ರಾಜ್ಯೋತ್ಸವದ ಒಳಗೆ ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ಪೂರ್ಣಗೊಳಿಸಿ: ಸುಪ್ರೀಂ
ನವೆಂಬರ್ 1 ರೊಳಗೆ ಬಿಬಿಎಂಪಿ ವಾರ್ಡ್ ಪುನರ್ವಿಂಗಡಣೆ ಪೂರ್ಣಗೊಳಿಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು. ಈ ಆದೇಶದ ನಂತರ, ವಾರ್ಡ್ ಪುನರ್ವಿಂಗಡಣೆ ಮತ್ತು ಮತದಾರರ ಪಟ್ಟಿ ತಯಾರಿಕೆ ನಡೆಯಲಿದೆ, ಹಾಗೂ ಜನವರಿ ಅಥವಾ ಫೆಬ್ರುವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆ ಇದೆ.

ಬೆಂಗಳೂರು, ಆಗಸ್ಟ್ 04: ನವೆಂಬರ್ 1 ರೊಳಗೆ ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ (BBMP ward redistribution) ಪ್ರಕ್ರಿಯೆ ಪೂರ್ಣಗೊಳಿಸಿ ಎಂದು ರಾಜ್ಯ ಸರ್ಕಾರಕ್ಕೆ (Karnataka Government) ಸುಪ್ರೀಂ ಕೋರ್ಟ್ (Supreme Court) ಕಟ್ಟುನಿಟ್ಟಿನ ಸೂಚನೆ ನೀಡಿದೆ. ಬಿಬಿಎಂಪಿಯನ್ನು 5 ಮಹಾನಗರ ಪಾಲಿಕೆಗಳಾಗಿ ವಿಂಗಡಿಸಲಾಗಿದೆ. ಹೀಗಾಗಿ, ನವೆಂಬರ್ 1 ರೊಳಗೆ ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ಪೂರ್ಣಗೊಳಿಸಿ ಎಂದು ನಿರ್ದೇಶನ ನೀಡಿದೆ. ಕರ್ನಾಟಕ ಮುನ್ಸಿಪಲ್ ಕಾರ್ಪೊರೇಷನ್ (ತಿದ್ದುಪಡಿ) ಕಾಯ್ದೆ, 2020 ರ ಅಡಿಯಲ್ಲಿ ಕಡ್ಡಾಯವಾಗಿ 243 ವಾರ್ಡ್‌ಗಳ ಬದಲಿಗೆ 198 ವಾರ್ಡ್‌ಗಳಿಗೆ ಬಿಬಿಎಂಪಿ ಚುನಾವಣೆ ನಡೆಸಬೇಕೆಂದು ಹೈಕೋರ್ಟ್ ಆದೇಶ ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿತ್ತು.
ಅರ್ಜಿ ವಿಚಾರಣೆಯನ್ನು ನಡೆಸಿದ ನ್ಯಾ. ಸೂರ್ಯಕಾಂತ್ ಅವರ ನೇತೃತ್ವದ ದ್ವಿಸದಸ್ಯ ಪೀಠ, ನವೆಂಬರ್ 1 ರೊಳಗೆ ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ಪೂರ್ಣಗೊಳಿಸಿ. ಬಳಿಕ, ವಾರ್ಡ್ ಮತದಾರರ ಪಟ್ಟಿ ರೂಪಿಸಲು ರಾಜ್ಯ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿ, ವಿಚಾರಣೆಯನ್ನು ನವೆಂಬರ್ 3ಕ್ಕೆ ಮುಂದೂಡಿದೆ.
ಈ ಹಿಂದಿನ ವಿಚಾರಣೆಯ ಸಂದರ್ಭದಲ್ಲಿ ನವೆಂಬರ್ ಅಂತ್ಯದ ಒಳಗೆ ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ಹಾಗೂ ಮೀಸಲಾತಿ ಪ್ರಕ್ರಿಯೆ ಮುಗಿಯಲಿದೆ. ಅದಕ್ಕೂ ಮುನ್ನವೂ ಈ ಪ್ರಕ್ರಿಯೆ ಮುಗಿಯುವ ಸಂಭವ ಇದೆ. ಕೋರ್ಟ್ ಸೂಚಿಸಿದರೆ ಶೀಘ್ರ ಚುನಾವಣೆ ನಡೆಸಲು ಸರ್ಕಾರ ಸಿದ್ಧ ಎಂದು ನಗರಾಭಿವೃದ್ಧಿ ಇಲಾಖೆ ಹೆಚ್ಚುವರಿ ಪ್ರಮಾಣ ಪತ್ರ ಸಲ್ಲಿಸಿತ್ತು. ಈ ಸಂಬಂಧ ರಾಜ್ಯ ಸರ್ಕಾರ ಅಫಿಡೆವಿಟ್ ಕೂಡಾ ಸಲ್ಲಿಕೆ ಮಾಡಿತ್ತು. ಚುನಾವಣಾ ಆಯೋಗ ನವೆಂಬರ್ ಬಳಿಕ ಚುನಾವಣೆ ನಡೆಸಲು ಎರಡು ತಿಂಗಳ ಸಮಯ ಕೇಳಿತ್ತು. ಈ ಹಿನ್ನೆಲೆಯಲ್ಲಿ ಜನವರಿ ಅಥವಾ ಫೆಬ್ರವರಿಯಲ್ಲಿ ಬೆಂಗಳೂರಿನ ಐದೂ ಪಾಲಿಕೆಗಳ ಚುನಾವಣೆ ನಡೆಯುವ ಸಾಧ್ಯತೆ ಇದೆ.
ಇದನ್ನೂ ನೋಡಿ: ಬಿಬಿಎಂಪಿ ಚುನಾವಣೆ ಈ ವರ್ಷ ಕಳೆಯುವುದರೊಳಗೆ ನಡೆಯಲಿವೆ: ಡಿಕೆ ಶಿವಕುಮಾರ್
ವಾದ-ಪ್ರತಿವಾದ
ನವೆಂಬರ್ 1ರೊಳಗೆ ಕ್ಷೇತ್ರ ಪುನರ್ವಿಂಗಡಣೆ ಪೂರ್ಣಗೊಳಿಸಲಾಗುವುದು. ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ಬಳಿಕ ಚುನಾವಣಾ ಪ್ರಕ್ರಿಯೆ ಆರಂಭವಾಗಲಿದೆ ಎಂದು ರಾಜ್ಯ ಸರ್ಕಾರದ ಪರ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಮಂಡಿಸಿದರು.
ಬಿಬಿಎಂಪಿ ವಾರ್ಡ್ ಪುನರ್ ವಿಂಗಡಣೆ ಬಳಿಕ ಚುನಾವಣೆ ನಡೆಸಲು 60ರಿಂದ 90 ದಿನ ಬೇಕೆಂದು ರಾಜ್ಯ ಚುನಾವಣಾ ಆಯೋಗದ ಪರ ಹಿರಿಯ ವಕೀಲ ಕೆ.ಎನ್.ಫಣೀಂದ್ರ ಪ್ರತಿವಾದಿಸಿದರು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 2:16 pm, Mon, 4 August 25



