ಬೆಂಗಳೂರು, ಡಿಸೆಂಬರ್ 9: ಬೆಂಗಳೂರು ನಗರದ ಬನಶಂಕರಿ ಮತ್ತು ಕನಕಪುರ ಕಡೆಯ ನೈಸ್ ರಸ್ತೆ ಮಧ್ಯೆ ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದೊಂದಿಗೆ ಎಕ್ಸ್‌ಪ್ರೆಸ್ ವೇ ಮಾದರಿಯಲ್ಲಿ ನೂತನ ಮೇಲ್ಸೇತುವೆ ನಿರ್ಮಾಣಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಂದಾಗಿದೆ. ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸೂಚನೆ ಮೇರೆಗೆ ಫ್ಲೈಓವರ್ ನಿರ್ಮಾಣಕ್ಕೆ ವಿಸ್ತೃತ ಯೋಜನಾ ವರದಿ (ಡಿಪಿಆರ್) ಸಿದ್ಧಪಡಿಸಲಾಗುವುದು ಎಂದು ಬಿಬಿಎಂಪಿ ಎಂಜಿನಿಯರ್ಗಳು ತಿಳಿಸಿರುವುದಾಗಿ ವರದಿಯಾಗಿದೆ.
ಉದ್ದೇಶಿತ ಫ್ಲೈಓವರ್, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತವರಾದ ಕನಕಪುರ ಕಡೆಗೆ 10 ಕಿಲೋ ಮೀಟರ್ ಇರಲಿದ್ದು, ಯೋಜನೆಗೆ 1,200 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.
ಉದ್ದೇಶಿತ ಫ್ಲೈಓವರ್ ಬಗ್ಗೆ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ಗೆ ಪತ್ರ ಬರೆದಿರುವ ಡಿಸಿಎಂ ಡಿಕೆ ಶಿವಕುಮಾರ್, ಬೆಂಗಳೂರು ನಗರಕ್ಕೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಗಳಲ್ಲಿ ಕನಕಪುರ ರಸ್ತೆಯೂ ಒಂದು. ಈ ರಸ್ತೆಯಲ್ಲಿ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಮೆಟ್ರೊ ರೈಲು ಈ ರಸ್ತೆಯಲ್ಲಿ ಹಾದು ಹೋಗುವುದರಿಂದ ಗ್ರೇಡ್ ಸಪರೇಟರ್ ನಿರ್ಮಿಸುವುದು ಕಷ್ಟ. ಹಾಗಾಗಿ ಪರ್ಯಾಯ ವ್ಯವಸ್ಥೆ ಮಾಡಬೇಕಿದೆ. ಬೆಂಗಳೂರು ಜಲ ಮಂಡಳಿಯ ಪೈಪ್‌ಲೈನ್ ರಸ್ತೆಯಲ್ಲಿ ಮೇಲ್ಸೇತುವೆ ನಿರ್ಮಿಸುವ ಮೂಲಕ ಕನಕಪುರ ರಸ್ತೆಯಲ್ಲಿನ ಒತ್ತಡವನ್ನು ಕಡಿಮೆ ಮಾಡಬಹುದು. ಈ ಬಗ್ಗೆ ತಕ್ಷಣ ಕ್ರಮ ಕೈಗೊಂಡು ಕಾರ್ಯಸಾಧ್ಯತಾ ವರದಿ ಮತ್ತು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ಮುಖ್ಯ ಎಂಜಿನಿಯರ್ (ಬಿಬಿಎಂಪಿ ಯೋಜನಾ ಕೇಂದ್ರ) ಅವರಿಗೆ ಸೂಚಿಸಿದ್ದೇನೆ ಎಂದು ಉಲ್ಲೇಖಿಸಿದ್ದಾರೆ.
ಇದನ್ನೂ ಓದಿ: Bengaluru-Chennai Expressway: ಬೆಂಗಳೂರು ಚೆನ್ನೈ ಎಕ್ಸ್‌ಪ್ರೆಸ್ ವೇ ಕರ್ನಾಟಕದಲ್ಲಿ ಸಾರ್ವಜನಿಕ ಸಂಚಾರಕ್ಕೆ ಮುಕ್ತ
ಡಿಸಿಎಂ ನಿರ್ದೇಶನದ ಮೇರೆಗೆ ಪ್ರಸ್ತಾವಿತ ಮೇಲ್ಸೇತುವೆಗೆ ಡಿಪಿಆರ್ ತಯಾರಿಸಲು ಟೆಂಡರ್ ಕರೆಯಲಾಗುವುದು ಎಂದು ಬಿಬಿಎಂಪಿ ಹಿರಿಯ ಎಂಜಿನಿಯರ್ ತಿಳಿಸಿರುವುದಾಗಿ ‘ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಮಾಡಿದೆ. ಬಿಎಂಆಆರ್ಸಿಎಲ್ ರಾಗಿಗುಡ್ಡದಲ್ಲಿ ಡಬಲ್ ಡೆಕ್ಕರ್ ಮೇಲ್ಸೇತುವೆಯನ್ನು ನಿರ್ಮಿಸಿದೆ. ಆದರೂ ಬನಶಂಕರಿ ವ್ಯಾಪ್ತಿಯಲ್ಲಿ ಸಂಚಾರ ದಟ್ಟಣೆ ಮುಂದುವರಿದಿದೆ. ಈ ಮಾರ್ಗದಲ್ಲಿ ಸಂಚಾರ ಸುಗಮಗೊಳಿಸಲು ಫ್ಲೈಓವರ್ ಎಕ್ಸ್‌ಪ್ರೆಸ್‌ವೇಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಎಂಜಿನಿಯರ್ ತಿಳಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ