ಬಿಎಂಟಿಸಿ ಬಸ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ವಿಡಿಯೋ ವೈರಲ್ ಬೆನ್ನಲ್ಲೇ ಹುಳಿಮಾವು ಪೊಲೀಸರಿಂದ ಆರೋಪಿಯ ಬಂಧನ

ಬೆಂಗಳೂರಿನ ಬನ್ನೇರುಘಟ್ಟ ರಸ್ತೆಯಲ್ಲಿ ಓವರ್‌ಟೇಕ್ ವಿಚಾರಕ್ಕೆ ಬಿಎಂಟಿಸಿ ಬಸ್ ಚಾಲಕನಿಗೆ ಆಯುಧಗಳಿಂದ ಹಲ್ಲೆ ನಡೆಸಿದ್ದ ವಿಡಿಯೋ ವೈರಲ್ ಆದ ಬೆನ್ನಲ್ಲೇ, ಹುಳಿಮಾವು ಪೊಲೀಸರು ಆರೋಪಿ ಅಬ್ದುಲ್ ಶೋಯಿಬ್ ಎಂಬ ಬೈಕ್ ಮೆಕ್ಯಾನಿಕ್‌ನನ್ನು ಬಂಧಿಸಿದ್ದಾರೆ. ಉಳಿದ ಇಬ್ಬರು ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಬಿಎಂಟಿಸಿ ಬಸ್ ಚಾಲಕನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ವಿಡಿಯೋ ವೈರಲ್ ಬೆನ್ನಲ್ಲೇ ಹುಳಿಮಾವು ಪೊಲೀಸರಿಂದ ಆರೋಪಿಯ ಬಂಧನ
ಸಾಂದರ್ಭಿಕ ಚಿತ್ರ (ಎಐ)
Image Credit source: MediaForge AI

Updated on: May 20, 2026 | 11:38 AM

ಬೆಂಗಳೂರು, ಮೇ 20: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ (BMTC) ಬಸ್ ಚಾಲಕರೊಬ್ಬರ ಮೇಲೆ ರಸ್ತೆಯಲ್ಲೇ ಆಯುಧಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದ್ದ ಭೀಕರ ಘಟನೆಗೆ ಸಂಬಂಧಿಸಿದಂತೆ ಹುಳಿಮಾವು ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ, ಪ್ರಮುಖ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಬೈಕ್ ಮೆಕ್ಯಾನಿಕ್ ಆಗಿ ಕೆಲಸ ಮಾಡುತ್ತಿದ್ದ ಅಬ್ದುಲ್ ಶೋಯಿಬ್ (26) ಎಂದು ಗುರುತಿಸಲಾಗಿದೆ. ಹಲ್ಲೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆದ ಬೆನ್ನಲ್ಲೇ ತಲೆಮರೆಸಿಕೊಂಡಿದ್ದ ಈತನನ್ನು ತಾಂತ್ರಿಕ ಸಾಕ್ಷ್ಯಗಳ ಆಧಾರದ ಮೇಲೆ ಪೊಲೀಸರು ಯಶಸ್ವಿಯಾಗಿ ಪತ್ತೆಹಚ್ಚಿದ್ದಾರೆ.

ಮುಖ್ಯಾಂಶಗಳು

  • ಬನ್ನೇರುಘಟ್ಟಕ್ಕೆ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ ಚಾಲಕನ ಮೇಲೆ ಹಲ್ಲೆ ಪ್ರಕರಣ.
  • ಆರೋಪಿ ಅಬ್ದುಲ್ ಶೋಯಿಬ್​ನನ್ನು ಬಂಧಿಸಿದ ಪೊಲೀಸರು.
  • ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ಮೇ 12ರಂದು ಮಧ್ಯಾಹ್ನ 2:30ರ ಸುಮಾರಿಗೆ ಬನಶಂಕರಿಯಿಂದ ಬನ್ನೇರುಘಟ್ಟಕ್ಕೆ ಚಲಿಸುತ್ತಿದ್ದ ಬಿಎಂಟಿಸಿ ಬಸ್‌ ಅನ್ನು ಬನ್ನೇರುಘಟ್ಟ ಮುಖ್ಯರಸ್ತೆಯ ಗೊಟ್ಟಿಗೆರೆ ಬಳಿ ಬೈಕ್‌ನಲ್ಲಿ ಬಂದ ಮೂವರು ತಡೆದು, ಚಾಲಕನೊಂದಿಗೆ ಗಲಾಟೆ ತೆಗೆದಿದ್ದರು. ಆರೋಪಿಗಳು ರಸ್ತೆಯಲ್ಲೇ ಚಾಲಕನಿಗೆ ಅಶ್ಲೀಲ ಪದಗಳಿಂದ ನಿಂದಿಸಿ, ಮಾರಕಾಸ್ತ್ರಗಳನ್ನು (ಸ್ಪ್ಯಾನರ್ ಇತ್ಯಾದಿ) ತೋರಿಸಿ ಭೀತಿ ಸೃಷ್ಟಿಸಿ, ಬಸ್ ಒಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ ನಡೆಸಿದ್ದರು.

ಹಲ್ಲೆಯ ಭೀಕರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ ನಂತರ ಹುಳಿಮಾವು ಪೊಲೀಸರು ಸ್ವಯಂಪ್ರೇರಿತವಾಗಿ (Suo Motu) ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದರು.

ವಿಶೇಷ ಪಡೆಗಳಿಂದ ಕಾರ್ಯಾಚರಣೆ : ಇಬ್ಬರಿಗಾಗಿ ತಲಾಶ್

ಪ್ರಕರಣದ ಗಂಭೀರತೆಯನ್ನು ಪರಿಗಣಿಸಿ ಆರೋಪಿಗಳ ಪತ್ತೆಗಾಗಿ ಹುಳಿಮಾವು ಪೊಲೀಸರು ಮೂರು ವಿಶೇಷ ತಂಡಗಳನ್ನು ರಚಿಸಿದ್ದರು. ಮೇ 17 ರಂದು ಬಿಲ್ವರದಹಳ್ಳಿಯ ಟಿಪ್ಪು ಸರ್ಕಲ್ ಬಳಿ ಆರೋಪಿ ಅಬ್ದುಲ್ ಶೋಯಿಬ್‌ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತನಿಂದ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನ ಮತ್ತು ಹಲ್ಲೆಗೆ ಬಳಸಿದ್ದ ಸ್ಪ್ಯಾನರ್ ಅನ್ನು ವಶಪಡಿಸಿಕೊಳ್ಳಲಾಗಿದೆ.

ವಿಚಾರಣೆ ವೇಳೆ ಆರೋಪಿ, ತನ್ನ ಇಬ್ಬರು ಸಹಚರರೊಂದಿಗೆ ಸೇರಿ ಬಿಎಂಟಿಸಿ ಚಾಲಕನ ಮೇಲೆ ಹಲ್ಲೆ ನಡೆಸಿರುವುದನ್ನು ಒಪ್ಪಿಕೊಂಡಿದ್ದಾನೆ. ಮೇ 18 ರಂದು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿ ಸದ್ಯ ತಲೆಮರೆಸಿಕೊಂಡಿರುವ ಉಳಿದ ಇಬ್ಬರು ಆರೋಪಿಗಳ ಪತ್ತೆಗಾಗಿ ಪೊಲೀಸರು ಜಾಲ ಬೀಸಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
Follow Us