ಬೆಂಗಳೂರು, ಜನವರಿ 6: ಬೆಂಗಳೂರಿನಲ್ಲಿ 8 ತಿಂಗಳ ಹಾಗೂ 3 ತಿಂಗಳ ಮಗುವಿನಲ್ಲಿ ಎಚ್ಎಂಪಿವಿ (HMPV) ವೈರಸ್ ದೃಢಪಟ್ಟಿದೆ. ಮೊದಲನೆಯ ಪ್ರಕರಣದಲ್ಲಿ 8 ತಿಂಗಳ ಮಗುವಿಗೆ ಜ್ವರ ಬಂದ ಕಾರಣ ಕೆಲವು ದಿನಗಳ ಹಿಂದೆ ನಗರದ ಖಾಸಗಿ ಆಸ್ಪತ್ರೆಯಲ್ಲಿ ಅಡ್ಮಿಟ್ ಮಾಡಲಾಗಿತ್ತು. ರಕ್ತ ಪರೀಕ್ಷೆ ಮಾಡಿಸಿದಾಗ HMPV ವೈರಸ್ ಇರುವುದು ಪತ್ತೆಯಾಗಿದೆ. ಆದರೆ, ಈ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ‘ಟಿವಿ9’ಗೆ ಮಾಹಿತಿ ನೀಡಿದ್ದಾರೆ.
ಮತ್ತೊಂದು ಪ್ರಕರಣದಲ್ಲಿ, ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾದ ಮೂರು ತಿಂಗಳ ಹೆಣ್ಣು ಶಿಶುವಿನಲ್ಲಿಯೂ ವೈರಸ್ ದೃಢಪಟ್ಟಿದೆ. ಆದರೆ, ಶಿಶುವನ್ನು ಈಗಾಗಲೇ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಎಚ್ಎಂಪಿವಿ ವೈರಸ್ ಭಾರತದಲ್ಲೂ ಇದೆ. ಆದರೆ, ಅದು ಮ್ಯೂಟೆಷನ್ ಆಗಿದೆಯಾ ಎಂಬ ಬಗ್ಗೆ ಇನ್ನೂ ಸ್ಪಷ್ಟನೆ ಇಲ್ಲ. ನಮಗೆ ಚೀನಾದಲ್ಲಿ ಮ್ಯುಟೇಟ್ ಆಗಿರುವ ವೈರಸ್ ಹೇಗಿದೆ ಎಂದು ತಿಳಿದಿಲ್ಲ. ಹೀಗಾಗಿ ಇಲ್ಲಿ ಪತ್ತೆಯಾಗಿರುವುದು ಸಾಮಾನ್ಯ HMPV ವೈರಸ್ಸೇ ಅಥವಾ ಚೀನಾದ ತಳಿಯಾ ಎಂಬ ಗೊಂದಲ ಇದೆ. ಭಾರತದಲ್ಲೂ ಸಾಮಾನ್ಯ HMPV ವೈರಸ್ ಶೇ 0.78 ರಷ್ಟು ಕಾಣಿಸುತ್ತದೆ ಎಂದು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷಗುಪ್ತ ತಿಳಿಸಿದ್ದಾರೆ.
ಸದ್ಯ ಸೋಂಕು ಪತ್ತೆಯಾಗಿರುವ ಮಗುವಿಗೆ ಮತ್ತು ಕುಟುಂಬದವರಿಗೆ ಟ್ರಾವೆಲ್ ಹಿಸ್ಟರಿ ಇಲ್ಲ. ಈ ಹಿನ್ನೆಲೆಯ ಬಗ್ಗೆ ಆರೋಗ್ಯ ಇಲಾಖೆ ಕೂಡಾ ಪರಿಶೀಲನೆ ನಡೆಸುತ್ತಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹರ್ಷಗುಪ್ತ ತಿಳಿಸಿದ್ದಾರೆ.
ಮಗುವಿನಲ್ಲಿ ವೈರಸ್ ಪತ್ತೆಯಾದ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಕೇಂದ್ರ ಆರೋಗ್ಯ ಇಲಾಖೆ ಅಧಿಕಾರಿಗಳ ಜತೆ ನಿರಂತರ ಸಂಪರ್ಕದಲ್ಲಿದ್ದೇವೆ ಎಂದೂಆರೋಗ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಸೂಕ್ತ ಮುನ್ನೆಚ್ಚರಿಕೆ ವಹಿಸಿ ಎಂದು ಕೇಂದ್ರ ಆರೋಗ್ಯ ಇಲಾಖೆ ರಾಜ್ಯಕ್ಕೆ ಸೂಚಿಸಿದೆ.
ಸದ್ಯ ಚೀನಾದಲ್ಲಿ ಆತಂಕಕ್ಕೆ ಕಾರಣವಾಗಿದೆ ಎನ್ನಲಾಗಿರುವ ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್ ಅಥವಾ ಎಚ್ಎಂಪಿವಿ ಹೊಸದೇನಲ್ಲ. ಇದನ್ನು ಮೊದಲು 2001 ರಲ್ಲಿ ಕಂಡುಹಿಡಿಯಲಾಯಿತು ಎಂದು ಯುಎಸ್ ಸೆಂಟರ್ಸ್ ಫಾರ್ ಡಿಸೀಸ್ ಕಂಟ್ರೋಲ್ ಅಂಡ್ ಪ್ರಿವೆನ್ಷನ್ ಹೇಳಿದೆ. ಆದಾಗ್ಯೂ, ಕೆಲವು ಸೆರೋಲಾಜಿಕ್ ಪುರಾವೆಗಳು ವೈರಸ್ 1958 ರಿಂದಲೇ ವ್ಯಾಪಕವಾಗಿ ಹರಡಿತ್ತು ಎಂಬುದನ್ನು ನಿರೂಪಿಸಿರುವುದಾಗಿ ತಜ್ಞರು ಹೇಳಿದ್ದಾರೆ.
ಕೊರೊನಾವೈರಸ್ ಅಥವಾ COVID-19 ಒಂದು ಸಾಂಕ್ರಾಮಿಕ ಕಾಯಿಲೆಯಾಗಿದೆ. ಇದು SARS-CoV-2 ವೈರಸ್‌ನಿಂದ ಉಂಟಾಗುತ್ತದೆ. ಎಚ್ಎಂಪಿವಿ ವೈರಸ್ ಮತ್ತು ಕೊರೊನಾ ವೈರಸ್ ಕೆಲವು ರೀತಿಯಲ್ಲಿ ಹೋಲಿಕೆಯನ್ನು ಒಳಗೊಂಡಿವೆ. ಉದಾಹರಣೆಗೆ; ಎರಡೂ ವೈರಸ್‌ಗಳು ಎಲ್ಲಾ ವಯಸ್ಸಿನ ಜನರಲ್ಲಿ ಉಸಿರಾಟದ ಕಾಯಿಲೆಗೆ ಕಾರಣವಾಗುತ್ತವೆ. ಚಿಕ್ಕ ಮಕ್ಕಳು, ಹಿರಿಯ ವಯಸ್ಕರು ಮತ್ತು ದುರ್ಬಲ ರೋಗನಿರೋಧಕ ಶಕ್ತಿ ಹೊಂದಿರುವ ಜನರು ಹೆಚ್ಚು ಅಪಾಯಕ್ಕೆ ಒಳಗಾಗುತ್ತಾರೆ.
ಇದನ್ನೂ ಓದಿ: ಚೀನಾದಲ್ಲಿ ಕೊರೊನಾದಂತೇ ಹೊಸ ವೈರಸ್ ಪತ್ತೆ; ಎಚ್ಎಂಪಿವಿ ರೋಗಲಕ್ಷಣಗಳೇನು? ಹೇಗೆ ಹರಡುತ್ತೆ ತಿಳಿದುಕೊಳ್ಳಿ
ಸದ್ಯ ಎಚ್ಎಂಪಿವಿ ವೈರಸ್ ಹರಡುವಿಕೆ ತಡೆಗೆ ಯಾವುದೇ ಲಸಿಕೆ ಇಲ್ಲ. ಭಾರತದಲ್ಲಿ ಸದ್ಯ ಯಾವುದೇ ರೀತಿಯಲ್ಲಿ ಆತಂಕ ಪಡಬೇಕಾದ ಅಗತ್ಯ ಇಲ್ಲ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಕೂಡ ಹೇಳಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On - 8:56 am, Mon, 6 January 25