ಬೆಂಗಳೂರು, (ಅಕ್ಟೋಬರ್ 18): ಅತ್ತಿಬೆಲೆ ಪಟಾಕಿ ಅಗ್ನಿ ದುರಂತದಲ್ಲಿ(attibele fire incident) ಗಾಯಗೊಂಡಿದ್ದ ಮತ್ತೋರ್ವ ಯುವಕ ಸಾವನ್ನಪ್ಪಿದ್ದಾನೆ. ರಾಜೇಶ್ ಎನ್ನುವ ಯುವಕ ಚಿಕಿತ್ಸೆ ಫಲಕಾರಿಯಾಗದೇ ಇಂದು (ಅಕ್ಟೋಬರ್ 18) ಬೆಂಗಳೂರಿನ (Bengaluru) ಸೆಂಟ್ ಜಾನ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾನೆ. ಇದರೊಂದಿಗೆ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಇದೇ ಅಕ್ಟೋಬರ್ 07ರಂದು ಬೆಂಗಳೂರಿನ ಅತ್ತಿಬೆಲೆಯಲ್ಲಿ ಪಟಾಕಿ ಗೋದಾಮಿನಲ್ಲಿ ಅಗ್ನಿ ದುರಂತ ಸಂಭವಿಸಿತ್ತು. ಪರಿಣಾಯಮ ಅಂದೇ 15 ಜನ ಸಜೀವ ದಹನವಾಗಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳ ಪೈಕಿ ಈಗಾಗಲೇ ವೆಂಕಟೇಶ್ ಎನ್ನುವಾತ ಮೃತಪಟ್ಟಿದ್ದ. ಇಂದು ಇನ್ನೋರ್ವ ಯುವಕ ರಾಜೇಶ್ ಸಾವನ್ನಪ್ಪಿದ್ದಾನೆ. ಈ ಮೂಲಕ ಗಾಯಗೊಂಡವರಲ್ಲಿ ಇಬ್ಬರು ಮೃತಪಟ್ಟಿದ್ದು, ಇನ್ನೋರ್ವ ಗಾಯಾಳು ಅಂಗಡಿ ಮಾಲೀಕ ನವೀನ್ ಚಿಕಿತ್ಸೆ ಪಡೆಯುತ್ತಿದ್ದಾರೆ.
ಇದನ್ನೂ ಓದಿ: ಅತ್ತಿಬೆಲೆ ಅಗ್ನಿ ದುರಂತ ಪ್ರಕರಣ: ಮ್ಯಾಜಿಸ್ಟೀರಿಯಲ್ ತನಿಖೆಗೆ ರಾಜ್ಯ ಸರ್ಕಾರ ಆದೇಶ
ಈ ಅತ್ತಿಬೆಲೆ ಪಟಾಕಿ ದುರಂತ ಪ್ರಕರಣಕ್ಕೆ ಸಬಂಧಿಸಿದಂತೆ ಈಗಾಗಲೇ ನಾಲ್ವರು ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ. ಆನೇಕಲ್ ತಾಲೂಕಿನ ಹಿಂದಿನ ತಹಶೀಲ್ದಾರ್ ಶಶಿಧರ್ ಮಾಡ್ಯಾಳ್, ಉಪ ತಹಶೀಲ್ದಾರ್ ಶ್ರೀಧರ್, ರಾಜಸ್ವ ನಿರೀಕ್ಷಕ ಅತ್ತಿಬೆಲೆ, ಗ್ರಾಮ ಆಡಳಿತಾಧಿಕಾರಿಯನ್ನು ಸೇವೆಯಿಂದ ಅಮಾನತುಗೊಳಿಸಿ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಕೃತ ಆದೇಶ ಹೊರಡಿಸಿದ್ದಾರೆ. ಅಲ್ಲದೇ ಇಲಾಖಾ ತನಿಖೆಗೆ ಆದೇಶಿಸಲಾಗಿದೆ.
ಅಲ್ಲದೇ ಅತ್ತಿಬೆಲೆ ಪಟಾಕಿ ಗೋದಾಮಿಯಲ್ಲಿ ಅಗ್ನಿ ದುರಂತ ಪ್ರಕರಣವನ್ನು ಮ್ಯಾಜಿಸ್ಟೀರಿಯಲ್ ತನಿಖೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಅಲ್ಲದೆ, ವಿಚಾರಣಾಧಿಕಾರಿಯನ್ನಾಗಿ ಹಿರಿಯ ಐಎಎಸ್ ಅಧಿಕಾರಿ, ಬೆಂಗಳೂರು ಪ್ರಾದೇಶಿಕ ಆಯುಕ್ತ ಅಮಲಾನ್ ಆದಿತ್ಯಾ ಬಿಸ್ವಾಸ್ ಅವರನ್ನು ನೇಮಿಸಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ