಿನಲ್ಲಿ ನವೆಂಬರ್ 24 ರವರೆಗೆ ತುಂತುರು ಮಳೆ ಮುಂದುವರಿಯುವ ನಿರೀಕ್ಷೆಯಿದೆ. ಈ ದಿನಗಳಲ್ಲಿ ಕನಿಷ್ಠ ತಾಪಮಾನ 18ರಿಂದ 19 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 25ರಿಂದ 26 ಡಿಗ್ರಿ ಸೆಲ್ಸಿಯಸ್ ಇರುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಇದನ್ನೂ ಓದಿ: Karnataka Rain: ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ಮತ್ತೆ ಮಳೆಯ ಅಬ್ಬರ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಇಂದಿನಿಂದ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು ಮಾತ್ರವಲ್ಲದೆ ಕರ್ನಾಟಕದ ಕರಾವಳಿಯ ಬಹುತೇಕ ಕಡೆ, ದಕ್ಷಿಣ ಒಳನಾಡಿನ ಅನೇಕ ಕಡೆ, ಉತ್ತರ ಒಳನಾಡಿನ ಕೆಲವು ಭಾಗಗಳಲ್ಲಿ ಇಂದಿನಿಂದ ನ. 24ರವರೆಗೆ ಭಾರೀ ಮಳೆ ಸುರಿಯುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮಂಡ್ಯ, ರಾಮನಗರ, ಮೈಸೂರು, ತುಮಕೂರು, ವಿಜಯಪುರ ಹಾಗೂ ಹಾವೇರಿ ಸೇರಿ ಇತರ ಜಿಲ್ಲೆಗಳಲ್ಲಿ ಇಂದಿನಿಂದ 3 ದಿನ ವ್ಯಾಪಕ ಮಳೆಯ ಮುನ್ಸೂಚನೆಯಿದೆ.