ಬೆಂಗಳೂರು, ಆಗಸ್ಟ್ 21: ಬೆಂಗಳೂರು ನಗರದಲ್ಲಿ ಅಳವಡಿಸಿರುವ ಅನಧಿಕೃತ ಬ್ಯಾನರ್‌ಗಳಿಗೆ ದಂಡ ವಿಧಿಸುವ ಕಾರ್ಯವನ್ನು ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ (BBMP) ಮುಂದುವರಿಸಿದ್ದು, ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಳವಡಿಸಿದ್ದ ಅನಧಿಕೃತ ಬ್ಯಾನರ್ ಮೇಲೆ ದಂಡ 50,000 ರೂ. ದಂಡ ವಿಧಿಸಿದೆ. ಬೆಂಗಳೂರಿನ ವಸಂತನಗರದ ಮಿಲ್ಲರ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಎದುರು ಬ್ಯಾನರ್ ಹಾಕಲಾಗಿತ್ತು. ಇದಕ್ಕಾಗಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ದಂಡ ವಿಧಿಸಲಾಗಿದೆ.
ಕಾಂಗ್ರೆಸ್ ಸಮಿತಿಯ ಹಿಂದುಳಿದ ವರ್ಗಗಳ ವಿಭಾಗದ ರಾಜ್ಯಾಧ್ಯಕ್ಷರು, ಜಿಲ್ಲಾಧ್ಯಕ್ಷರು, ಹಾಗೂ ರಾಜ್ಯದ ಎಲ್ಲಾ ಪಧಾಧಿಕಾರಿಗಳು ಒಳಗೊಂಡ ಬ್ಯಾನರ್ಗೆ ದಂಡ ಹಾಕಲಾಗಿದೆ. ಮಾಜಿ ಮುಖ್ಯಮಂತ್ರಿ ದಿವಂಗತ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಕಚೇರಿಯ ಮುಂಭಾಗದಲ್ಲಿ ಅನಧಿಕೃತವಾಗಿ ಬ್ಯಾನರ್ ಅಳವಡಿಸಲಾಗಿತ್ತು.
ಬೆಂಗಳೂರು ನಗರದಲ್ಲಿ ಅಳವಡಿಸಿರುವ ಅನಧಿಕೃತ ಫ್ಲೆಕ್ಸ್, ಬ್ಯಾನರ್ಗಳನ್ನು ತೆರವುಗೊಳಿಸುವ ವಿಚಾರವಾಗಿ ಇತ್ತೀಚೆಗಷ್ಟೇ ಬಿಬಿಎಂಪಿಯನ್ನು ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಅದರ ಬೆನ್ನಲ್ಲೇ, ನಗರದಲ್ಲಿ ಅನಧಿಕೃತ ಫ್ಲೆಕ್ಸ್, ಬ್ಯಾನರ್ ಅಳವಡಿಸುವಂತಿಲ್ಲ ಎಂದು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಖಡಕ್ ಸೂಚನೆ ನೀಡಿದ್ದರು. ಇದಾದ ನಂತರವೂ ಹೇಳಿಕೊಳ್ಳುವ ಮಟ್ಟಿನ ಕ್ರಮ ಕೈಗೊಂಡಿರಲಿಲ್ಲ. ಇದರಿಂದ ಸಿಟ್ಟಿಗೆದ್ದಿದ್ದ ಹೈಕೋರ್ಟ್, ಸರ್ಕಾರಕ್ಕೆ ಛೀಮಾರಿ ಹಾಕಿತ್ತು.
ಇದನ್ನೂ ಓದಿ: ಹೈಕೋರ್ಟ್ ಛೀಮಾರಿ ಹಾಕಿದ ಬಳಿಕ ಎಚ್ಚೆತ್ತ ಬಿಬಿಎಂಪಿ, 59,000 ಫ್ಲೆಕ್ಸ್ ಬ್ಯಾನರ್ ತೆರವು
ಹೈಕೋರ್ಟ್ ತರಾಟೆಗೆ ತೆಗೆದುಕೊಂಡ ನಂತರ ಎಚ್ಚತ್ತಿದ್ದ ಬಿಬಿಎಂಪಿ ನಗರದಲ್ಲಿ ಬರೋಬ್ಬರಿ 59,000 ಕ್ಕೂ ಹೆಚ್ಚು ಫ್ಲೆಕ್ಸ್, ಬ್ಯಾನರ್ ಮತ್ತು ಹೋರ್ಡಿಂಗ್‌ಗಳನ್ನು ತೆರವುಗೊಳಿಸಿತ್ತು. ನ್ಯಾಯಾಲಯದ ನಿರ್ದೇಶನಗಳನ್ನು ಜಾರಿಗೆ ತರಲು ಬಿಬಿಎಂಪಿಯು ನಗರದಾದ್ಯಂತ ಫ್ಲೆಕ್ಸ್ ಬ್ಯಾನರ್‌ಗಳಿಗೆ ಅವಕಾಶ ನೀಡುವುದಿಲ್ಲ ಮತ್ತು ಉಲ್ಲಂಘಿಸುವವರಿಗೆ 50,000 ರೂ. ದಂಡ ವಿಧಿಸಲಾಗುವುದು ಎಂದು ಸ್ವತಃ ಕೆಪಿಸಿಸಿ ಅಧ್ಯಕ್ಷರೂ ಆಗಿದ್ದ ಡಿಕೆ ಶಿವಕುಮಾರ್ ಹೇಳಿದ್ದರು. ಇದೀಗ ಕೆಪಿಸಿಸಿ ಕಚೇರಿ ಎದುರು ಕಾಂಗ್ರೆಸ್ ಪಕ್ಷದ ವತಿಯಿಂದ ಅಳವಡಿಸಿದ್ದ ಬ್ಯಾನರ್ಗೇ ದಂಡ ವಿಧಿಸಲಾಗಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 7:38 pm, Mon, 21 August 23