ವೋಟರ್ ಐಡಿ ಪರಿಷ್ಕರಣೆಯಲ್ಲಿ ನಡೆದ ಅಕ್ರಮದ ಬಗ್ಗೆ ಮಾಹಿತಿ ಕಲೆ ಹಾಕಿದ ಕೇಂದ್ರ ಚುನಾವಣಾ ಆಯೋಗ
ವೋಟರ್ ಐಡಿ ಪರಿಷ್ಕರಣೆಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಕೇಂದ್ರ ಚುನಾವಣಾ ಆಯೋಗದ ಅಧಿಕಾರಿಗಳ ತಂಡ ರಾಜ್ಯಕ್ಕೆ ಭೇಟಿ ನೀಡಿ ಚರ್ಚೆ ನಡೆಸಿದೆ.
ಬೆಂಗಳೂರು: ವೋಟರ್ ಐಡಿ ಪರಿಷ್ಕರಣೆಯಲ್ಲಿ ನಡೆದ ಅಕ್ರಮ ಪ್ರಕರಣ (Voter id scam)ಸಂಬಂಧ ಕೇಂದ್ರ ಚುನಾವಣಾ ಆಯೋಗ (Election Commission of India)ದ ಅಧಿಕಾರಿಗಳ ತಂಡ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿ ಮಾಹಿತಿ ಕಲೆಹಾಕಿಕೊಂಡಿದ್ದಾರೆ. ಕಾಂಗ್ರೆಸ್ ಆರೋಪ ಬೆನ್ನಲ್ಲೇ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಜೊತೆ ಚರ್ಚೆ ನಡೆಸಿದ ಕೇಂದ್ರದ ಅಧಿಕಾರಿಗಳು, ಬೆಂಗಳೂರಿನಲ್ಲಿ ಮತದಾರರ ಖಾಸಗಿ ಮಾಹಿತಿ ಸಂಗ್ರಹ ಬಗ್ಗೆ ಸುಮಾರು ಒಂದು ಗಂಟೆಗಳ ಕಾಲ ಚರ್ಚೆ ನಡೆಸಿ ತೆರಳಿದ್ದಾರೆ.
ಮತದಾರರ ವೈಯಕ್ತಿಕ ಮಾಹಿತಿ (ದತ್ತಾಂಶ) ಕಳವು ಪ್ರಕರಣದ ಸಂಬಂಧ ಚಿಲುವೆ ಶೈಕ್ಷಣಿಕ, ಸಾಂಸ್ಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ವಿರುದ್ಧ ಹಲಸೂರುಗೇಟ್ ಮತ್ತು ಕಾಡುಗೋಡಿ ಪೊಲೀಸ್ ಠಾಣೆಗಳಲ್ಲಿ ಬಿಬಿಎಂಪಿ ದೂರು ದಾಖಲಿಸಿತ್ತು. ಮತದಾರರ ಪಟ್ಟಿವಿಶೇಷ ಪರಿಷ್ಕರಣೆ 2023 ಕಾರ್ಯಚಟುವಟಿಕೆಗಳ ಕುರಿತು ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯವನ್ನು ನಿರ್ವಹಿಸಲು ಚಿಲುಮೆ ಶೈಕ್ಷಣಿಕ ಸಾಂಕೃತಿಕ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಗೆ ಷರತ್ತುಬದ್ಧ ಅನುಮತಿಯನ್ನು ಬಿಬಿಎಂಪಿ ನೀಡಿತ್ತು.
ಇದನ್ನೂ ಓದಿ: ವೋಟರ್ ಐಡಿ ಹಗರಣ: ವಕೀಲರ ಭೇಟಿಗೆ ಬಂದು ಸಿಕ್ಕಿಬಿದ್ದ ಚಿಲುಮೆ ಮುಖ್ಯಸ್ಥ ರವಿಕುಮಾರ್, ತನಿಖೆ ಚುರುಕು
ಈ ಸಂಸ್ಥೆಯ ವಿರುದ್ಧ ಮತದಾರರ ವೈಯಕ್ತಿಕ ಮಾಹಿತಿಯನ್ನು ಸಂಗ್ರಹಿಸುತ್ತಿರುವ ಬಗ್ಗೆ ದೂರು ಬಂದಿದ್ದು ಷರತ್ತು ಉಲ್ಲಂಘಿಸಿರುವುದನ್ನು ಪರಿಗಣಿಸಿ ಅನುಮತಿ ಪತ್ರವನ್ನು ರದ್ದುಪಡಿಸಲಾಗಿದೆ. ಜೊತೆಗೆ ಈ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುವಂತೆ ಬಿಬಿಎಂಪಿ ವಿಶೇಷ ಆಯುಕ್ತ ರಂಗಪ್ಪ ಅವರು ಹಲಸೂರುಗೇಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
ಚುನಾವಣಾಧಿಕಾರಿ ಕಚೇರಿಗೆ ಪೊಲೀಸ್ ಆಯುಕ್ತ ಭೇಟಿ
ಅಕ್ರಮ ಪ್ರಕರಣ ಸಂಬಂಧ ರಾಜ್ಯ ಮುಖ್ಯ ಚುನಾವಣಾಧಿಕಾರಿ ಕಚೇರಿಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಪ್ರತಾಪ್ ರೆಡ್ಡಿ ಅವರು ಭೇಟಿ ನೀಡಿದರು. ಮತದಾರರ ಚೀಟಿ ಪರಿಷ್ಕರಣೆಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧದ ಮಾಹಿತಿ ಪಡೆಯಲು ಕೇಂದ್ರ ಚುನಾವಣೆ ಆಯೋಗದ ಅಧಿಕಾರಿಗಳು ಭೇಟಿ ನೀಡಿ ನಿರ್ಗಮಿಸಿದ ಬೆನ್ನಲ್ಲೆ ಬೆಂಗಳೂರಿನ ಶೇಷಾದ್ರಿ ರಸ್ತೆಯಲ್ಲಿರುವ ಚುನಾವಣಾಧಿಕಾರಿ ಕಚೇರಿಗೆ ಆಗಮಿಸಿ ಮುಖ್ಯ ಚುನಾವಣಾಧಿಕಾರಿ ಮೀನಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಶ್ರೀನಿವಾಸಗೌಡ ಇದ್ದರು. ಚರ್ಚೆ ನಂತರ ಪೊಲೀಸ್ ಆಯುಕ್ತರು ಮಾಧ್ಯಮದವರಿಗೆ ಯಾವುದೇ ಪ್ರತಿಕ್ರಿಯೆ ನೀಡಿದೆ ತೆರಳಿದರು.
ಕಾಂಗ್ರೆಸ್ಸಿಗರು ಯುದ್ಧಕ್ಕೆ ಬರುವ ಮುನ್ನ ಸೋಲೊಪ್ಪಿಕೊಂಡಿದ್ದಾರೆ
ಬೆಂಗಳೂರಿನಲ್ಲಿ ನಡೆದ ವೋಟರ್ ಐಡಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣ ಸಂಬಂಧ ವಿಧಾನಸೌಧದಲ್ಲಿ ಹೇಳಿಕೆ ನೀಡಿದ ಸಚಿವ ಆರ್.ಅಶೋಕ್, ಕಾಂಗ್ರೆಸ್ಸಿಗರು ಯುದ್ಧಕ್ಕೆ ಬರುವ ಮುನ್ನ ಸೋಲೊಪ್ಪಿಕೊಂಡಿದ್ದಾರೆ ಎಂದಿದ್ದಾರೆ. “ಈ ಮೊದಲು ಇವಿಎಂ ಸರಿಯಿಲ್ಲ ಎಂದು ಆರೋಪ ಮಾಡುತ್ತಿದ್ದರು. ಈಗ ಜಾಗೃತಿ ಮೂಡಿಸುವುದು ಸರಿಯಿಲ್ಲ ಎಂದು ಹೇಳುತ್ತಿದ್ದಾರೆ. ಮೀಸಲಾತಿ, ಕೆಂಪೇಗೌಡ ಪ್ರತಿಮೆ ಅನಾವರಣ ಸೇರಿದಂತೆ ನಮ್ಮ ಸರ್ಕಾರದ ಅನೇಕ ಯೋಜನೆಗಳಿಂದ ಕಾಂಗ್ರೆಸ್ ಹೆದರಿದೆ. ಚಿಲುಮೆ ಸಂಸ್ಥೆಗೆ 2013ರಿಂದಲೇ ಅನುಮತಿ ಕೊಟ್ಟಿದ್ದಾರೆ. ಆಗ ಡಿ.ಕೆ.ಶಿವಕುಮಾರ್, ಸಿದ್ದರಾಮಯ್ಯ ಏನು ಮಾಡುತ್ತಿದ್ದರು? ನಾವು ನಾಗರಿಕರಿಗೆ ಗೌರವ, ಬೆಲೆ ಕೊಡುತ್ತೇವೆ” ಎಂದರು.
ಉನ್ನತ ಮಟ್ಟದ ತನಿಖೆಗೆ ಮನವಿ ಮಾಡಿದರೆ ಪ್ರಕರಣವನ್ನು ನಾವು ಉನ್ನತ ಮಟ್ಟದ ತನಿಖೆಗೆ ಕೊಡುತ್ತೇವೆ. ಆದರೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ಕಾಂಗ್ರೆಸ್ಸಿಗರು ನಿತ್ಯ ಗಾಳಿಯಲ್ಲಿ ಗುಂಡು ಹೊಡೆಯುತ್ತಿದ್ದಾರೆ. ನಾನು ಸಚಿವ ಅಶ್ವತ್ಥ ನಾರಾಯಣ ಜೊತೆಗೂ ಮಾತಾಡಿದ್ದೇನೆ. ಆ ರೀತಿ ಯಾವುದೇ ಘಟನೆ ನಡೆದಿಲ್ಲ ಎಂದರು.
ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 4:07 pm, Tue, 22 November 22