ಆಸ್ತಿ ತೆರಿಗೆ ಹೆಚ್ಚಳದ ಬಗ್ಗೆ ಸ್ಪಷ್ಟನೆ ನೀಡಿದ ಬಿಬಿಎಂಪಿ, 5% ರಿಯಾಯಿತಿ ಅವಧಿ ವಿಸ್ತರಣೆ
ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್, ಹಾಲು ಸೇರಿದಂತೆ ಇತರೆ ಬೆಲೆ ಏರಿಕೆ ಮಧ್ಯ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಕುರಿತು ಸುದ್ದಿ ಹರಿದಾಡುತ್ತಿದೆ. ಆದ್ರೆ, ಇದೀಗ ಇದಕ್ಕೆ ಬಿಬಿಎಂಪಿ ಸ್ಪಷ್ಟನೆ ನೀಡಿದೆ. ಈ ಮೂಲಕ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ಗೊಂದಲಗಳಿಗೆ ತೆರೆ ಎಳೆದಿದ್ದಾರೆ.
ಬೆಂಗಳೂರು, (ಜುಲೈ 03): ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಹೆಚ್ಚಳ ಬಗ್ಗೆ ಬಿಬಿಎಂಪಿ ಸ್ಪಷ್ಟೀಕರಣ ನೀಡಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಕುರಿತು ಇತ್ತೀಚೆಗೆ ಕೆಲ ಮಾಧ್ಯಮಗಳಲ್ಲಿ ವರದಿಯಾಗಿದ್ದು, ಆಸ್ತಿ ತೆರಿಗೆ ಹೆಚ್ಚಳದ ಸಂಬಂಧ ಯಾವುದೇ ಪ್ರಸ್ತಾವನೆಯಾಗಲಿ, ಚಿಂತನೆಯಾಗಲಿ ಇರುವುದಿಲ್ಲವೆಂದು ಸ್ಪಷ್ಟಪಡಿಸಿದೆ. ಪಾಲಿಕೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ಹೆಚ್ಚಳ ವಿಚಾರವಾಗಿ ಯಾವುದೇ ಪ್ರಸ್ತಾವನೆ ಇರುವುದಿಲ್ಲ. ಈ ರೀತಿಯ ಊಹಾಪೋಹಗಳಿಗೆ ಯಾರೂ ಕಿವಿಗೊಡಬಾರದು ಎಂದು ಬಿಬಿಎಂಪಿ ಕಂದಾಯ ವಿಭಾಗದ ವಿಶೇಷ ಆಯುಕ್ತ ಮುನೀಶ್ ಮೌದ್ಗಿಲ್ ರವರು ನಾಗರೀಕರಲ್ಲಿ ಮನವಿ ಮಾಡಿದ್ದಾರೆ. ಈ ಮೂಲಕ ಹರಿದಾಡುತ್ತಿರುವ ಸುಳ್ಳು ಸುದ್ದಿಗೆ ಸ್ಪಷ್ಟನೆ ನೀಡಿದ್ದಾರೆ.
ಪೆಟ್ರೋಲ್, ಡೀಸೆಲ್ ಮತ್ತು ಮದ್ಯದ ಬೆಲೆ ಏರಿಕೆ ಬೆನ್ನಲ್ಲೇ ರಾಜ್ಯ ಸರ್ಕಾರ ಮತ್ತೊಮ್ಮೆ ಬೆಂಗಳೂರಿನಲ್ಲಿ ಆಸ್ತಿ ತೆರಿಗೆ ಹೆಚ್ಚಳದ ಬಗ್ಗೆ ಚರ್ಚೆ ನಡೆಸುತ್ತಿದೆ ಎನ್ನುವ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಇದಕ್ಕೆ ಬಿಬಿಎಂಪಿ ಸ್ಪಷ್ಟನೆ ನೀಡಿದ್ದು, ತೆರಿಗೆ ಹೆಚ್ಚಳದ ಕುರಿತು ಊಹಾವೋಹಗಳಿಗೆ ಕಿವಿಗೊಡದಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದೆ.
ಇದನ್ನೂ ಓದಿ: ಬೆಂಗಳೂರು ರಸ್ತೆಗುಂಡಿಗಳಿಗೆ ಕೊನೆಗೂ ಮುಕ್ತಿ? 150 ಕಿಮೀ ವೈಟ್ ಟಾಪಿಂಗ್ ಆರಂಭಿಸಲು ಬಿಬಿಎಂಪಿ ಸಜ್ಜು
ಬೆಂಗಳೂರು ರಾಜ್ಯ ಸರ್ಕಾರಕ್ಕೆ ಪ್ರಮುಖ ಆದಾಯ ಮೂಲಗಳಲ್ಲಿ ಒಂದಾಗಿದ್ದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(BBMP) ವ್ಯಾಪ್ತಿಯಲ್ಲಿ ಸುಮಾರು 18 ಲಕ್ಷ ಆಸ್ತಿಗಳಿವೆ. ಬಿಬಿಎಂಪಿ ದಾಖಲೆಗಳ ಪ್ರಕಾರ ಜುಲೈ 1ರವರೆಗೆ ಪಾಲಿಕೆ ಈ ಹಣಕಾಸು ವರ್ಷದಲ್ಲಿ 1654.47 ಕೋಟಿ ರೂ. ಆಸ್ತಿ ತೆರಿಗೆ ಸಂಗ್ರಹಿಸಿದೆ. 2023-24ರ ಹಣಕಾಸು ವರ್ಷದಲ್ಲಿ ಬಿಬಿಎಂಪಿ 2293.81 ಕೋಟಿ ರೂ. ತೆರಿಗೆ ಸಂಗ್ರಹಿಸಿತ್ತು. ಏಪ್ರಿಲ್ ನಿಂದ ಜೂನ್ ವರೆಗೆ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ತೆರಿಗೆ ಪಾವತಿಯಲ್ಲಿ ಶೇ. 5ರಷ್ಟು ರಿಯಾಯಿತಿಯನ್ನು ಘೋಷಿಸಲಾಗಿತ್ತು ಮತ್ತು ಅದನ್ನು ಜುಲೈ ಅಂತ್ಯದ ವರೆಗೂ ವಿಸ್ತರಿಸಲಾಗಿದೆ.
ಆಸ್ತಿ ತೆರಿಗೆಯಲ್ಲಿ 5% ರಿಯಾಯಿತಿ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಸೇರಿ ಕರ್ನಾಟಕದ ಮಹಾನಗರ ಪಾಲಿಕೆಗಳಲ್ಲಿ ತೆರಿಗೆ ಸಂಗ್ರಹ ಪ್ರಮಾಣ ಹೆಚ್ಚಿಸುವ ಉದ್ದೇಶದಿಂದ, ಏಪ್ರಿಲ್ ತಿಂಗಳಲ್ಲಿ ತೆರಿಗೆ ಪಾವತಿಸುವ ಆಸ್ತಿ ಮಾಲೀಕರಿಗೆ ಶೇ. 5ರಷ್ಟು ರಿಯಾಯಿತಿಯನ್ನು ರಾಜ್ಯ ಸರಕಾರ ನೀಡುತ್ತಾ ಬಂದಿದೆ. ಈ ಬಾರಿ ಲೋಕಸಭೆ ಚುನಾವಣೆ, ಇತರ ಕಾರಣಗಳಿಂದ ಈ ದಿನಾಂಕವನ್ನು ಜುಲೈ 31ರವರೆಗೆ ವಿಸ್ತರಿಸಲಾಗಿದೆ.
2024-25ನೇ ಸಾಲಿಗೆ ಆಸ್ತಿ ತೆರಿಗೆಯನ್ನು ಮುಂಗಡವಾಗಿ ಪಾವತಿಸುವವರಿಗೆ ಈ ಶೇ. 5ರಷ್ಟು ರಿಯಾಯಿತಿ ಸಿಗಲಿದೆ. ಬಿಬಿಎಂಪಿ, ದಾವಣಗೆರೆ, ಮಂಗಳೂರು, ಹುಬ್ಬಳ್ಳಿ-ಧಾರವಾಡ, ತುಮಕೂರು, ಕಲಬುರಗಿ, ಬೆಳಗಾವಿ, ಮೈಸೂರು, ಬಳ್ಳಾರಿ ಸೇರಿದಂತೆ ರಾಜ್ಯದ ಎಲ್ಲಾ ಪಾಲಿಕೆ ವ್ಯಾಪ್ತಿಗಳಲ್ಲೂ ಈ ತೆರಿಗೆ ರಿಯಾಯಿತಿ ದೊರೆಯಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 5:54 pm, Wed, 3 July 24